ಶಿಕ್ಷಣ ಇಲಾಖೆ ಸುಧಾರಿಸಲು ಆದ್ಯತೆ ನೀಡಿ

KannadaprabhaNewsNetwork |  
Published : Apr 08, 2025, 01:46 AM IST
ಚಿತ್ರ 7ಬಿಡಿಆರ್‌5: ಔರಾದ್‌ನಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಪ್ರಭು ಚವ್ಹಾಣ್‌ ಮಾತನಾಡಿದರು. | Kannada Prabha

ಸಾರಾಂಶ

ಔರಾದ್‌: ಶಾಲೆ, ಶಿಕ್ಷಣ ಇಲಾಖೆಯಲ್ಲಿನ ಅವ್ಯವಸ್ಥೆಗಳಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ್‌ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಔರಾದ್‌: ಶಾಲೆ, ಶಿಕ್ಷಣ ಇಲಾಖೆಯಲ್ಲಿನ ಅವ್ಯವಸ್ಥೆಗಳಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ್‌ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅವರು ಇಲ್ಲಿನ ತಾಲೂಕು ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರಿರುವ ಕಡೆ ಮಕ್ಕಳಿಲ್ಲ, ಮಕ್ಕಳಿರುವ ಕಡೆ ಶಿಕ್ಷಕರಿಲ್ಲ. ಬಹಳಷ್ಟು ತಾಂಡಾಗಳಿಗೆ ಶಿಕ್ಷಕರು ಹೋಗುವುದೇ ಇಲ್ಲ. ಇಂತಹ ದುಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಕ್ಷೇತ್ರದೆಲ್ಲೆಡೆ ಗ್ರಾಮ ಸಂಚಾರ ನಡೆಸಿ ಪ್ರತಿ ಶಾಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಕಣ್ಣಾರೆ ವೀಕ್ಷಿಸಿದ್ದೇನೆ. ಅಧಿಕಾರಿಗಳು ಕೂಡ ಜೊತೆಯಲ್ಲಿದ್ದರು. ಸರ್ಕಾರಿ ಶಾಲೆಗಳು ಸಮಸ್ಯೆಗಳ ಆಗರಗಳಾಗಿವೆ. ಶಿಕ್ಷಕರು ಬೋಧನೆಗಿಂತ ರಾಜಕೀಯ ಹೆಚ್ಚಾಗಿ ಮಾಡುತ್ತಿದ್ದಾರೆ. ಹೀಗಾದರೆ ಶಿಕ್ಷಣದ ಪರಿಸ್ಥಿತಿ ಏನಾಗಬಹುದೆಂದು ಕಳವಳ ವ್ಯಕ್ತಪಡಿಸಿದರು.

ಅಧಿಕಾರಿಗಳು ಇಲಾಖೆಯನ್ನು ಸುಧಾರಿಸಲು ಪ್ರಥಮ ಆದ್ಯತೆ ನೀಡಬೇಕು. ಶಿಕ್ಷಕರ ತಾರತಮ್ಯ ಸರಿಪಡಿಸಿ ಫಲಿತಾಂಶ ಸುಧಾರಣೆಗೆ ಒತ್ತು ಕೊಡಬೇಕು. ಎಲ್ಲ ಶಿಕ್ಷಕರು ತಪ್ಪದೇ ಶಾಲೆಗಳಿಗೆ ಹೋಗಿ ಪಾಠ ಮಾಡುವಂತಾಗಬೇಕು. ಶಿಕ್ಷಕರು ಮನೆ-ಮನೆಗೆ ಭೇಟಿ ನೀಡಿ ಮಕ್ಕಳ ದಾಖಲಾತಿ ಹೆಚ್ಚಿಸುವಂತೆ ಮಾಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ರಂಗೇಶ ಅವರಿಗೆ ಸೂಚಿಸಿದರು.

ಕೃಷಿ ಇಲಾಖೆಯಿಂದ ರೈತರಿಗೆ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಕಚೇರಿಯಲ್ಲಿನ ಹೊರಗುತ್ತಿಗೆ ಸಿಬ್ಬಂದಿಯಿಂದಲೇ ಅವ್ಯವಹಾರಗಳು ನಡೆಯುತ್ತಿವೆ ಮತ್ತು ತಮ್ಮವರಿಗೆ ಮಾತ್ರ ಸೌಲಭ್ಯಗಳನ್ನು ಸಿಗುವಂತೆ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಇಂಥ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಬೇಕೆಂದು ತಾಲೂಕು ಕೃಷಿ ಅಧಿಕಾರಿ ಧೂಳಪ್ಪ ಅವರಿಗೆ ತಾಕೀತು ಮಾಡಿದರು.

ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತಾಪ ಹೆಚ್ಚುತ್ತಿದೆ. ಔರಾದ್‌ (ಬಿ) ಹಾಗೂ ಕಮಲನಗರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಮಹಿಳೆಯರು ಕೊಡಗಳನ್ನು ಹಿಡಿದು ಬೀದಿ ಬೀದಿ ಅಲೆಯುವ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳು ಏನು ಮಾಡುತ್ತಿದ್ದೀರೆಂದು ಪ್ರಶ್ನಿಸಿದರು.

ಜಲ ಜೀವನ್‌ ಮಿಷನ್‌ ಪೂರ್ಣಗೊಂಡ ಸಾಕಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರ ವೈಫಲ್ಯದಿಂದಾಗಿ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಬಾವಿ ನಿರ್ಮಿಸಬೇಕೆಂಬ ನಿಯಮವಿದೆ. ಆದರೆ ಅಧಿಕಾರಿಗಳು ನಿಯಮಗಳೆಲ್ಲವನ್ನು ಗಾಳಿಗೆ ತೂರಿ ಮನಬಂದಂತೆ ಕ್ರಿಯಾಯೋಜನೆ ರೂಪಿಸಿದ್ದಾರೆ. ಇಂತಹ ಸಮಸ್ಯೆಗಳಿಂದ ಯೋಜನೆ ವಿಫಲಗೊಂಡಿದೆ ಎಂದು ಹೇಳಿದರು.

ಇದೇ ವೇಳೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್‌ ಪಾಟೀಲ್‌, ಔರಾದ್‌ (ಬಿ) ತಹಸೀಲ್ದಾರ ಮಹೇಶ ಪಾಟೀಲ್‌, ಕಮಲನಗರ ತಹಸೀಲ್ದಾರ್‌ ಅಮಿತಕುಮಾರ ಕುಲಕರ್ಣಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ, ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''