ಮಹಿಳಾ ಸಬಲೀಕರಣದ ಉತ್ತೇಜನ ಆದ್ಯತೆಯಾಗಲಿ

KannadaprabhaNewsNetwork |  
Published : Jan 24, 2025, 12:46 AM IST
‘ಬೇಟಿ ಬಚಾವೋ-ಬೇಟಿ ಪಡಾವೋ’ ಅಭಿಯಾನ ಹಿನ್ನಲೆಯಲ್ಲಿ ಬಳ್ಳಾರಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್.ಎನ್ ಹೊಸಮನೆ ಚಾಲನೆ ನೀಡಿದರು.  | Kannada Prabha

ಸಾರಾಂಶ

ಮಹಿಳಾ ಸಬಲೀಕರಣಕ್ಕೆ ಉತ್ತೇಜಿಸುವುದು ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ.

ಬಳ್ಳಾರಿ: ಸಮಾಜದಲ್ಲಿ ಹೆಣ್ಣಿನ ಪಾತ್ರ ಬಹಳ ಮುಖ್ಯವಾಗಿದ್ದು, ಲಿಂಗಾನುಪಾತದ ಅಂತರ ಕಡಿಮೆ ಮಾಡಿ, ಮಹಿಳಾ ಸಬಲೀಕರಣಕ್ಕೆ ಉತ್ತೇಜಿಸುವುದು ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್ ಹೊಸಮನೆ ಹೇಳಿದರು.‘ಬೇಟಿ ಬಚಾವೋ-ಬೇಟಿ ಪಡಾವೋ’ ಅಭಿಯಾನ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಬೇಕು. ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸರ್ಕಾರದಲ್ಲಿ ಹಲವಾರು ಯೋಜನೆಗಳು ಜಾರಿಯಾಗಿವೆ. ಅದನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಬೇಟಿ ಬಚಾವೋ-ಬೇಟಿ ಪಡಾವೋ’ ಯೋಜನೆಯು 2015ರ ಜ.22ರಂದು ಪ್ರಾರಂಭಿಸಲಾಯಿತು. ಹೆಣ್ಣು ಮಕ್ಕಳ ಮೇಲಿನ ತಾರತಮ್ಯ ತೊಡೆದುಹಾಕುವುದು. ಅದರ ಬಗ್ಗೆ ಜನರಲ್ಲಿರುವ ನಕಾರಾತ್ಮಕ ಮನೋಭಾವ ಬದಲಾಯಿಸುವುದು. ಹೆಚ್ಚಾಗಿ ನಡೆಯುತ್ತಿರುವ ಬಾಲ್ಯ ವಿವಾಹವನ್ನು ತಡೆಗಟ್ಟಿ ಹೆಣ್ಣು ಮಕ್ಕಳನ್ನು ರಕ್ಷಿಸುವುದು ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಕೆ.ಎಚ್. ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಲಾಲಪ್ಪ ಎ.ಕೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಮಕೃಷ್ಣ ನಾಯಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಉಪ ಪ್ರಾಚಾರ್ಯ ಎ.ಭೈರಪ್ಪ ಸೇರಿದಂತೆ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಚಿಗುರು ಕಲಾ ತಂಡದ ಹುಲುಗಪ್ಪ ಅವರ ತಂಡದಿಂದ ಬಾಲ್ಯವಿವಾಹ, ಹೆಣ್ಣುಭ್ರೂಣ ಹತ್ಯೆ ಕುರಿತ ಜಾಗೃತಿ ನಾಟಕ ಪ್ರದರ್ಶಿಸಿದರು.

ಸೈಕಲ್ ಜಾಥಾ:

ಬೇಟಿ ಬಚಾವೋ ಬೇಟಿ ಪಡಾವೋ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು. ನ್ಯಾಯಾಧೀಶ ರಾಜೇಶ್ ಎನ್.ಹೊಸಮನಿ ಹಸಿರು ನಿಶಾನೆ ತೋರಿಸುವ ಮೂಲಕ ಸೈಕಲ್ ಜಾಥಾಗೆ ಚಾಲನೆ ನೀಡಿದರು.

ಜಾಥಾವು ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಆವರಣದಿಂದ ಆರಂಭವಾಗಿ ಎಚ್.ಆರ್. ಗವಿಯಪ್ಪ ವೃತ್ತ (ಮೋತಿ ಸರ್ಕಲ್), ಗಡಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಮರಳಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಆವರಣಕ್ಕೆ ಬಂದು ಸಮಾರೋಪಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!