ಬೇಡಿಕೆಗಳ ಈಡೇರಿಕೆ ಭರವಸೆ: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಅಂತ್ಯ

KannadaprabhaNewsNetwork |  
Published : Oct 05, 2024, 01:30 AM IST
ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಅಂತ್ಯ | Kannada Prabha

ಸಾರಾಂಶ

ಸರ್ಕಾರದ ಭರವಸೆಯ ಮೇರೆಗೆ ಮುಷ್ಕರ ಹಿಂಪಡೆದುಕೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು, ಅ.4ರಂದು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಸರ್ಕಾರ ನಡೆಸಿದ ಎರಡನೇ ಸುತ್ತಿನ ಮಾತುಕತೆ ಫಲಪ್ರದವಾದ ಹಿನ್ನೆಲೆ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಲು ಗ್ರಾಮ ಆಡಳಿತಾಧಿಕಾರಿಗಳು ನಿರ್ಧರಿಸಿದ್ದಾರೆ.

ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26ರಿಂದ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದರು. ಆರಂಭದಲ್ಲಿ ಸೆ.30ರಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಅವರು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಈ ಕುರಿತು ಲಿಖಿತ ಆದೇಶ ದೊರೆಯದ ಹಿನ್ನೆಲೆಯಲ್ಲಿ ಗ್ರಾಮ ಆಡಳಿತಾಕಾರಿಗಳು ಮುಷ್ಕರ ಮುಂದುವರಿಸಿದ್ದರು. ಈ ಕುರಿತು ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು.

ಇದರ ಬೆನ್ನಲ್ಲೇ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಕುರಿತು ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಅಧ್ಯಕ್ಷ ಕೃಷ್ಣಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಅವರ ಗಮನಕ್ಕೆ ತಂದಿದ್ದರು. ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದ್ದರು.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಸೂಚನೆಯಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರು ಅ.3ರಂದು ಗ್ರಾಮ ಆಡಳಿತಾಧಿಕಾರಿಗಳ ರಾಜ್ಯ, ಜಿಲ್ಲಾ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಪರಿಹರಿಸುವ ಕುರಿತು ಸರ್ಕಾರ ಭರವಸೆ ನೀಡಿರುವುದಾಗಿ ತಿಳಿಸಿದ ಪ್ರಧಾನ ಕಾರ್ಯದರ್ಶಿಯವರು, ಮುಷ್ಕರ ಹಿಂಪಡೆದುಕೊಳ್ಳುವಂತೆ ಕೇಳಿಕೊಂಡರು.

ಸರ್ಕಾರದ ಭರವಸೆಯ ಮೇರೆಗೆ ಮುಷ್ಕರ ಹಿಂಪಡೆದುಕೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು, ಅ.4ರಂದು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.ಗ್ರಾಮ ಆಡಳಿತಾಧಿಕಾರಿಗಳು ಎದುರಿಸುತ್ತಿರುವ ಹಲವಾರು ಸಮಸ್ಯೆ ಮತ್ತು ಮೂಲಭೂತ ಸೌಲಭ್ಯಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆ.26ರಿಂದ ಕರ್ತವ್ಯ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದೆವು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ನಿರ್ದೇಶನದಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ನಮ್ಮ ಬೇಡಿಕೆಗಳ ಕುರಿತು ಚರ್ಚಿಸಿದ್ದು, ಹಂತ ಹಂತವಾಗಿ ಈಡೇರಿಸುವ ಕುರಿತು ಸರ್ಕಾರದಿಂದ ಭರವಸೆ ನೀಡಿದ್ದಾರೆ. ಹೀಗಾಗಿ ಮುಷ್ಕರವನ್ನು ಕೈಬಿಟ್ಟು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದೇವೆ.। ಅಕ್ಷತಾ ಶೆಟ್ಟಿ, ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಉಪಾಧ್ಯಕ್ಷೆ ಹಾಗೂ ಕೊಡಗು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾದಾಪುರ ಸೋಮವಾರಪೇಟೆ ಹೋಬಳಿ ಕೇಂದ್ರದಿಂದ ಬೇರ್ಪಡಿಸಿ
ಸಮಾನತೆ ಸಾರಿದ ಮಡಿವಾಳ ಮಾಚಿದೇವ