ನಟ ಕಮಲ್‌ ಹಾಸನ್‌ ವಿರುದ್ಧ ಕರವೇ ಪ್ರತಿಭಟನೆ

KannadaprabhaNewsNetwork |  
Published : May 31, 2025, 12:49 AM ISTUpdated : May 31, 2025, 12:50 AM IST
30ಎಚ್ಎಸ್ಎನ್13 : ಕಮಲ್‌ ಹಸನ್‌ ಪ್ರತಿಕೃತಿ ಇಟ್ಟು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು. | Kannada Prabha

ಸಾರಾಂಶ

"ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು " ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರ "ಥಗ್ ಲೈಫ್ " ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯಬೇಕು ಮತ್ತು ಕೂಡಲೇ ಏಳು ಕೋಟಿ ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಮಲ್‌ ಹಾಸನ್‌ ಪ್ರತಿಕೃತಿ ಸುಟ್ಟು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

"ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು " ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರ "ಥಗ್ ಲೈಫ್ " ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯಬೇಕು ಮತ್ತು ಕೂಡಲೇ ಏಳು ಕೋಟಿ ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಮಲ್‌ ಹಾಸನ್‌ ಪ್ರತಿಕೃತಿ ಸುಟ್ಟು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಕರವೇ ನಗರಾಧ್ಯಕ್ಷ ಶಿವಣ್ಣಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ, ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆಯನ್ನು ನಟ-ರಾಜಕಾರಣಿ ಕಮಲ್ ಹಾಸನ್ ಅವರು ನೀಡಿದ್ದಾರೆ. ಈ ಸುಳ್ಳು ಮತ್ತು ಆಧಾರರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ, ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸದೆ, ತಮ್ಮ ಹೇಳಿಕೆಗೆ ಬದ್ಧರಾಗಿರುವುದು ಕನ್ನಡಿಗರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.

ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯು, ಕಮಲ್ ಹಾಸನ್ ಅವರ ಈ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ, ಅವರ ಹೊಸ ಚಿತ್ರ "ಥಗ್ ಲೈಫ್ " ಇದರ ಬಿಡುಗಡೆ ದಿನಾಂಕ ೫ ಜೂನ್‌ಗೆ ನಿಗದಿಯಾಗಿದೆ. ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ. ಆದರೆ ಕರ್ನಾಟಕದಲ್ಲಿ ಈ ಚಿತ್ರದ ಬಿಡುಗಡೆಗೆ ಯಾವುದೇ ಸಹಕಾರವನ್ನು ನೀಡದಂತೆ ವಿನಂತಿಸುತ್ತೇವೆ. ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕಮಲ್‌ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದಂತೆ ಒತ್ತಾಯಿಸಿ ನಮ್ಮ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿದ್ದೇವೆ. ಕನ್ನಡ ಭಾಷೆಯ ಸ್ವಾಭಿಮಾನವನ್ನು ಮತ್ತು ಹಿರಿಮೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಹೋರಾಟ ಮಾಡಿರುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ಕಮಲ್ ಹಾಸನ್ ಅವರ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದು ತಮ್ಮ ವಶಕ್ಕೆ ತೆಗೆದುಕೊಂಡರು. ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಉಪಾಧ್ಯಕ್ಷ ತೋಫಿಕ್ ಪಾಶಾ, ರಂಗರಾಜು, ಪ್ರದೀಪ್ ಗೌಡ, ಹರೀಶ್ ಇತರರು ಉಪಸ್ಥಿತರಿದ್ದರು.

PREV

Recommended Stories

ಮಹಾಜನ ವರದಿ ಒಪ್ಪಿ, ಇಲ್ಲದಿದ್ರೆ ಯಥಾಸ್ಥಿತಿ ಇರಲಿ
ಸೂರಿಲ್ಲದವರಿಗೆ ಸೂರು ಒದಗಿಸುವ ಸಂಕಲ್ಪ: ವಿಜಯಾನಂದ ಕಾಶಪ್ಪನವರ