ಕನ್ನಡಪ್ರಭ ವಾರ್ತೆ ಮದ್ದೂರು
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ ವತಿಯಿಂದ 14 ಕಿಮೀ ವ್ಯಾಪ್ತಿಯ ಮಾನವ ಸರಪಳಿ ಕಾರ್ಯಕ್ರಮಕ್ಕೆ ಜಿಲ್ಲೆಯ ಗಡಿಭಾಗ ನಿಡಘಟ್ಟದಲ್ಲಿ ಭಾನುವಾರ ಚಾಲನೆ ನೀಡಲಾಯಿತು.ಗ್ರಾಮದ ಸಮೀಪ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಸರ್ವಿಸ್ ರಸ್ತೆಯಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಡಾ. ಸ್ಮಿತಾರಾಮು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ ಅವರು ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ನಗಾರಿ ಬಾರಿಸಿ ಚಾಲನೆ ನೀಡಿದರು.
ತಹಸೀಲ್ದಾರ್ ಡಾ.ಸ್ಮಿತಾ ಮಾತನಾಡಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ಉದ್ದೇಶವೇ ಮಾನವ ಹಕ್ಕುಗಳ ರಕ್ಷಣೆಯಾಗಿದೆ. ಸ್ವಾತಂತ್ರ್ಯ ಮತ್ತು ಸಂವಿಧಾನದ ಅರಿವು ಮೂಡಿಸಲು ಹಾಗೂ ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವುದರ ಜೊತೆಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ, ಅಧಿಕಾರವರ್ಗಕ್ಕೆ ಸಂವಿಧಾನದ ಅರಿವು ಮೂಡಿಸುವ ಈ ಪ್ರಯತ್ನ ಇಡೀ ದೇಶದಲ್ಲೇ ಪ್ರಥಮ ಬಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.ನಂತರ ನಿಡಘಟ್ಟ ಗಡಿಭಾಗದಿಂದ ಬೆಂಗಳೂರು - ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆ ಮೂಲಕ ನಿಡಗಟ್ಟ, ರುದ್ರಾಕ್ಷಿ ಪುರ, ಸೋಮನಹಳ್ಳಿ ಕೈಗಾರಿಕಾ ಪ್ರದೇಶ ಸೋಮನಹಳ್ಳಿ, ಕೆಸ್ತೂರ್ ಕ್ರಾಸ್ , ಶಿವಪುರ, ಕೊಪ್ಪ ಸರ್ಕಲ್ , ಕೊಲ್ಲಿ ವೃತ್ತ, ಸಾರಿಗೆ ಬಸ್ ನಿಲ್ದಾಣ, ತಾಲೂಕ ಕಚೇರಿ, ಪ್ರವಾಸಿ ಮಂದಿರ ಮಾರ್ಗವಾಗಿ ಗೆಜ್ಜಲಗೆರೆ ಮನ್ಮುಲ್ ವರೆಗೆ ಸುಮಾರು 15 ಕಿಮೀ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖಂಡರು, ಶಾಲಾ- ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು, ಕಾರ್ಮಿಕರು ಸೇರಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.
ಜಿಪಂ ಉಪ ಕಾರ್ಯದರ್ಶಿ ಬಾಬು, ಯೋಜನಾ ನಿರ್ದೇಶಕ ಸಂಜೀವಪ್ಪ, ಗ್ರೇಡ್ 2 ತಹಸೀಲ್ದಾರ್ ಸೋಮಶೇಖರ್, ಶಿರಸ್ತೇದಾರ್ ಲಕ್ಷ್ಮೀನರಸಿಂಹ, ತಾಪಂ ಇಒ ರಾಮಲಿಂಗಯ್ಯ, ಸಹಾಯಕ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ರೇಖಾ ಇದ್ದರು.