ಕಾನೂನು ಸುವ್ಯವಸ್ಥೆ, ರಸ್ತೆ ಸುರಕ್ಷತೆಗೆ ಆದ್ಯತೆ: ನೂತನ ಎಸ್ಪಿ ಮಿಥುನ್ ಎಚ್.ಎನ್.

KannadaprabhaNewsNetwork |  
Published : Aug 31, 2026, 02:30 AM IST
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್.ಎಚ್.ಎನ್ | Kannada Prabha

ಸಾರಾಂಶ

ಜಿಲ್ಲೆ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ಶ್ರೀಮಂತವಾಗಿದೆ. ಜಿಲ್ಲೆಯ ವಾಸ್ತವ ಸ್ಥಿತಿ ಹಾಗೂ ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿಯನ್ನು ಅರಿಯುವ ಉದ್ದೇಶದಿಂದ ವಾರದ ಅವಧಿಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು.

ಗದಗ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರಮುಖ ಆದ್ಯತೆಯಾಗಿದ್ದು, ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. ತಿಳಿಸಿದರು.

ನಗರದ ಎಸ್‌ಪಿ ಕಚೇರಿಯಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಭಾನುವಾರ ಅಧಿಕಾರ ಸ್ವೀಕರಿಸಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಗೆ ಧಕ್ಕೆಯಾಗದಂತೆ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದರು.

ಜಿಲ್ಲೆ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ಶ್ರೀಮಂತವಾಗಿದೆ. ಜಿಲ್ಲೆಯ ವಾಸ್ತವ ಸ್ಥಿತಿ ಹಾಗೂ ಪೊಲೀಸ್ ವ್ಯವಸ್ಥೆಯ ಕಾರ್ಯವೈಖರಿಯನ್ನು ಅರಿಯುವ ಉದ್ದೇಶದಿಂದ ವಾರದ ಅವಧಿಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಆಯಾ ಪ್ರದೇಶಗಳ ಸಮಸ್ಯೆಗಳನ್ನು ಅರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಸಾಲು ಸಾಲಾಗಿ ಹಬ್ಬಗಳು ನಡೆಯಲಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಆದ್ಯತೆ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ಸುಮಾರು 500 ರೌಡಿಶೀಟರ್‌ಗಳು ಇರುವ ಮಾಹಿತಿ ಲಭ್ಯವಾಗಿದೆ. ಸಮಾಜದ ಶಾಂತಿ ಕದಡುವ ಅಥವಾ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ರೌಡಿಗಳ ಮೇಲೆ ನಿಗಾ ವಹಿಸಿ, ಅಗತ್ಯವಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಮಾಜದ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಪೊಲೀಸ್ ಇಲಾಖೆ ಬದ್ಧವಾಗಿದೆ. ಮಾದಕ ವಸ್ತುಗಳ ಜಾಲದ ಕುರಿತು ಮಾಹಿತಿ ಸಂಗ್ರಹಿಸಿ, ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವು. ಆನ್‌ಲೈನ್ ವಂಚನೆ ಪ್ರಕರಣಗಳಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು.

ಹಣ ಕಳೆದುಕೊಂಡ ತಕ್ಷಣವೇ 1930 ಸೈಬರ್ ಕ್ರೈಂ ಸಹಾಯವಾಣಿ ಸಂಖ್ಯೆಗೆ ದೂರು ನೀಡಬೇಕು. ವಂಚನೆಯಾದ ಬಳಿಕ ಆರಂಭಿಕ ಕೆಲವು ಗಂಟೆಗಳಲ್ಲೇ ದೂರು ನೀಡಿದರೆ ಹಣದ ವಹಿವಾಟನ್ನು ತಡೆಹಿಡಿಯುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಯಾವುದೇ ವಿಳಂಬ ಮಾಡದೆ ತಕ್ಷಣ ದೂರು ದಾಖಲಿಸುವಂತೆ ಅವರು ಮನವಿ ಮಾಡಿದರು.

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಪಘಾತಗಳಿಗೆ ಕಾರಣವಾಗುವ ಸ್ಥಳಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ರಸ್ತೆ ಸುರಕ್ಷತೆಗೆ ಆದ್ಯತೆ ನೀಡಲಾಗುವುದು.

ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯ. ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ಮುಕ್ತ ಮನಸ್ಸಿನಿಂದ ಪೊಲೀಸರೊಂದಿಗೆ ಹಂಚಿಕೊಳ್ಳಬಹುದು. ಸಾರ್ವಜನಿಕರು ನೀಡುವ ಮಾಹಿತಿಯ ಗೌಪ್ಯತೆಯನ್ನು ಕಾಪಾಡಲಾಗುವುದು. ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು ಎಂದರು.ಮಂಗಳೂರಲ್ಲಿ ಡಿಸಿಪಿಯಾಗಿದ್ದ ಮಿಥುನ್

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಐಪಿಎಸ್‌ ಅಧಿಕಾರಿ ಮಿಥುನ್ ಎಚ್.ಎನ್. ಅವರು ದಾವಣಗೆರೆ ಜಿಲ್ಲೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಸೇವೆ ಆರಂಭಿಸಿದ್ದರು. ಬಳಿಕ ಮಂಗಳೂರಿನಲ್ಲಿ ಸುಮಾರು ಒಂದೂವರೆ ವರ್ಷಗಳ ಕಾಲ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಖ್ಯಾಬಲ ಕಾಂಗ್ರೆಸ್‌ಗಿದ್ದರೂ ಪಿಕಾರ್ಡ್ ಬ್ಯಾಂಕ್ ಗದ್ದುಗೆ ಬಿಜೆಪಿಗೆ!
ವೈಚಾರಿಕ ಚಿಂತನೆ ಬೆಳೆಸಲು ಅಂಬೇಡ್ಕರ್ ಓದು ಪ್ರೇರಣೆ: ಜಗದೀಶ್