ಪ್ರತಿಯೊಬ್ಬರ ಗೌರವಿಸುವ ಮೂಲಕ ಮಾನವ ಹಕ್ಕು ಸಂರಕ್ಷಿಸಿ: ಐಶ್ವರ್ಯ

KannadaprabhaNewsNetwork | Published : Dec 11, 2024 12:46 AM

ಸಾರಾಂಶ

ಜಿಲ್ಲಾಡಳಿತ ವತಿಯಿಂದ ಮಡಿಕೇರಿ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಮಾಜದಲ್ಲಿ ಪ್ರತಿಯೊಬ್ಬರನ್ನು ಗೌರವಿಸುವ ಮೂಲಕ ಮಾನವ ಹಕ್ಕುಗಳನ್ನು ಸಂರಕ್ಷಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕರೆ ನೀಡಿದ್ದಾರೆ.

ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮನುಷ್ಯ ಜಾತಿ ತಾನೊಂದೇ ವಲಂ’ ಪಂಪ ಹೇಳಿರುವಂತೆ ಯಾವುದೇ ಜಾತಿ, ಧರ್ಮ, ಅಸಮಾನತೆ ಇಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಮಾನವ ಹಕ್ಕುಗಳನ್ನು ಉಳಿಸಿ ವಿಶ್ವ ಮಾನವರಾಗಬೇಕು ಎಂದು ಅವರು ಹೇಳಿದರು.

ಶರಣರು, ದಾಸರು ಸೇರಿದಂತೆ ಎಲ್ಲರೂ ಮಾನವ ಹಕ್ಕುಗಳ ಉಳಿವಿಗಾಗಿ ಹೋರಾಡಿದ್ದಾರೆ. ಜಾತಿ ಪದ್ಧತಿ ಮತ್ತು ಮೌಢ್ಯತೆ ನಿರ್ಮೂಲನೆಗೆ ಶ್ರಮಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸಹ ಸಂವಿಧಾನದಲ್ಲಿ ಮಾನವ ಹಕ್ಕುಗಳಿಗಾಗಿ ಹೋರಾಡಿದ್ದಾರೆ ಎಂದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಮಾತನಾಡಿ, ಜಾತಿ, ಧರ್ಮ, ಸಾಮಾಜಿಕ ಪಿಡುಗಿನ ಹೆಸರಿನಲ್ಲಿ ಬೇಧ ಭಾವವನ್ನು ಸಮಾಜದಲ್ಲಿ ಕಾಣುತ್ತೇವೆ. ಇವು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದರು.

ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಕಾಣುತ್ತೇವೆ. ಸಮಾಜದಲ್ಲಿ ಪ್ರತಿಯೊಬ್ಬರನ್ನು ಸೌಜನ್ಯದಿಂದ ಕಾಣುವ ಮೂಲಕ ಸಮಾನತೆ, ಸ್ವಾತಂತ್ರ್ಯ, ಸಹಬಾಳ್ವೆ ನಡೆಸಬೇಕು. ಶ್ರೀ ಸಾಮಾನ್ಯರು ಎಲ್ಲರೂ ಒಂದೇ ಎಂದು ಭಾವಿಸಬೇಕು ಎಂದು ಉಪ ವಿಭಾಗಾಧಿಕಾರಿ ಹೇಳಿದರು.

ಜಿಲ್ಲಾಧಿಕಾರಿ ಕಾನೂನು ಸಲಹೆಗಾರ ಲೋಕೇಶ್ ಕುಮಾರ್ ಮಾತನಾಡಿ, ಭಾರತ ಸಂವಿಧಾನದಲ್ಲಿ ಖಾತರಿ ಪಡಿಸಲಾಗಿರುವ ಜೀವನದ, ಸ್ವಾತಂತ್ರ್ಯದ, ಸಮಾನತೆ ಮತ್ತು ವ್ಯಕ್ತಿಯ ಘನತೆಯ ಹಕ್ಕುಗಳೇ ಮಾನವ ಹಕ್ಕುಗಳಾಗಿದೆ ಎಂದು ವಿವರಿಸಿದರು.

ನಗರಾಭಿವೃದ್ಧಿ ಯೋಜನಾ ಶಾಖೆ ಯೋಜನಾ ನಿರ್ದೇಶಕ ಬಸಪ್ಪ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತ ಎಚ್.ಆರ್.ರಮೇಶ್, ಪ್ರಾಂಶುಪಾಲ ಪಿ.ಎಂ.ವಿಜಯ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕ ಮಮತ, ಉಪ ವಿಭಾಗಾಧಿಕಾರಿ ಕಚೇರಿಯ ತಹಸೀಲ್ದಾರ್ ಸುಪ್ರಿತಾ, ಶಾಲಾ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಶಂಕರ, ಶಿರಸ್ತೆದಾರರಾದ ಪ್ರಕಾಶ್, ಮಧುಕರ, ಷಣ್ಮುಖ ಇತರರು ಇದ್ದರು.

Share this article