ರಾಮನಗರ: ಪಾಕಿಸ್ತಾನ ಪರ ಘೋಷಣೆ ಕೂಗಿದ ರಾಜ್ಯಸಭೆ ನೂತನ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಹಿಂದೂ ವಿರೋಧಿ ಹೇಳಿಕೆಗಳು ಹಾಗೂ ಕೃತ್ಯಗಳು ಜರುಗತ್ತಲೇ ಇದೆ. ಒಂದು ಕಡೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಸುತ್ತಿದೆ. ಮತ್ತೊಂದು ಕಡೆ ಭಾರತ ತುಂಡರಿಸುವ ಹೇಳಿಕೆ ನೀಡುತ್ತದೆ. ಇದರ ಮುಂದುವರೆದ ಭಾಗವಾಗಿ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ ಶತ್ರು ದೇಶ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂದು ದೂರಿದರು.
ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸಮ್ಮುಖದಲ್ಲಿಯೇ ಪಾಕ್ ಪರ ಘೋಷಣೆ ಕೂಗಲಾಗಿದೆ. ಆದರೂ, ಅವರು ಇದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ. ಪಾಕ್ ಪರ ಘೋಷಣೆ ಕೂಗಿದ ಗೂಂಡಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ರಾಮನಗರ ನಗರ ಮಂಡಲ ಅಧ್ಯಕ್ಷ ದರ್ಶನ್ ರೆಡ್ಡಿ ಮಾತನಾಡಿ, ಕಾಂಗ್ರೇಸ್ ನೇತೃತ್ವದ ರಾಜ್ಯ ಸರಕಾರ ಹಿಂದೂ ವಿರೋಧಿ ಹಾಗೂ ದೇಶ ವಿರೋಧಿ ಎಂಬುದು ಸಾಬೀತಾಗಿದೆ. ಇತ್ತೀಚಿಗೆ ರಾಮನಗರದಲ್ಲಿ ವಕೀಲರು ನಡೆಸಿದ ಹೋರಾಟದಲ್ಲಿ ಸರ್ಕಾರ ಹೇಗೆ ನಡೆದುಕೊಂಡಿತು ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ರಾಜಶೇಖರ್ ಮಾತನಾಡಿ, ಪಾಕ್ ಪರ ಘೋಷಣೆಯು ಕಾಂಗ್ರೆಸ್ ಮನಸ್ಥಿತಿಯನ್ನು ತಿಳಿಸುತ್ತದೆ. ದೇಶದಲ್ಲಿದ್ದುಕೊಂಡು ಪರ ದೇಶದ ಪರ ಘೋಷಣೆ ಕೂಗುವುದು ದೇಶದ್ರೋಹದ ಕೆಲಸವಾಗಲಿದ್ದು, ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
28ಕೆಆರ್ ಎಂಎನ್ 3.ಜೆಪಿಜಿ