ಕುಡಿವ ನೀರಿನ ಅಗತ್ಯಕ್ಕೆ ಆದ್ಯತೆ ನೀಡಿ

KannadaprabhaNewsNetwork |  
Published : Nov 22, 2026, 03:00 AM IST
ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ನೇತ್ರತ್ವದಲ್ಲಿ ಕೆಡಿಪಿ ಸಭೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರಜಿಲ್ಲೆಯಲ್ಲಿ ಲಭ್ಯವಿರುವ ಜಲಾಶಯ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ನೀರಿನ ಹಂಚಿಕೆಯಲ್ಲಿ ಸಮನ್ವಯ ಸಾಧಿಸಿ, ನಿಗದಿತ ಹಂಚಿಕೆಯಂತೆ ಎಲ್ಲ ಪ್ರದೇಶಗಳಿಗೂ ಅದರಲ್ಲೂ ಕೊನೆಯ ಅಂಚಿನ ಪ್ರದೇಶಗಳಿಗೂ ಸಮರ್ಪಕವಾಗಿ ನೀರು ತಲುಪಿಸುವಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿ ಲಭ್ಯವಿರುವ ಜಲಾಶಯ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ನೀರಿನ ಹಂಚಿಕೆಯಲ್ಲಿ ಸಮನ್ವಯ ಸಾಧಿಸಿ, ನಿಗದಿತ ಹಂಚಿಕೆಯಂತೆ ಎಲ್ಲ ಪ್ರದೇಶಗಳಿಗೂ ಅದರಲ್ಲೂ ಕೊನೆಯ ಅಂಚಿನ ಪ್ರದೇಶಗಳಿಗೂ ಸಮರ್ಪಕವಾಗಿ ನೀರು ತಲುಪಿಸುವಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಕೊರತೆಯಿಂದ ನೀರಿನ ಲಭ್ಯತೆ ಕಡಿಮೆಯಾಗಿದೆ. ಪ್ರಸ್ತುತ ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹವೂ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ ನೀರಿನ ನಿರ್ವಹಣೆ ಸವಾಲಾಗಲಿದೆ. ಈ ಹಿನ್ನೆಲೆಯಲ್ಲಿ ನೀರಾವರಿ ಸಚಿವರು, ಈ ಭಾಗದ ಶಾಸಕರು, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಅವಧಿಗೆ ನೀರಿನ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕುಡಿಯುವ ನೀರಿಗೆ ಜಿಲ್ಲೆಗೆ ನಿಗದಿಪಡಿಸಿರುವ ಎರಡು ಟಿಎಂಸಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇಂಡಿ ಹಾಗೂ ನಾಗಠಾಣ ಕ್ಷೇತ್ರಗಳ ಕೆಲವು ಪ್ರದೇಶಗಳಿಗೆ ನೀರು ತಲುಪಲು ಗಮನಹರಿಸಿ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ಯಾವುದೇ ತೊಂದರೆಯಾಗದಂತೆ ನೀರು ಪೂರೈಸಬೇಕು. ಕೆರೆ ತುಂಬಿಸುವ ಯೋಜನೆಗಳನ್ನು ನಿಗದಿತ ನೀರಿನ ಹಂಚಿಕೆಯಂತೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಅರಣ್ಯ ಇಲಾಖೆಯ ಕೆಲವು ಕಾರ್ಯಗಳಿಂದ ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ನಗರ ಪ್ರದೇಶಗಳಲ್ಲಿ ನೀರು ಪೂರೈಕೆ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಬೇಕು. ಜಿಲ್ಲಾಸ್ಪತ್ರೆ ಆವರಣದಲ್ಲಿ ಗಿಡಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಇದಕ್ಕಾಗಿ ನೀರಿನ ಆಪರೇಟರ್‌ ನೇಮಿಸಿ ಸಮರ್ಪಕ ನಿರ್ವಹಣೆ ಮಾಡಬೇಕು. ನಗರದಲ್ಲಿ ಒಳಚರಂಡಿ ವ್ಯವಸ್ಥೆಯನ್ನೂ ನಿರ್ವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಲಭ್ಯವಿರುವ ನೀರನ್ನು ವ್ಯರ್ಥವಾಗದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಎಲ್ಲರಿಗೂ ಸಮಾನವಾಗಿ, ಕೊನೆ ಅಂಚಿನವರೆಗೂ ನೀರು ತಲುಪಿಸಬೇಕು. ಇಂಡಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡಬೇಕು. ಇಂಡಿ ಪಟ್ಟಣಕ್ಕೆ ಪರ್ಯಾಯ ವ್ಯವಸ್ಥೆಯ ಮೂಲಕವೂ ನೀರು ಪೂರೈಸಲು ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಕೆರೆ ತುಂಬಿಸುವ ಸಂದರ್ಭದಲ್ಲಿ ಅಧಿಕಾರಿಗಳು ನಿಗಾ ವಹಿಸಬೇಕು. ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಕೆರೆಗಳಿಗೆ ನೀರು ಹರಿಸಬೇಕು. ನಾರಾಯಣಪುರ ಜಲಾಶಯ ಆಧಾರಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಸಮರ್ಪಕವಾಗಿ ನೀರು ಪೂರೈಸಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಸಿಂದಗಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಐಸಿಸಿ ಸಭೆಯಲ್ಲಿ ನಿಗದಿಪಡಿಸಿದಂತೆ ಕೆರೆ ತುಂಬಿಸುವ ಯೋಜನೆಗಳಿಗೆ ಸಮರ್ಪಕವಾಗಿ ನೀರನ್ನು ಬಳಸಿಕೊಳ್ಳಬೇಕು. ನಿಗದಿತ ಪ್ರಮಾಣದ ನೀರು ಸದ್ಬಳಕೆಯಾಗುವಂತೆ ಅಧಿಕಾರಿಗಳು ಎಚ್ಚರವಹಿಸಿ ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಶಿವಣ್ಣ ಕೋಟಾರಗಸ್ತಿ, ನೂರಅಹ್ಮದ ಅತ್ತಾರ, ಸತೀಶಕುಮಾರ ಅಡವಿ, ಪ್ರಿಯಾಂಕ ತೊರವಿ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಪಂ ಸಿಇಒ ಆನಂದಪ್ರಕಾಶ ಮೀನಾ, ಎಸ್‌ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಲಧಾರೆ ಯೋಜನೆಯು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಮಹತ್ವದ ಯೋಜನೆಯಾಗಿದೆ. ಅರಣ್ಯ ಇಲಾಖೆಯಿಂದ ಪೈಪ್‌ಲೈನ್‌ಗಳಿಗೆ ಹಾನಿಯಾಗದಂತೆ ಹಾಗೂ ಫೆನ್ಸಿಂಗ್ ಕಾರ್ಯದಿಂದ ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕು. ವಿಜಯಪುರ ನಗರದ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಬಾವಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮ ಪಂಚಾಯತಿವಾರು ಮೇವಿನ ಲಭ್ಯತೆ ಹಾಗೂ ಕೊರತೆಯ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು.

- ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀರೇಶ್ವರ ಸಂಸ್ಥೆಗೆ ಎಕ್ಸಲೆನ್ಸ್ ಇನ್ ಬಿಸಿನೆಸ್ ಗ್ರೋತ್ ರಾಷ್ಟ್ರೀಯ ಗೌರವ
ಬಸವಣ್ಣನವರ ಅವಹೇಳನ: ಅಥಣಿಯಲ್ಲಿ ಆಕ್ರೋಶ