ಕೇಂದ್ರದ ಜನ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

KannadaprabhaNewsNetwork | Published : Feb 20, 2024 1:46 AM

ಸಾರಾಂಶ

ಡಾ.ಸ್ವಾಮಿನಾಥನ್ ಅವರ ಶಿಫಾರಸ್ಸಿನಂತೆ ಬೆಂಬಲ ಬೆಲೆ ಎಂ.ಎಸ್.ಪಿ. ಕಾನೂನು ಜಾರಿ ಮಾಡಿಲ್ಲ. ಪರಿಣಾಮ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸಲು, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ರೈತ, ಕೂಲಿಕಾರ್ಮಿಕ, ಕಾರ್ಮಿಕರ, ದುಡಿಯುವ ಜನರ ಬೇಡಿಕೆಗಳಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲಿಸಿ ಇಂದು ಚಿತ್ತಾಪುರ ತಹಸೀಲ್ದಾರ್‌ ಕಚೇರಿ ಎದುರು ಸಿಐಟಿಯು ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಜಂಟಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಡಾ.ಸಾಯಬಣ್ಣಾ ಗುಡುಬಾ ಮಾತನಾಡಿ, ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ೧೦ ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ೨ ಕೋಟಿ ಉದ್ಯೋಗದ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ರು. ಡಾ.ಸ್ವಾಮಿನಾಥನ್ ಅವರ ಶಿಫಾರಸ್ಸಿನಂತೆ ಬೆಂಬಲ ಬೆಲೆ ಎಂ.ಎಸ್.ಪಿ. ಕಾನೂನು ಜಾರಿ ಮಾಡಿಲ್ಲ. ಪರಿಣಾಮ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜನಸಾಮಾನ್ಯರ ಕೊಂಡುಕೊಳ್ಳುವ ಸಾಮರ್ಥ್ಯವನ್ನು ಕುಗ್ಗಿಸಿ, ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ ಮತ್ತು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಿಸಿ, ಜನರಿಗೆ ೨೭೦೦ ಕ್ಯಾಲೋರಿ ಆಹಾರ ಪ್ರತಿದಿನ ಸಿಗದ ಪರಿಣಾಮ ಇಂದು ಭಾರತ ಹಸಿವಿನ ಸೂಚ್ಯಾಂಕದಲ್ಲಿ ೩ನೇ ಸ್ಥಾನಕ್ಕೆ ಕುಸಿದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ಅಂಗನವಾಡಿ ನೌಕರರ ಸಂಘದ ದೇವಮ್ಮ ಅನ್ನದಾನಿ ಮಾತನಾಡಿ, ಸಾರ್ವಜನಿಕ ಕೈಗಾರಿಕೆಗಳನ್ನು ಖಾಸಗೀಕರಿಸಿದ್ದಲ್ಲದೇ ಸರ್ಕಾರದ ಆಸ್ತಿಯನ್ನು ಓಓಪಿ ಯ ಮುಖಾಂತರ ಖಾಸಗೀಯವರಿಗೆ ದಾನ ಮಾಡಿದರೆ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಲು ಸಾದ್ಯವಿದೆಯಾ? ದೇಶಕ್ಕೆ ಅನ್ನ ನೀಡುವ ರೈತ ಬೆಳೆದ ಬೆಳೆಗಳಿಗೆ ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಬೆಂಬಲ ಬೆಲೆಗೆ ಕಾನೂನು ತರುವ ಬದಲು ರೈತನನ್ನು ಬಲಿ ತೆಗೆದು ಕೊಳ್ಳುವ ನೀತಿ ರೈತರ ಬದುಕಿಗೆ ಕೊಳ್ಳಿ ಇಟ್ಟಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಕಿಡಿ ಕಾರಿದರು.

೩ರಿಂದ ೬ ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಕೊಡಲು ಕಾನೂನು ರೂಪಿಸಬೇಕು. ೪೯ ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು ೨೦ ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ ೩೧ ಸಾವಿರ ರು. ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕನಿಷ್ಟ ೧೦ ಸಾವಿರ ರು. ಪಿಂಚಣಿ ಕೊಡಬೇಕು. ೨೯ ಕಾರ್ಮಿಕ ಕಾನೂನುಗಳ ಸಂಹಿತೆಗಳಾಗಿ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು. ಬರ ಪೀಡಿತ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಚಂದ್ರಭಾಗ ಮಲಗಣ, ರೂಭಿನಾ ಕಲಗರ‍್ತಿ, ರಾಜೇಶ್ವರಿ ಪಾಟೀಲ, ಭಾಗಮ್ಮ ತಳವಾರ, ಪದ್ಮಾವತಿ ಠಾಣಗುಂದಿ, ಕಾಶಮ್ಮ ಚೌರಿ, ರಾಜೇಶ್ವರಿ ಕರದಾಳ, ಶರಣಮ್ಮ ಹಣ್ಣಿಕೇರಾ, ಮಲ್ಲಮ್ಮ ತೊನಸನಳ್ಳಿ, ಅಶೋಕ ರಾಠೋಡ, ನಿರ್ಮಲಾ, ಇತರರು ಇದ್ದರು.

Share this article