ಪಾಕ್ ಪರ ಘೋಷಣೆ: ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

KannadaprabhaNewsNetwork | Published : Feb 29, 2024 2:03 AM

ಸಾರಾಂಶ

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿ಼ಂದಾಬಾದ್ ಎಂದು ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಬುಧವಾರ ಪ್ರತಿಭಟನೆ ನಡೆಸಿದ್ದು, ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲೂ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವಿನ ಬಳಿಕ ಪ್ರಜಾಪ್ರಭುತ್ವದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿ಼ಂದಾಬಾದ್ ಎಂದು ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಬುಧವಾರ ಪ್ರತಿಭಟನೆ ನಡೆಸಿದ್ದು, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲೂ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನಾಸಿರ್ ಹುಸೇನ್ ಬಂಧನಕ್ಕೆ ಆಗ್ರಹಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದರೂ ಕ್ಷಮೆ ಕೇಳದ ನಾಸಿರ್ ಹುಸೇನ್ ರಾಜ್ಯಸಭಾ ಸದಸ್ಯರಾಗಲು ಅರ್ಹರಲ್ಲ. ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು. ಈ ನೆಲದ ಮೇಲೆ ಅಭಿಮಾನ ಇದ್ದಿದ್ದರೆ ಮುಖ್ಯಮಂತ್ರಿಗಳು ದೇಶದ್ರೋಹದ ಘೋಷಣೆ ಕೂಗಿದವರ ಬಂಧನಕ್ಕೆ ಕೂಡಲೇ ಸೂಚಿಸಬೇಕಿತ್ತು. ದೇಶದ ವಿಚಾರ ಬಂದಾಗ ಪಕ್ಷಾತೀತವಾಗಿ ಎಲ್ಲರೂ ಒಂದಾಗಬೇಕು. ಆದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕೊಡಗಿನ ಶಾಸಕದ್ವಯರು ಯಾವುದೇ ಪ್ರತಿಕ್ರಿಯೆ ನೀಡದಿರುವುದು ಖಂಡನೀಯ ಎಂದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶ ಅಧೋಗತಿಯತ್ತ ಸಾಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಸುನಿಲ್ ಸುಬ್ರಮಣಿ ಹೇಳಿದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ ನಾಸಿರ್ ಹುಸೇನ್ ಅವರ ರಾಜ್ಯಸಭಾ ಸದಸ್ಯತ್ವ ಅನರ್ಹಗೊಳಿಸುವಂತೆ ಒತ್ತಾಯಿಸಿರುವ ಬಿದೇಶ ಒಡೆಯುವ ಕಾಂಗ್ರೆಸ್‌ನ ಧೋರಣೆಯನ್ನು ತೀವ್ರವಾಗಿ ಖಂಡಿಸಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ಜಿಲ್ಲಾ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಮುಖರಾದ ಮನು ಮಂಜುನಾಥ್, ಮೊಗೇರ ರವಿ, ನಗರಸಭೆ ಬಿಜೆಪಿ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Share this article