ಕನ್ನಡಪ್ರಭ ವಾರ್ತೆ ತುಮಕೂರುಮಲೇರಿಯಾ ರೋಗ ಕಂಡುಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮಂಜುನಾಥ್ ಹೇಳಿದರು. ನಗರದ ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸೋಂಕಿತ ಹೆಣ್ಣು ಅನಾಫಿಲೀಸ್ ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ಹರಡಲಿದೆ. ಮಲೇರಿಯಾ ರೋಗದಿಂದ ನಮ್ಮನ್ನು ಮತ್ತು ನಮ್ಮ ಕುಟುಂಬದವರನ್ನು ರಕ್ಷಿಸಿಕೊಳ್ಳಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಬಿ.ಎಂ. ಚಂದ್ರಶೇಖರ್ ಮಾತನಾಡಿ, ಈ ದಿನವನ್ನು ಮಲೇರಿಯಾ ವಿರುದ್ಧದ ಹೋರಾಟ ತೀವ್ರಗೊಳಿಸೋಣ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಸಾರ್ವಜನಿಕರು ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ನಿಂತ ನೀರಲ್ಲಿ ಸೊಳ್ಳೆ ಉತ್ಪತ್ತಿಯಾಗುವುದರಿಂದ ನೀರಿನ ಸಂಗ್ರಹವನ್ನು ಭದ್ರವಾಗಿ ಮುಚ್ಚಿಡಬೇಕು. ಮಲೇರಿಯಾ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೊಳ್ಳೆ ಪರದೆ, ಕಿಟಕಿಗಳಿಗೆ ಜಾಲರಿ ಅಳವಡಿಕೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು. ಜಾಥಾ ಕಾರ್ಯಕ್ರಮವು ನಗರದ ಟೌನ್‌ಹಾಲ್ ವೃತ್ತದಿಂದ ಅಶೋಕ ರಸ್ತೆ, ಪಾಲಿಕೆ, ಡಿಎಚ್‌ಒ ಕಚೇರಿವರೆಗೂ ಸಾಗಿ ಮಲೇರಿಯಾ ನಿಯಂತ್ರಣದ ಬಗ್ಗೆ ಅರಿವು ಮೂಡಿಸಲಾಯಿತು. ಕೀಟಶಾಸ್ತ್ರಜ್ಞ ಸಿದ್ದಪ್ಪಸ್ವಾಮಿ, ಆರೋಗ್ಯ ಮೇಲ್ವಿಚಾರಣಾಧಿಕಾರಿ ಲಕ್ಷ್ಮಿಕಾಂತಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಾಗೇಶ್, ಸತೀಶ್, ಮಂಜೇಗೌಡ, ಚಂದ್ರಶೇಖರ್, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಜಿಲ್ಲಾ ಶುಶ್ರೂಷಕ ತರಬೇತಿ ಕೇಂದ್ರದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಆಶಾ, ಮಹಿಳಾ ಆರೋಗ್ಯ ಕಾರ್ಯಕರ್ತರು ಭಾಗವಹಿಸಿದ್ದರು.