ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ ಕುರಿತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಸಚಿವ ಕೆ.ಜೆ.ಜಾರ್ಜ್, ಬೇಸಿಗೆ ನಿಭಾಯಿಸಲು ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಮತ್ತು ಅದಕ್ಕೆ ಬೇಕಾದ ಅನುದಾನದ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಈ ಪ್ರಸ್ತಾವನೆಯೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ಹೆಚ್ಚುವರಿ ಅನುದಾನ ಕೋರಿ ಮನವಿ ಸಲ್ಲಿಸ ಲಾಗು ವುದು. ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕಳೆದ ವರ್ಷದ ಬೇಸಿಗೆಯಲ್ಲಿ ಕೈಗೊಂಡ ಕಾಮ ಗಾರಿಗಳಿಗೆ ₹3.60 ಕೋಟಿ ಅನುದಾನ ಬಿಡುಗಡೆಯಾಗಬೇಕಿದೆ. ಅದೇ ರೀತಿ ಈ ಬಾರಿ ನಿರ್ವಹಣೆಗೆ ಅನುದಾನ ಬೇಕಾಗಿದೆ. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಇಲಾಖೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸ ಲಾಗುವುದು ಎಂದು ಸಚಿವರು ತಿಳಿಸಿದರು.
ಕಳೆದ ವರ್ಷ ತೀವ್ರ ಬರಗಾಲವಿದ್ದರೂ ಜಿಲ್ಲೆಯಲ್ಲಿ ಪರಿಸ್ಥಿತಿ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅದೇ ರೀತಿ ಈ ವರ್ಷವೂ ಬೇಸಿಗೆಯಲ್ಲಿ ಜನರಿಗೆ ಹೆಚ್ಚು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ನೀರು, ವಿದ್ಯುತ್ ಸೇರಿದಂತೆ ಯಾವುದೇ ರೀತಿ ಸಮಸ್ಯೆ ಬಂದರೂ ಅದನ್ನು ಬಗೆಹರಿಸಲು ಈಗಲೇ ಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದರು.ಪ್ರಸ್ತುತ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹6.23 ಕೋಟಿ ಲಭ್ಯವಿದೆ. ತುರ್ತು ಸಂದರ್ಭದಲ್ಲಿ ಈ ಹಣ ಬಳಸಿಕೊಂಡು ಸಮಸ್ಯೆಗೆ ಸ್ಪಂದಿಸಬೇಕು. ಕೆರೆಗಳ ಹೂಳೆತ್ತುವ ಕಾರ್ಯವನ್ನು ವೈಜ್ಞಾನಿಕವಾಗಿ ಕೈಗೊಂಡು ಕೆರೆಗಳನ್ನು ಸಂರಕ್ಷಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಮನ ಹರಿಸಬೇಕು ಎಂದು ಹೇಳಿದರು.