ಬಳ್ಳಾರಿ: ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕೆ. ಮಲ್ಲಿಕಾರ್ಜುನ್ ತಿಳಿಸಿದರು.
ಹಿರಿಯ ನಾಯಕರ ಮಾರ್ಗದರ್ಶನ, ಯುವಕರ ಉತ್ಸಾಹ ಹಾಗೂ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ರಾಜ್ಯದಲ್ಲಿಯೇ ಮಾದರಿ ಸಂಘಟನೆಯನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ. ಪಕ್ಷದ ಸಂಘಟನೆಯಲ್ಲಿ ಎಲ್ಲ ವರ್ಗದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಲಾಗುವುದು. ಮುಂಬರುವ ಗ್ರಾಪಂ, ತಾಪಂ, ಜಿಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ಆರಂಭಿಸಲಾಗುವುದು. ಪಕ್ಷದ ಸಮರ್ಥ ಅಭ್ಯರ್ಥಿಗಳನ್ನು ಗೆಲ್ಲಿಸಲು ಬೂತ್ ಮಟ್ಟದಿಂದ ಸಂಘಟನೆ ಬಲಪಡಿಸಲಾಗುವುದು ಎಂದು ತಿಳಿಸಿದರು.
ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ಹಸ್ತಾಂತರ: ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ. ಹುಸೇನ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಎರಡನೇ ಬಾರಿಗೆ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಲ್ಲಂ ಪ್ರಶಾಂತ್ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕೆ. ಮಲ್ಲಿಕಾರ್ಜುನ್ ಅವರಿಗೆ ಪಕ್ಷದ ಬಾವುಟ ಹಸ್ತಾಂತರಿಸಿ ಶುಭ ಹಾರೈಸಲಾಯಿತು.ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ಎಲ್.ಸ್ವಾಮಿ, ಮಾಜಿ ಜಿಪಂ ಸದಸ್ಯ ಎ.ಮಾನಯ್ಯ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸುಲು, ಕರಿಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಾನಂದಪ್ಪ, ಕೆಪಿಸಿಸಿ ವಕ್ತಾರ ವೆಂಕಟೇಶ್ ಹೆಗಡೆ, ಬಿ.ಎಂ. ಪಾಟೀಲ್ ಸೇರಿದಂತೆ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.