ಕನ್ನಡಪ್ರಭ ವಾರ್ತೆ ಹಾಸನ
ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗುವ ಮೂಲಕ ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಕೆ. ಕಮಲ್ ಕುಮಾರ್, ಶಾಲಾ ಮಕ್ಕಳಿಗೆ ಪ್ರತಿದಿನ ಪೌಷ್ಟಿಕ ಆಹಾರ ತಯಾರಿಸುವ ಅಕ್ಷರ ದಾಸೋಹ ಸಿಬ್ಬಂದಿ ಸಮಾಜದ ಆರೋಗ್ಯದ ಕಾವಲುಗಾರರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಆರೋಗ್ಯ ಸುರಕ್ಷಿತವಾಗಿದ್ದಾಗ ಮಾತ್ರ ಮಕ್ಕಳಿಗೂ ಗುಣಮಟ್ಟದ ಆಹಾರ ಒದಗಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಗರ್ಭಕೊರಳ ಹಾಗೂ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆದರೆ ಅನೇಕಮಹಿಳೆಯರು ಕುಟುಂಬದ ಜವಾಬ್ದಾರಿ, ಆರ್ಥಿಕ ಸಂಕಷ್ಟ, ಸಮಯದ ಅಭಾವ ಹಾಗೂ ಮುಜುಗರದ ಕಾರಣದಿಂದ ವೈದ್ಯರನ್ನು ಸಂಪರ್ಕಿಸಲು ಹಿಂದೇಟು ಹಾಕುತ್ತಾರೆ. ಈ ನಿರ್ಲಕ್ಷ್ಯವೇ ಹಲವು ಸಂದರ್ಭಗಳಲ್ಲಿ ಜೀವಕ್ಕೆ ಅಪಾಯ ಉಂಟುಮಾಡುತ್ತಿದೆ. ಯಾವುದೇ ಕಾಯಿಲೆಯನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿದರೆ ಸಂಪೂರ್ಣ ಗುಣಪಡಿಸಬಹುದಾದ ಸಾಧ್ಯತೆ ಹೆಚ್ಚಿರುತ್ತದೆ. ಸಾವಿರಾರು ಮಕ್ಕಳ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿರುವ ಮಾತೃಸ್ವರೂಪದ ಮಹಿಳೆಯರು. ಅವರು ಸ್ವಚ್ಛತೆಯೊಂದಿಗೆ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ಉಚಿತ ಏಪ್ರಾನ್ ಹಾಗೂ ತಲೆಗವಸು ವಿತರಿಸಲಾಗುತ್ತಿದೆ. ಇದು ಅವರ ಆರೋಗ್ಯ ರಕ್ಷಣೆ ಮಾತ್ರವಲ್ಲದೆ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ಮತ್ತಷ್ಟು ಉತ್ತಮಗೊಳಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.ಆರೋಗ್ಯ ಮತ್ತು ಶಿಕ್ಷಣವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕುಗಳಾಗಿವೆ. ಹಣವಿರುವವರಿಗೆ ಮಾತ್ರ ಉತ್ತಮ ಚಿಕಿತ್ಸೆ ದೊರೆಯುವ ಪರಿಸ್ಥಿತಿ ಬದಲಾಗಬೇಕು. ಬಡ ಮತ್ತು ಮಧ್ಯಮ ವರ್ಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಶಿಕ್ಷಣ ಸುಲಭವಾಗಿ ದೊರೆಯುವಂತಾಗಬೇಕು. ಸಮಾಜಮುಖಿ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿ ಇಂತಹ ಸೇವಾ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಸಾವಿತ್ರಿ ಹಲವು ವರ್ಷಗಳಿಂದ ಗರ್ಭಕೊರಳ ಕ್ಯಾನ್ಸರ್ ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದು, ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ, ಸಮಸ್ಯೆ ಬರುವ ಮುನ್ನವೇ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಪ್ರತಿಯೊಬ್ಬ ಮಹಿಳೆಯೂ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹಾಸನ ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ಉಚಿತ ಏಪ್ರಾನ್ ಹಾಗೂ ತಲೆಗವಸು ತರಿಸಲಾಯಿತು. ನೂರಾರು ಮಹಿಳೆಯರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ವೈದ್ಯರಿಂದ ಆರೋಗ್ಯ ಪರೀಕ್ಷೆ, ಸಲಹೆ ಹಾಗೂ ಅಗತ್ಯ ಮಾರ್ಗದರ್ಶನ ಪಡೆದುಕೊಂಡರು.