ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಹೊಣೆ

KannadaprabhaNewsNetwork | Published : Jan 13, 2024 1:33 AM

ಸಾರಾಂಶ

ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲ ಇಲಾಖೆಗಳು ಒಂದಾಗಿ ಕೆಲಸ ಮಾಡಬೇಕು. ಸಮಾಜದಲ್ಲಿ ಮೊದಲು ಅರಿವು ಮೂಡಿಸುವ ಕಾರ್ಯ ಆಗಬೇಕು.

ಹೊಸಪೇಟೆ: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಜಾಗೃತ ಸಮಾಜದ ಹೊಣೆಗಾರಿಕೆ ಆಗಿದೆ. ಹಾಗಾಗಿ ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸಲೀಂ ಪಾಷಾ ತಿಳಿಸಿದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಕ್ಕಳ ಸ್ವಯಂಸೇವಾ ಸಂಸ್ಥೆಗಳು ಮತ್ತು ಚೈತನ್ಯ ಗ್ರಾಮೀಣಾಭಿವೃದ್ಧಿ ಎಜ್ಯುಕೇಶನಲ್‌ ಟ್ರಸ್ಟ್‌ ಸಹಯೋಗದಲ್ಲಿ ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ನಡೆದ ಮಕ್ಕಳ ಪಾಲನೆ ಮತ್ತು ರಕ್ಷಣೆ ಹಾಗೂ ಸಂಬಂಧಿತ ಕಾನೂನುಗಳ ಅರಿವು ತರಬೇತಿ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲ ಇಲಾಖೆಗಳು ಒಂದಾಗಿ ಕೆಲಸ ಮಾಡಬೇಕು. ಸಮಾಜದಲ್ಲಿ ಮೊದಲು ಅರಿವು ಮೂಡಿಸುವ ಕಾರ್ಯ ಆಗಬೇಕು. ಬಾಲ್ಯವಿವಾಹ, ದೌರ್ಜನ್ಯ, ಭಿಕ್ಷಾಟನೆ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ಹಲವು ಆಯಾಮಗಳಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಬೇಕಿದೆ ಎಂದರು.

ವಕೀಲರು ಹಾಗೂ ಸಂಪನ್ಮೂಲ ವ್ಯಕ್ತಿ ಶ್ವೇತಾಂಬರಿ ಮಾತನಾಡಿ, ಬಾಲ್ಯವಿವಾಹ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಕಾಯ್ದೆಯ ಕುರಿತು ಜಾಗೃತಿ ಮೂಡಿಸಬೇಕು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಾನೂನು ಪ್ರಕಾರ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಮಕ್ಕಳ ಘಟಕದ ರಕ್ಷಣಾಧಿಕಾರಿ ಸುಭದ್ರಾದೇವಿ, ವಕೀಲರಾದ ಶ್ವೇತಾಂಬರಿ, ಮಕ್ಕಳ ಹಕ್ಕುಗಳ ಘಟಕದ ಸದಸ್ಯ ರಾಘವೇಂದ್ರ ಎಚ್‌.ಸಿ., ಚೈತನ್ಯ ಗ್ರಾಮೀಣಾಭಿವೃದ್ಧಿ ಎಜ್ಯುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷ ಯು. ಭೀಮರಾಜ್‌, ಮಕ್ಕಳ ರಕ್ಷಣಾ ಘಟಕದ ಶರಣಪ್ಪ, ಗಂಗಾಧರ್‌, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Share this article