ಕನ್ನಡಪ್ರಭ ವಾರ್ತೆ ಶಿವಮೊಗ್ಗ ನಗರದಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಬೇಕು. ಒಂದುವೇಳೆ ಮೆರವಣಿಗೆ ಹಾಗೂ ಕಾರ್ಯಕ್ರಮಗಳಿಂದ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಆಗುವುದು ಕಂಡುಬಂದರೆ ಅಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಲೇ ಬೇಡಿ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತಾಕೀತು ಮಾಡಿದರು. ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಕುರಿತು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಉಂಟಾದ ಕಲ್ಲು ತೂರಾಟ ಪ್ರಕರಣ ಬೇಸರ ತರಿಸಿದೆ ಎಂದರು. ಪ್ರಕರಣ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಇನ್ನೂ ಅಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಘಟನೆ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿ ಹತೋಟಿಗೆ ತಂದಿರುವುದು ಉತ್ತಮ ಕಾರ್ಯ. 50ರಿಂದ 60 ಜನರನ್ನು ಬಂಧಿಸಿ, 32 ಪ್ರಕರಣಗಳ ದಾಖಲಿಸಿ ಕ್ರಮ ವಹಿಸಲಾಗಿದೆ. ಆದರೆ, ಈ ರೀತಿಯ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ದಿಟ್ಟ ನಿಲುವುಗಳನ್ನು ತಳೆಯಬೇಕು ಎಂದರು. ಪ್ರಚೋದನಾಕಾರಿ ಕಟ್‍ಔಟುಗಳು, ಬ್ಯಾನರ್‌ಗಳು, ಫ್ಲೆಕ್ಸ್‌ಗಳನ್ನು ಹಾಕುವುದಕ್ಕೆ ಅವಕಾಶ ನೀಡಬಾರದು. ಹಾಕಲೇಬೇಕಾದರೆ ಒಬ್ಬ ದಕ್ಷ ಅಧಿಕಾರಿಯನ್ನು ಅದಕ್ಕಾಗಿ ನೇಮಿಸಿ ಆತ ಎಲ್ಲ ಬ್ಯಾನರ್, ಕಟೌಟ್ ಪರಿಶೀಲಿಸಿ ಯಾವುದೇ ರೀತಿಯ ಪ್ರಚೋದನಕಾರಿ ಅಂಶಗಳಿಲ್ಲ, ತೊಂದರೆ ಇಲ್ಲ ಎಂದು ವರದಿ ನೀಡಿದ ನಂತರವೇ ಅನುಮತಿ ನೀಡಬೇಕು ಎಂದು ಹೇಳಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸಲ್ಮಾ ಫಿರ್ದೋಜ್, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರೀತಿ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಆರಕ್ಷಕರು, ಇತರರು ಹಾಜರಿದ್ದರು. - - - -17ಎಸ್‌ಎಂಜಿಕೆಪಿ02: ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.