ಹೊನ್ನಳ್ಳಿ ತಾಂಡಾದಲ್ಲಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಲೋಪ-ದೋಷಗಳಿಗೆ ಅವಕಾಶ ನೀಡಬಾರದು ಎಂದು ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅಧಿಕಾರಿಗಳಿಗೆ ಸೂಚಿಸಿದರು.
ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಪಂ ವ್ಯಾಪ್ತಿಯ ಹೊನ್ನಳ್ಳಿ ತಾಂಡಾ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.ಗ್ರಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ಯೋಜನೆಯ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಇಒ, ಕಾಮಗಾರಿಗಳನ್ನು ನಿಗದಿತ ಮಾನದಂಡಗಳ ಅನುಸಾರ ಕೈಗೊಳ್ಳಬೇಕು. ಯೋಜನೆಯ ಉದ್ದೇಶಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿಕಾರ್ಮಿಕರೊಂದಿಗೆ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ನೇರವಾಗಿ ಸಮಾಲೋಚನೆ ನಡೆಸಿದರು. ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ಕೂಲಿ ಹಣ ಪಾವತಿಯಾಗುತ್ತಿದೆಯೇ? ಕೆಲಸದ ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆಯೇ? ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು.
ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ:
ಕಾಮಗಾರಿಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯೋಜನೆಗೆ ಸಂಬಂಧಿಸಿದ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವ ಜತೆಗೆ ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿರ್ದೇಶನ ನೀಡಿದರು.
ಗ್ರಾಮೀಣ ಭಾಗದ ಜನರಿಗೆ ಅವರ ವಾಸಸ್ಥಳದ ಸಮೀಪದಲ್ಲಿಯೇ ಉದ್ಯೋಗಾವಕಾಶ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಕೂಲಿಕಾರ್ಮಿಕರಿಗೆ ಆದಾಯದ ಮೂಲ ಸೃಷ್ಟಿಯಾಗುವ ಜತೆಗೆ ಗ್ರಾಮೀಣ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಲು ನೆರವಾಗಲಿದೆ.
ಲೋಪ-ದೋಷಗಳಿಗೆ ಅವಕಾಶ ನೀಡಬೇಡಿ:
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಬಾರಿಕರ ಉಪಸ್ಥಿತರಿದ್ದರು.