ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಪ್ರತಿಭಟನೆಗಳಿಂದ ಕಲಾಪಕ್ಕೆ ತೊಂದರೆಯಾಗದಂತೆ ಸಮಸ್ಯೆಗಳನ್ನು ಮೊದಲ ಹಂತದಲ್ಲಿಯೇ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದರು.
ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಪರಿಹರಿಸಬಹುದಾದ ಸಮಸ್ಯೆಗಳನ್ನು ಮೊದಲೇ ಚರ್ಚಿಸಿ ಬಗೆಹರಿಸುವಂತೆ ಸೂಚಿಸಲಾಗಿದೆ. ಅಭಿವೃದ್ಧಿ ವಿಷಯಗಳ ಕುರಿತು ಸದನದಲ್ಲಿ ಹೆಚ್ಚಿನ ಚರ್ಚೆ ನಡೆಯಬೇಕು ಎಂಬ ಉದ್ದೇಶದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಾಸಕರ ವಸತಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರ ಭವನದ ಮಾದರಿಯಲ್ಲಿ ಕಟ್ಟಡ ನಿರ್ಮಿಸುವ ಚಿಂತನೆಯಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಅಲ್ಲದೆ, ಪ್ರತಿ ತಿಂಗಳು ಒಂದು ಸದನ ಸಮಿತಿಯ ಸಭೆಯನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸುವ ಉದ್ದೇಶವಿದೆ. ಇದರಿಂದ ಸುವರ್ಣ ವಿಧಾನಸೌಧದ ನಿರಂತರ ಬಳಕೆಯ ಜತೆಗೆ ಉತ್ತರ ಕರ್ನಾಟಕದ ಆಡಳಿತಾತ್ಮಕ ಮತ್ತು ಅಭಿವೃದ್ಧಿ ವಿಚಾರಗಳಿಗೂ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂದರು.
ಚಳಿಗಾಲದ ಅಧಿವೇಶನದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಜತೆಗೆ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಒಟ್ಟಾಗಿ ಸಮಸ್ಯೆಗಳ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರ್ಥಪೂರ್ಣ ಕಲಾಪ ನಡೆಸಲು ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಹೇಳಿದರು.
ಸದನದಲ್ಲಿ ಚರ್ಚಿಸಬೇಕಾದ ಪ್ರಮುಖ ವಿಷಯಗಳನ್ನು ಸರ್ಕಾರ ಮತ್ತು ವಿರೋಧ ಪಕ್ಷಗಳ ಮುಖಂಡರೊಂದಿಗೆ ಸಮಾಲೋಚಿಸಿ ನಿರ್ಧರಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ವಿಶೇಷ ಆದ್ಯತೆ ನೀಡುವುದರ ಜತೆಗೆ ಅಭಿವೃದ್ಧಿ ವಿಚಾರಗಳ ಕುರಿತು ಸಮಗ್ರ ಚರ್ಚೆ ನಡೆಯುವಂತೆ ನೋಡಿಕೊಳ್ಳಲಾಗುವುದು. ಸದನದಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಶಾಸಕರಿಗೆ ಅನುಕೂಲವಾಗುವಂತೆ ಶಾಸಕರ ಭವನ ನಿರ್ಮಿಸುವ ಚಿಂತನೆಯೂ ಇದೆ. ಈ ಕುರಿತು ವಿಸ್ತೃತ ಚರ್ಚೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಶಾಸಕರು, ಅಧಿಕಾರಿಗಳು ಹಾಗೂ ಅಧಿವೇಶನಕ್ಕೆ ಆಗಮಿಸುವವರಿಗೆ ವಸತಿ, ಊಟೋಪಹಾರ, ಸಾರಿಗೆ, ಭದ್ರತೆ, ವಿದ್ಯುತ್ ಮತ್ತು ಅಂತರ್ಜಾಲ ವ್ಯವಸ್ಥೆ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲಾಗಿದೆ. ಈ ಬಾರಿ ಅಧಿವೇಶನದ ಜತೆಗೆ ಪುಸ್ತಕ ಮೇಳ, ಯೋಗಾಭ್ಯಾಸ ಸೇರಿದಂತೆ ಹೊಸ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಶಾಲಾ ಮಕ್ಕಳಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಸಂವಾದ ನಡೆಸುವ ಕಾರ್ಯಕ್ರಮವನ್ನೂ ರೂಪಿಸಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಅವಕಾಶ ಕಲ್ಪಿಸಲಾಗುವುದು.