ಸಮನ್ವಯತೆಯಿಂದ ಪ್ರಗತಿ ಸಾಧ್ಯ: ಜಿಪಂ ಸಿಇಒ ಪ್ರಭು

KannadaprabhaNewsNetwork |  
Published : Jul 19, 2024, 12:49 AM IST
ಕೊರಟಗೆರೆ ತಾಲೂಕು ಹೊಳವನಹಳ್ಳಿ ಗ್ರಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಸಭೆ ನಡೆಸಿದ ಜಿ.ಪಂ. ಸಿಇಓ ಪ್ರಭು | Kannada Prabha

ಸಾರಾಂಶ

ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಡುವಿನ ಸಮನ್ವಯತೆಯಿಂದ ಮಾತ್ರವೇ ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಹೇಳಿದರು. ತುಮಕೂರು ಕೊರಟಗೆರೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಡುವಿನ ಸಮನ್ವಯತೆಯಿಂದ ಮಾತ್ರವೇ ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಹೇಳಿದರು. ಕೊರಟಗೆರೆ ತಾಲೂಕು ಹೊಳವನಹಳ್ಳಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಭೆ ನಡೆಸಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಶಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಆದ್ಯತೆ ಮೇರೆಗೆ ಚರಂಡಿ ಕಾಮಗಾರಿಗಳನ್ನು ಅನುಷ್ಠಾನ ಮಾಡುವ ಮೂಲಕ ಸ್ವಚ್ಛತೆ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು. ಜಿಲ್ಲೆಯಲ್ಲಿ ವಸತಿ ಯೋಜನೆಯಡಿ ಜಿಲ್ಲಾಡಳಿತದಿಂದ ಮಂಜೂರಾಗಿರುವ ನಿವೇಶನಗಳನ್ನು ಅಭಿವೃದ್ಧಿಪಡಿಸುವ ಅಭಿಯಾನ ಪ್ರಾರಂಭವಾಗಿದ್ದು, ಪ್ರಸ್ತುತ ಕೊರಟಗೆರೆ ತಾಲೂಕು ಕ್ಯಾಮೇನಹಳ್ಳಿ ಗ್ರಾಮ ಪಂಚಾಯತಿ ಚಿಂಪುಗಾನಹಳ್ಳಿ, ಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ನಿವೇಶನಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ನಿವೇಶನಗಳು ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಮಾವತ್ತೂರು ಗ್ರಾಮ ಪಂಚಾಯತಿ ಲಿಂಗಾಪುರ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ಅವರು, ಕಡಿಮೆ ಫಲಿತಾಂಶ ಬರಲು ಕಾರಣರಾದ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು. ಶಿಕ್ಷಕರು ಸರಿಯಾದ ಕ್ರಮದಲ್ಲಿ ಶಿಕ್ಷಣ ನೀಡದಿದ್ದರೆ ಮಕ್ಕಳ ಭವಿಷ್ಯವನ್ನು ನೀವೇ ಹಾಳುಮಾಡಿದಂತೆ. ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ನಂತರ ಕೊರಟಗೆರೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಡಿ ನೀಡಿ ವಸತಿ, ನರೇಗಾ, ಜಲ ಜೀವನ್ ಮಿಷನ್, ಕೂಸಿನ ಮನೆ, ಹಸಿರು ಗ್ರಾಮ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಈ ವೇಳೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಜನ ಪ್ರತಿನಿಧಿಗಳು ಭಾಗಿಯಾಗಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ