- ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ , ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಆಂದೋಲನ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್.ಮಂಜು ಹೇಳಿದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಆಂದೋಲನ ಕುರಿತ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಂದು ಮಗುವಿಗೂ ಜನ್ಮ ಹೊಂದುವ, ಜೀವಿಸುವ, ಉತ್ತಮ ಆರೋಗ್ಯ ಸೇವೆ, ಪೌಷ್ಠಿಕ ಆಹಾರ ಪಡೆದು ದೇಶದ ಪ್ರಜೆ ಎಂದು ಗುರುತಿಸಿ ಕೊಂಡು ಬದುಕುವ ಹಕ್ಕಿದೆ. ಶಿಕ್ಷಣ ಹಾಗೂ ಸಾಮಾಜಿಕ ಭದ್ರತೆ ಮನೋರಂಜನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಕಾಸ ಹೊಂದುವ ಹಕ್ಕಿದೆ. ದಬ್ಬಾಳಿಕೆ ಹಾಗೂ ಲೈಂಗಿಕ ಕಿರುಕುಳ ಹಾಗೂ ಇತರೆ ಸಂಘರ್ಷಗಳಿಂದ ರಕ್ಷಣೆ ಪಡೆಯುವ ಹಕ್ಕುಗಳ ಜೊತೆಗೆ ಭಾಗವಹಿಸುವ ಹಕ್ಕನ್ನು ಹೊಂದಿರುತ್ತಾರೆ, ಇವುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು.ಪ್ರಸ್ತುತ ದಿನಮಾನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ಕ್ಷೀಣಿಸುವ ಜೊತೆಗೆ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗುತ್ತಿವೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ಸಾಂವಿಧಾನಿಕ ಮೂಲಭೂತ ಹಕ್ಕಾಗಿದೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಊಟ, ಸಮವಸ್ತ್ರ, ಪೌಷ್ಠಿಕ ಆಹಾರಗಳೊಂದಿಗೆ ಗುಣಮಟ್ಟ ಶಿಕ್ಷಣ ನೀಡಲಾಗುತ್ತಿದೆ. ಪೋಷಕರಲ್ಲಿ ಸರ್ಕಾರಿ ಶಾಲೆಗಳ ಮೇಲಿನ ಪೂರ್ವಾಗ್ರಹವನ್ನು ಹೋಗಲಾಡಿಸಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಕ್ಕಳು ದಾಖಲಾಗುವಂತೆ ಕ್ರಮವಹಿಸಬೇಕು ಎಂದು ಹೇಳಿದರು.ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇವುಗಳಿಂದ ರಕ್ಷಿಸಲು ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲೆಗೆ ಕರೆ ತಂದು ಸುಶಿಕ್ಷಿತರನ್ನಾಗಿ ಮಾಡಿ ಅವರ ಉತ್ತಮ ಜೀವನ ನಿರ್ವಹಣೆಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದ ಅವರು, ಶಿಕ್ಷಕರು ಮಕ್ಕಳ ಮೇಲೆ ಹೆಚ್ಚು ನಿಗಾವಹಿಸಬೇಕು ಎಂದು ತಿಳಿಸಿದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಶಿಕ್ಷಣವೇ ಶಕ್ತಿ. ಬಡತನದಿಂದ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಶಿಕ್ಷಣ ಮಕ್ಕಳ ಹಕ್ಕು, ಅವರ ಹಕ್ಕುಗಳನ್ನು ಸೂಕ್ತ ರೀತಿಯಲ್ಲಿ ಒದಗಿಸುವಲ್ಲಿ ಶಿಕ್ಷಕರು ಹಾಗೂ ಪೋಷಕರು ಹೆಚ್ಚು ಜವಾಬ್ದಾರಿ ವಹಿಸಬೇಕು. ಇತ್ತೀಚಿನ ದಿನ ಗಳಲ್ಲಿ ಮಕ್ಕಳು ಹೆಚ್ಚು ಮೊಬೈಲ್ ಬಳಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪರೋಕ್ಷವಾಗಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಕಾನೂನು ಸಂಘರ್ಷಕ್ಕೆ ಒಳಗಾಗುತ್ತಿದ್ದಾರೆ. ಇವುಗಳಿಂದ ಮಕ್ಕಳನ್ನು ರಕ್ಷಿಸಲು ಪ್ರಾರಂಭಿಕ ಹಂತದಲ್ಲಿ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರಗಳ ಜೀವನಾಧಾರಿತ ಮೌಲ್ಯ ಶಿಕ್ಷಣ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ. ಲೋಕೇಶಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜ್, ಕಾರ್ಮಿಕ ಅಧಿಕಾರಿ ಬಿ.ಸಿ. ಸುರೇಶ್, ಶಾಲಾ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಕಾಂತರಾಜ್ ಹಾಗೂ ಶಿಕ್ಷಣಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.26 ಕೆಸಿಕೆಎಂ 3ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಆಂದೋಲನ ಕುರಿತ ತರಬೇತಿ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಉದ್ಘಾಟಿಸಿದರು. ಎಸ್. ಮಂಜು, ಡಾ. ಅಶ್ವತ್ ಬಾಬು, ಪಿ. ಲೋಕೇಶಪ್ಪ, ಮಹಾಂತೇಶ್ ಭಜಂತ್ರಿ, ಕಾಂತರಾಜ್ ಇದ್ದರು.