ಕನ್ನಡಪ್ರಭ ವಾರ್ತೆ, ತುಮಕೂರುಹಿಂದೂ ಧರ್ಮ ಬದಲಾವಣೆಯಾಗಬೇಕು. ಜಾತಿಯ ವ್ಯವಸ್ಥೆ ದೇಶದಲ್ಲಿ ಹೋಗಬೇಕು. ಎಲ್ಲಿಯವರೆಗೆ ದೇಶದಲ್ಲಿ ಜಾತಿ ವ್ಯವಸ್ಥೆ ಹೋಗುವುದಿಲ್ಲವೋ ಅಲ್ಲಿಯವರೆಗೂ ದೇಶದ ಜನರು ಒಂದೇ ಎಂಬ ಭಾವನೆ ಬರುವುದಿಲ್ಲ ಹಾಗೂ ದೇಶದ ಪ್ರಗತಿಯೂ ಸಾಧ್ಯವಿಲ್ಲ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತುಮಕೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಹಾನಗರಪಾಲಿಕೆ ಮುಂಭಾಗದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರು 135ನೇ ಹಾಗೂ ಡಾ.ಬಾಬು ಜಗಜೀವನರಾಮ್ ಅವರ 119 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಬಾಬ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಕೊನೆ ದಿನಗಳಲ್ಲಿ ಅತ್ಯಂತ ಅಸಮಾನತೆ ಇರುವ ಹಿಂದೂ ಧರ್ಮದಲ್ಲಿ ನಾನು ಸಾಯುವುದಿಲ್ಲ ಎಂದು ಹೇಳಿ ಸಮಾನತೆಯನ್ನು ಸಾರುವ ಬೌದ್ಧ ಧರ್ಮಕ್ಕೆ ಮತಾಂತರವಾದರು. ಈ ಸಂದರ್ಭದಲ್ಲಿ ಅನೇಕರು ಟೀಕೆ ಮಾಡಿದರು. ಆದರೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿ ತಾರತಮ್ಯ ಇರುವ ಧರ್ಮದಲ್ಲಿ ಇರಲು ಬಯಸಲಿಲ್ಲ. ಈ ಹಿನ್ನೆಲೆಯಲ್ಲಿ ವೈಯಕ್ತಿಕವಾಗಿ ಹೇಳುವುದಾದರೆ ಹಿಂದೂ ಧರ್ಮ ಬದಲಾಗಬೇಕು, ಹಿಂದೂ ಧರ್ಮದಲ್ಲಿನ ಜಾತೀಯತೆ ಹೋಗಬೇಕು. ಆಗ ಮಾತ್ರ ಈ ಧರ್ಮ ಉಳಿಯಲಿದೆ ಎಂದರು. ಮಹಿಳೆಯರು ಬಾಬಾ ಸಾಹೇಬರನ್ನು ಎಂದೂ ಮರೆಯುವಂತಿಲ್ಲ ಎಂದ ಅವರು, ಮಹಿಳೆಯರಿಗೂ ಸಮಾನ ಹಕ್ಕು ಸಿಗಬೇಕೆಂಬ ಉದ್ದೇಶದಿಂದ ಹಿಂದೂ ಕೋಡ್ ಬಿಲ್ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದ್ದರು. ಆದರೆ ಇದನ್ನು ಕೆಲವು ಸಂಸದರು ವಿರೋಧಿಸಿದ್ದರಿಂದ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದಿನ ಕೇಂದ್ರ ಸರ್ಕಾರ ಈ ಮಸೂದೆಯನ್ನು ಪುನಃ ಮಂಡಿಸುತ್ತಿದೆ. ಇದನ್ನು ರಾಜ್ಯ ಸರ್ಕಾರದ ಪರವಾಗಿ ನಾವು ಸ್ವಾಗತಿಸುತ್ತೇವೆ. ಮಹಿಳೆಯರಿಗೆ ಹಾಗೂ ತಾಯಂದಿರಿಗೆ ಸಮಾನ ಹಕ್ಕು ಸಿಗಬೇಕೆಂಬುದು ಬಾಬಾ ಸಾಹೇಬರ ಪ್ರತಿಪಾದನೆ ಆಗಿತ್ತು ಎಂಬುದನ್ನು ನಾವು ಸ್ಮರಿಸಬೇಕು ಎಂದರು.
ವಿಶೇಷ ಉಪನ್ಯಾಸ ನೀಡಿದ ಸಾಹಿತಿ ಮೋಹನ್ ಚಂದ್ರಗುತ್ತಿ , ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ 10 ಮಂದಿ ವಿದ್ಯಾರ್ಥಿಗಳು,12 ಮಂದಿ ಸಾಧಕರಿಗೆ ಅಂಬೇಡ್ಕರ್ ಪ್ರಶಸ್ತಿ ಹಾಗೂ 10 ಮಂದಿ ಸಾಧಕರಿಗೆ ಡಾ: ಬಾಬು ಜಗಜೀವನರಾಂ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ವೇಳೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಸಿಇಒ ಜಿಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್, ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಚಂದ್ರಶೇಖರಗೌಡ, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ., ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಗೋಪಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ತುಮಕೂರು ಉಪ ವಿಭಾಗಾಧಿಕಾರಿ ನಾಹೀದಾ ಜಮ್ ಜಮ್, ಜಿ.ಪಂ. ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ, ಈಶ್ವರಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಸೋನಿಯಾ ವರ್ಣೇಕರ್, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನರಸಿಂಹ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.