ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೆಸ್ತೂರು ಜಿಪಂ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, ರೈತರು ಮತ್ತು ಸಾರ್ವಜನಿಕರು ತಮ್ಮ ವ್ಯಾಪ್ತಿಯ ಗ್ರಾಪಂಗಳಲ್ಲಿಯೇ ನಡೆಯುವ ಕಾರ್ಯಕ್ರಮದ ಸದುಪಯೋಗ ಪಡೆದು ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು. ಇದರಿಂದ ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದರು.
ಈ ಭಾಗದ ಮಲ್ಲನಕುಪ್ಪೆ ಹಾಗೂ ಕೂಳಗೆರೆ ಗಡಿಭಾಗದ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಈಗಾಗಲೇ ಮೂರು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಶಿಂಷಾ ನದಿಗೆ ಮತ್ತಷ್ಟು ಚೆಕ್ ಡ್ಯಾಂ ನಿರ್ಮಿಸಿ, ಕೊನೆ ಭಾಗದ ರೈತರಿಗೂ ನೀರು ತಲುಪುವಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಲಾಗುವುದು. ರೈತರು ನೀರನ್ನು ಮಿತವಾಗಿ ಬಳಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಈ ಭಾಗದ ಕೆರೆಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ. ಸುಮಾರು 10 ಕೋಟಿ ರು. ವೆಚ್ಚದಲ್ಲಿ ಕೆರೆಗಳನ್ನು ತುಂಬಿಸುವ ಹಾಗೂ ಅಭಿವೃದ್ಧಿ ಪಡಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಶೀಘ್ರ ಅಗತ್ಯ ಸಂಪರ್ಕ ವ್ಯವಸ್ಥೆ ಕಲ್ಪಿಸಿ ಕೆರೆಗಳಿಗೆ ನೀರು ಹರಿಸಲಾಗುವುದು. ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ್ ಜಿ.ಎಂ.ಸೋಮಶೇಖರ್, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಶಂಕರ್, ಇಒ ಗಿರೀಶ್, ಬಿಇಒ ಧನಂಜಯ್, ಸಿಡಿಪಿಒ ಅರುಣ್ ಕುಮಾರ್, ಪಶು ವೈದ್ಯಾಧಿಕಾರಿ ಡಾ.ಗೋವಿಂದ್, ಮಾಜಿ ಗ್ರಾಪಂ ಅಧ್ಯಕ್ಷ ಸಿ.ಟಿ.ಶಂಕರ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದೂರು ರಾಮಕೃಷ್ಣ, ಮುಖಂಡರಾದ ದಾಸೇಗೌಡ, ಬಿಳಿಗೌಡ, ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.