ಶಿಕ್ಷಣದಿಂದ ಪ್ರಗತಿ ಸಾಧಿಸಲು ಸಾಧ್ಯ: ಸಚಿವ ದರ್ಶನಾಪುರ

KannadaprabhaNewsNetwork |  
Published : Sep 18, 2025, 01:10 AM IST
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ, ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕವಾಯತು ಪಡೆಗಳಿಂದ ಗೌರವ ವಂದನೆ ಪ್ರದರ್ಶನ ನಡೆಯಿತು | Kannada Prabha

ಸಾರಾಂಶ

ನಮ್ಮ ಈ ಕಲ್ಯಾಣ ಕರ್ನಾಟಕ ಭಾಗ ಹಳೇ ಮೈಸೂರು ಭಾಗದಂತೆ ಪ್ರಗತಿ ಸಾಧಿಸಬೇಕು. ಇದು ಶಿಕ್ಷಣದ ಕ್ರಾಂತಿಕಾರಿ ಬದಲಾವಣೆಯಿಂದ ಮಾತ್ರ ಸಾಧ್ಯವಿದ್ದು, ಈ ದಿಸೆಯಲ್ಲಿ ಶಿಕ್ಷಕರು ಹಾಗೂ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ನಮ್ಮ ಈ ಕಲ್ಯಾಣ ಕರ್ನಾಟಕ ಭಾಗ ಹಳೇ ಮೈಸೂರು ಭಾಗದಂತೆ ಪ್ರಗತಿ ಸಾಧಿಸಬೇಕು. ಇದು ಶಿಕ್ಷಣದ ಕ್ರಾಂತಿಕಾರಿ ಬದಲಾವಣೆಯಿಂದ ಮಾತ್ರ ಸಾಧ್ಯವಿದ್ದು, ಈ ದಿಸೆಯಲ್ಲಿ ಶಿಕ್ಷಕರು ಹಾಗೂ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ, ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ವಿವಿಧ ಕವಾಯತು ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.ಸರ್ಕಾರವು ಡಾ. ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಹಾಗೂ ಸಂವಿಧಾನ ತಿದ್ದುಪಡಿ, ಕಲಂ 371 ( ಜೆ) ರನ್ವಯ ಈ ಭಾಗದ ಅಭಿವೃದ್ಧಿಗೆ 5000 ಕೋಟಿ ರು.ಗಳನ್ನು ಒದಗಿಸಿದೆ ಎಂದರು.

ಅಲ್ಲದೆ, ರಾಜ್ಯ ಸರ್ಕಾರವು ಕೂಡ ಈ ಭಾಗದ ಶಿಕ್ಷಣ, ನೀರಾವರಿ, ಆರೋಗ್ಯ, ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಇನ್ನಷ್ಟೂ ವೇಗ ನೀಡಲು ಹಾಗೂ ಮೇಲುಸ್ತುವಾರಿ ನೋಡಿಕೊಳ್ಳುವ ಉದ್ದೇಶದಿಂದ ಈಗ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಯುಕೆಪಿ: 3ನೇ ಹಂತದ ಭೂಸ್ವಾಧೀನ:

ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) 3ನೇ ಹಂತದ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಪರಿಹಾರ ನಿಗದಿ ಮಾಡಿದೆ.

ಅದರಂತೆ, ಆಲಮಟ್ಟಿ ಜಲಾಶಯ 519 ಮೀ. ರಿಂದ 524 ಮೀ.ಗೆ ಎತ್ತರಿಸುವುದರಿಂದ, ಎರಡೂವರೆ ಲಕ್ಷ ಎಕರೆ ಜಮೀನು ನೀರಾವರಿಗೆ ಒಳಪಡಲಿದೆ. ಮುಳುಗಡೆಯಾಗುವ 75,563 ಎಕರೆ ಪ್ರದೇಶದಲ್ಲಿ ರೈತರ ನೀರಾವರಿ ಭೂಮಿಗೆ ಕನಿಷ್ಠ 40 ಲಕ್ಷ ರು.ಗಳ ಪ್ರತಿ ಎಕರೆಗೆ ಹಾಗೂ ಒಣ ಭೂಮಿಗೆ ಎಕರೆಗೆ 30 ಲಕ್ಷ ರು.ಗಳ ಪಾವತಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

ಸರ್ದಾರ್‌ ಪಟೇಲರ ಆಪರೇಶನ್‌ ಪೋಲೋ

ಈಗಿನ ಕಲ್ಯಾಣ ಕರ್ನಾಟಕ ಭಾಗವು ಭಾರತ ಸ್ವಾತಂತ್ರ್ಯದ ನಂತರ ಒಂದು ವರ್ಷ, ಒಂದು ತಿಂಗಳು ಎರಡು ದಿನಗಳ ನಂತರ ವಿಳಂಬವಾಗಿ ಸ್ವಾತಂತ್ರ್ಯ ಪಡೆದಿದೆ. ಪ್ರಧಾನಿ ನೆಹರು ಅವರ ಸಂದರ್ಭದಲ್ಲಿ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು "ಆಪರೇಶನ್ ಪೋಲೋ " ಮೂಲಕ ಭಾರತದ ಒಕ್ಕೂಟಕ್ಕೆ ಆಗಿನ ಹೈದರಾಬಾದ್ ಕರ್ನಾಟಕ ಭಾಗವನ್ನು ಸೇರಿಸಲಾಯಿತು ಎಂದರು.

ಹೈದರಾಬಾದ್- ಕರ್ನಾಟಕ ವಿಮೋಚನಾ ಮುಂಚೂಣಿ ಹೋರಾಟಗಾರರಾಗಿದ್ದ ಸ್ವಾಮೀ ರಾಮಾನಂದ ತೀರ್ಥರು, ಸರ್ದಾರ್‌ ಶರಣಗೌಡ ಇನಾಮದಾರ, ಸಗರದ ಅಚ್ಚಪ್ಪಗೌಡ ಸುಬೇದಾರ್, ಸುರಪುರದ ರಾಜಾ ವೆಂಕಟಪ್ಪ ನಾಯಕ ಮುಂತಾದ ಹೋರಾಟಗಾರರು ಸ್ಮರಣೀಯರಾಗಿದ್ದಾರೆ ಎಂದು ಹೇಳಿದರು. ಗಾಂಧೀಜಿ, ಡಾ..ಬಿ.ಆರ್ ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿದರು.

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. "ಸ್ವಚ್ಛ್‌ ಭಾರತ್‌ ಹಿ ಸೇವಾ " ಅಭಿಯಾನಕ್ಕೆ, "ಸ್ವಸ್ಥ ನಾರಿ, ಸಶಕ್ತ ಪರಿವಾರ " ಅಭಿಯಾನಕ್ಕೆ ಚಾಲನೆ ನೀಡಲಾಯಿತು. ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಸಂಸದ ಜಿ. ಕುಮಾರನಾಯಕ್, ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ, ನಗರಸಭೆ ಅಧ್ಯಕ್ಷ ಲಲಿತಾ ಅನಪುರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಪಂ ಸಿಇಒ ಲವೀಶ್ ಒರಡಿಯಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ