ಗದಗ: ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಪ್ರಥಮಾದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ವಿಡಿಯೋ ಕಾನ್ಫರನ್ಸ್ ಮೂಲಕ ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹದಿಂದ ತೊಂದರೆಗೊಳಗಾಗುವ ಗ್ರಾಮಗಳ ಸುರಕ್ಷತೆ ಕುರಿತಂತೆ ತಾಲೂಕಾಡಳಿತದೊಂದಿಗೆ ಪ್ರವಾಹ ಪರಿಸ್ಥಿತಿ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅಪಾರ ಮಳೆಯಿಂದ ಬಿದ್ದ ಮಳೆ ನೀರು ಚರಂಡಿ ಹಾಗೂ ಪ್ರಮುಖ ಕಾಲುವೆಗಳ ಮೂಲಕ ಸರಾಗವಾಗಿ ಮುಂದೆ ಸಾಗುವಂತೆ ಇರುವ ಗಿಡ ಕಂಟೆ, ಪ್ಲಾಸ್ಟಿಕ್ ತೆರವುಗೊಳಿಸಬೇಕು. ಇದರಿಂದ ವಿನಾಕಾರಣ ಮಳೆ ನೀರು ಮನೆಗಳಿಗೆ ನುಗ್ಗುವುದನ್ನು ತಡೆಯಬಹುದಾಗಿದೆ ಎಂದರು.
ನವಿಲುತೀರ್ಥ ಡ್ಯಾಂ 37.731 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು. ನವಿಲುತೀರ್ಥ ಡ್ಯಾಮಿನಿಂದ ಅಪಾರ ಪ್ರಮಾಣದ ನೀರು ಬಿಟ್ಟಲ್ಲಿ ಮುಂದಿನ 18 ಗಂಟೆಯೊಳಗಾಗಿ ನೀರು ಜಿಲ್ಲೆಗೆ ಪ್ರವೇಶ ಮಾಡಲಿದ್ದು ಡ್ಯಾಂನಿಂದ ನೀರು ಹೊರಬಿಡುವ ಮಾಹಿತಿ ದೊರೆತ ತಕ್ಷಣ ತಾಲೂಕಾಡಳಿತಗಳು ಪ್ರವಾಹ ಪೀಡಿತಕ್ಕೊಳಗಾಗುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸುವ ಮೂಲಕ ಆಗುವ ಜೀವ ಹಾನಿ ತಪ್ಪಿಸಬೇಕು ಎಂದರು.
ನವಲಗುಂದ ಸೇರಿದಂತೆ 5 ತಾಲೂಕುಗಳ ಮಳೆಯಿಂದ ಅಪಾರ ಪ್ರಮಾಣದ ನೀರು ಬೆಣ್ಣೆಹಳ್ಳ ತಲುಪಿ ಅಲ್ಲಿಂದ ಜಿಲ್ಲೆಗೆ ಒಮ್ಮಿಲೇ ನೀರು ಹರಿದು ಬರಲಿದೆ. ಇದರಿಂದ ನರಗುಂದ ಹಾಗೂ ರೋಣ ತಾಲೂಕಿನ ಹಲವು ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದ್ದು, ಈಗಾಗಲೇ ತಾಲೂಕಾಡಳಿತ ಅಂತಹ ಗ್ರಾಮಗಳನ್ನು ಗುರುತಿಸಿದೆ. ನೀರಿನ ಪ್ರಮಾಣಕ್ಕನುಗುಣವಾಗಿ ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಬೇಕು ಎಂದು ನಿರ್ದೇಶಿಸಿದರು.ಪ್ರವಾಹ ಪರಿಸ್ಥಿತಿ ತಲೆದೂರಿದಲ್ಲಿ ಅಗ್ನಿಶಾಮಕ ಇಲಾಖೆ ತಂಡ ತಕ್ಷಣ ಕಾರ್ಯಪ್ರವೃತ್ತವಾಗಬೇಕು. ತಾಲೂಕಾಡಳಿತದೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸುವ ಮೂಲಕ ಪ್ರವಾಹ ಪರಿಸ್ಥಿತಿ ನಿರ್ವಹಣೆ ಮಾಡಬೇಕು. ತಗ್ಗುಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ಗಂಗಪ್ಪ.ಎಂ ಮಾತನಾಡಿ, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಜನಜಾನುವಾರು ಸ್ಥಳಾಂತರಕ್ಕೆ ಸ್ಥಳ ಗುರುತಿಸಿಟ್ಟುಕೊಳ್ಳಲಾಗಿದೆ. ಮೊದಲು ಪ್ರವಾಹಕ್ಕಿಡಾಗುವ ಗ್ರಾಮಗಳ ಪಟ್ಟಿಯನ್ನು ಮಾಡಿಟ್ಟುಕೊಂಡಿದ್ದು ಸಂದರ್ಭಕ್ಕನುಸಾರವಾಗಿ ಸಮರ್ಪಕವಾಗಿ ಪ್ರವಾಹ ನಿರ್ವಹಣೆಗೆ ಕ್ರಮ ವಹಿಸಲಾಗುವುದು ಎಂದರು.