ಮಕ್ಕಳ ಹಕ್ಕು ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ. ಕಿರಣ್‌ ಎಸ್‌. ಗಂಗಣ್ಣನವರ್‌

KannadaprabhaNewsNetwork |  
Published : Mar 14, 2025, 12:34 AM IST
12ಮಕ್ಕಳು | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿ ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಸಂರಕ್ಷಣೆ ಮಾಡುವುದು ಪೋಷಕರು, ಅಧಿಕಾರಿಗಳು ಸೇರಿದಂತೆ ನಾಗರಿಕ ಸಮಾಜದ ಜವಾಬ್ದಾರಿಯಾಗಿದೆ. ಇದನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ಹೇಳಿದ್ದಾರೆ.

ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿ ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ರಕ್ಷಣಾ ಕಾಯಿದೆಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಸಾಕ್ಷ್ಯಾಧಾರ ಸಂಗ್ರಹಿಸುವ ಸಂದರ್ಭದಲ್ಲಿ ಮನಸ್ಸು ಮತ್ತು ವಿವೇಕದಿಂದ ಕೆಲಸಗಳನ್ನು ಮಾಡಬೇಕು. ಅಂತರಾತ್ಮ ಹಾಗು ಅಂತಃಚಕ್ಷುವಿನಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರತೀ ತಿಂಗಳು ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ. ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರ ಬಗೆಗಿನ ಪ್ರಕರಣಗಳಲ್ಲಿ ಸೂಕ್ಷ್ಮವಾಗಿ ಯೋಚಿಸಿ, ವಿವೇಚನೆಯಿಂದ ಕಾನೂನಿನ ಅಡಿಯಲ್ಲಿ ನಿರ್ವಹಣೆ ಮಾಡಬೇಕು. ಹೀಗಾದಾಗ ಮಾತ್ರ ನೊಂದವರಿಗೆ ನ್ಯಾಯ ಸಿಗಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಮಕ್ಕಳ ಸುತ್ತಮುತ್ತಲಿನ ಪರಿಸರವು ಅವರುಗಳ ಮೇಲೆ ಒತ್ತಡ ಹೇರುವುದರೊಂದಿಗೆ ತಪ್ಪು ಮಾಡಲು ಅನುವು ಮಾಡಿಕೊಡುತ್ತದೆ. ಈ ಸಂದರ್ಭದಲ್ಲಿ ಮಕ್ಕಳನ್ನು ಅಪರಾಧಿಗಳಂತೆ ನೋಡದೇ ಅವರುಗಳೊಂದಿಗೆ ಸೂಕ್ಷ್ಮವಾಗಿ ವರ್ತಿಸಿ, ಘಟನೆಗೆ ಕಾರಣ ತಿಳಿದು, ಅವರುಗಳು ತಪ್ಪನ್ನು ತಿದ್ದುಕೊಂಡು ಸುಧಾರಣೆ ಹೊಂದಲು ದಾರಿ ಮಾಡಿಕೊಡಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೊಣಿಲ್ ರಾಘವೇಂದ್ರ ಭಟ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಬಾಲ ನ್ಯಾಯ ಮಂಡಳಿಯ ಜಿಲ್ಲಾ ಅಧ್ಯಕ್ಷ ಮನು ಪಟೇಲ್, ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ ಸಿದ್ದಲಿಂಗಪ್ಪ ಹಾಗೂ ಪಿ.ಎ. ಹೆಗಡೆ, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ವಿವಿಧ ಠಾಣೆಗಳ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹಾಗೂ ಮತ್ತಿತರರು ಇದ್ದರು.

ಹಿರಿಯ ಮಕ್ಕಳ ಪೋಲಿಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ ಸ್ವಾಗತಿಸಿದರು. ಆರಕ್ಷಕ ಯೋಗೀಶ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''