ಸರ್ಕಾರಿ ಯೋಜನೆಗಳನ್ನು ಪ್ರಚುರಪಡಿಸಿ: ಎಡಿಸಿ

KannadaprabhaNewsNetwork |  
Published : Aug 15, 2025, 01:00 AM IST

ಸಾರಾಂಶ

ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳಲ್ಲಿ ಯೋಜನೆಗಳ ಬಗ್ಗೆ ಅಗತ್ಯವಾಗಿ ಪ್ರಚುರ ಪಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳಲ್ಲಿ ಯೋಜನೆಗಳ ಬಗ್ಗೆ ಅಗತ್ಯವಾಗಿ ಪ್ರಚುರ ಪಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ 1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2011 ರ ಜನಗಣತಿ ಪ್ರಕಾರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ ಹಾಗೂ ಜೈನ ಸಮುದಾಯ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 260784 ಅಲ್ಪಸಂಖ್ಯಾತರಿದ್ದು, 2025 ಕ್ಕನುಗುಣವಾಗಿ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆಯನ್ನು ಅಂದಾಜಿಸಿ ಮಾಹಿತಿ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ವಿವಿಧ ಯೋಜನೆಯಡಿ ಸೌಲಭ್ಯಗಳನ್ನು ಒದಗಿಸುವ ಒಟ್ಟು 24 ಇಲಾಖೆಗಳ ಪ್ರಗತಿ ಪರಿಶೀಲಿಸಿದ ಅವರು ಸಭೆಗೆ ಬಾರದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಬೇಕೆಂದು ಸೂಚಿಸಿದರು.

ಸಭೆಯಲ್ಲಿದ್ದ ಅಧಿಕಾರಿಗಳು ನಿದಿಷ್ಟ ಯೋಜನೆಗಳಿಗೆ ಸಂಬಂಧಿಸಿದ ಸಮರ್ಪಕ ಮಾಹಿತಿಯನ್ನು ಹೊಂದಿಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅಪರ ಜಿಲ್ಲಾಧಿಕಾರಿಗಳು, ಮುಂದಿನ ಸಭೆಗೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟಿರುವ ಆರ್ಥಿಕ ಹಾಗೂ ಭೌತಿಕ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಬೇಕು. ಅನುದಾನ ರದ್ದಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಸಮಿತಿ ಸದಸ್ಯರು ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಉರ್ದು ಭಾಷಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು. ಬೇರೆಡೆ ನಿಯೋಜಿಸಿರುವ ಉರ್ದು ಶಿಕ್ಷಕರನ್ನು ಸ್ವಸ್ಥಾನಕ್ಕೆ ತೆರಳುವಂತೆ ನಿರ್ದೇಶಿಸಬೇಕು. ನಗರದ ಈದ್ಗಾ ಮೊಹಲ್ಲಾದ ರೈಲು ಹಳಿ ಪಕ್ಕ ತಾತ್ಕಾಲಿಕವಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತರಿಗೆ ಪುನರ್ವಸತಿ ಕಲ್ಪಿಸಬೇಕೆಂದು ಸಭೆಗೆ ಮನವಿ ಮಾಡಿದರು.

ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ಶಾಲೆ ಬಿಟ್ಟ ಮಕ್ಕಳನ್ನು 7 ದಿನಗಳೊಳಗೆ ಮರಳಿ ಶಾಲೆಗೆ ದಾಖಲಾಗುವಂತೆ ಕ್ರಮಕೈಗೊಳ್ಳಬೇಕು. ಕಳಪೆ ಫಲಿತಾಂಶ ಬರುವ ಶಾಲೆಗಳ ಪಟ್ಟಿ ಮಾಡಿ ವರದಿ ಸಲ್ಲಿಸಬೇಕು ಎಂದರಲ್ಲದೆ, ಉರ್ದು ಶಾಲೆಯಲ್ಲಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ದೊರೆಯುತ್ತಿಲ್ಲವೆಂದು ಸಮಿತಿ ಸದಸ್ಯರು ದೂರು ನೀಡಿದ್ದು, ಮಕ್ಕಳಿಗೆ ಬೋಧಿಸಲು ನಿರ್ಲಕ್ಷ್ಯ ತೋರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಸೂಚನೆ ನೀಡಿದರು.

ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡುತ್ತಾ, ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಉರ್ದು ಶಿಕ್ಷಕರ ನೇಮಕಕ್ಕೆ ಕಾಲ-ಕಾಲಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ. ಖಾಲಿಯಿರುವ ಹುದ್ದೆಗಳಿಗೆ ಮಾಹೆಯಾನ 12,000 ರು.ಗಳ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಊಟ, ಮೊಟ್ಟೆ, ಬಾಳೆಹಣ್ಣು, ಸಮವಸ್ತ್ರವನ್ನು ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

2025-26ನೇ ಸಾಲಿಗೆ ಸಂಬಂಧಿಸಿದಂತೆ ರೇಷ್ಮೆ, ಕೌಶಲ್ಯಾಭಿವೃದ್ದಿ ಇಲಾಖೆ, ಕೈಮಗ್ಗ ಮತ್ತು ಜವಳಿ, ಪ್ರವಾಸೋದ್ಯಮ ಇಲಾಖೆಗಳು ಪ್ರಗತಿಯಲ್ಲಿ ಶೂನ್ಯ ಸಾಧನೆ ತೋರಿದ್ದು, ಮುಂದಿನ ತ್ರೈಮಾಸಿಕದಲ್ಲಿ ನಿಗದಿತ ಗುರಿ ಸಾಧಿಸಬೇಕೆಂದು ಸೂಚಿಸಿದರು.

ಅಲ್ಪಸಂಖ್ಯಾತ ಸಮುದಾಯಗಳ ಸಬಲೀಕರಣ ಹಾಗೂ ಆರ್ಥಿಕ ಸ್ವಾವಲಂಬನೆ ಸಾಧನೆಯ ದೃಷ್ಟಿಯಿಂದ, ಯುವಕ ಹಾಗೂ ಯುವತಿಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪ್ರಧಾನಮಂತ್ರಿ ಹೊಸ 15 ಅಂಶಗಳ ಸಮಿತಿ ಸದಸ್ಯರಾದ ಉಮೇಶ್ ಜೈನ್, ರೆಹಮತ್ ಉಲ್ಲಾ ಖಾನ್, ಮೆಹಬೂಬ್ ಪಾಷ, ಖಲೀಮುಲ್ಲಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮದ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ಸೆಂಚುರಿ ಕ್ಲಬ್‌ ಸೇರಿಯೇ ಬಿಟ್ಟಿತು ಸು ಫ್ರಂ ಸೋ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ