ದೊಡ್ಡಬಳ್ಳಾಪುರ: ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಪ್ರಕರಣಗಳನ್ನು ತಡೆದು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಲಾಗಿದೆ. ಸಮಾಜದಲ್ಲಿ ಮಕ್ಕಳ ಮೇಲೆ ದೌರ್ಜನ್ಯ, ಶೋಷಣೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು . ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಹಕಾರ ದಿಂದ ಮಕ್ಕಳ ರಕ್ಷಣೆ ಸಾಧ್ಯ ಎಂದರು.
ಬಾಲ್ಯ ವಿವಾಹ ತಡೆಯಲು ಶಾಲಾ, ಕಾಲೇಜುಗಳಲ್ಲಿ, ಪಂಚಾಯಿತಿ ಮಟ್ಟದಲ್ಲಿ , ಸಾರ್ವಜನಿಕ ಸ್ಥಳಗಳಲ್ಲಿ ಅರಿವು ಮೂಡಿಸಬೇಕು. ಮಕ್ಕಳ ಭಿಕ್ಷಾಟನೆ, ಬಾಲಕಾರ್ಮಿಕ, ಶಿಕ್ಷಣ ವಂಚಿತ ಮಕ್ಕಳು, ಲೈಂಗಿಕ ದೌರ್ಜನ್ಯ, ಕಾಣೆಯಾದ ಮಕ್ಕಳು ಮುಂತಾದ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂಖ್ಯೆಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು ಎಂದು ಹೇಳಿದರು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ, ಜಿಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರಾಮು, ವಿಶ್ವನಾಥಪುರ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
7ಕೆಡಿಬಿಪಿ6- ಬೆಂ.ಗ್ರಾ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಬುಧವಾರ ನಡೆಯಿತು.