ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

KannadaprabhaNewsNetwork | Published : Jan 4, 2024 1:45 AM

ಸಾರಾಂಶ

ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕರ್ತವ್ಯ ಬಹಿಷ್ಕರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ.ತಹಸೀಲ್ದಾರ್, ಡಿವೈಎಸ್ಪಿ ಮಧ್ಯಸ್ಥಿಕೆಯಲ್ಲಿ ಸಂಧಾನ ಯಶಸ್ವಿಯಾಯಿತು.

ಕನ್ನಡಪ್ರಭ ವಾರ್ತೆ ಅಥಣಿ

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿಯ ಮೇಲೆ ಬೇವನೂರು ಗ್ರಾಮದ ವ್ಯಕ್ತಿಯಿಂದ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಬುಧವಾರ ಅಥಣಿ ಮತ್ತು ಕಾಗವಾಡ ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ, ಅಥಣಿ ಸಾರ್ವಜನಿಕ ಆಸ್ಪತ್ರೆಯ ಎಲ್ಲ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಕರ್ತವ್ಯ ಬಹಿಷ್ಕರಿಸಿ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟಿಸಿದರು.

ಮಂಗಳವಾರ ರಾತ್ರಿ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರೋಗಿಯ ಚಿಕಿತ್ಸೆಗೆ ಸಂಬಂಧಿಸಿದಂತೆ ಇಲ್ಲಿನ ಆರೋಗ್ಯ ಇಲಾಖೆಯ ಟಾಪ್‌ನರ್ಸ್ ಬಸವರಾಜ ಗೂಳಪ್ಪನವರ ಎಂಬವರಿಗೆ ದಯಾನಂದ ವಾಘಮೋರೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಆತನ ಮೇಲೆ ಹಲ್ಲೆ ಮಾಡಿದ್ದು, ಈ ಘಟನೆಯನ್ನು ಖಂಡಿಸಿ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕು ಮತ್ತು ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಅಗ್ರಹಿಸಿ ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ರಾಮಗೊಂಡ ಪಾಟೀಲ ನೇತೃತ್ವದಲ್ಲಿ ಆಸ್ಪತ್ರೆಯ ವೈದ್ಯರು ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

ಈ ವೇಳೆ ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಮಾತನಾಡಿ, ಅಥಣಿ ಸಾರ್ವಜನಿಕ ಆಸ್ಪತ್ರೆಯ ಎಲ್ಲ ಸಿಬ್ಬಂದಿ ದಿನದ 24 ಗಂಟೆ ಸೇವೆ ಸಲ್ಲಿಸುತ್ತಾರೆ. ಕೊರೋನಾ ಸಂದರ್ಭದಲ್ಲಿಯೂ ಕೂಡ ಪ್ರಾಣದ ಹಂಗು ತೊರೆದು ನಮ್ಮ ಸಿಬ್ಬಂದಿ ಸೇವೆ ಸಲ್ಲಿಸಿದ್ದಾರೆ. ಅನೇಕ ಬಾರಿ ನಮ್ಮ ಕೆಲವು ವ್ಯಕ್ತಿಗಳು ಸಿಬ್ಬಂದಿಗೆ ದಬ್ಬಾಳಿಕೆ ಮಾಡುವುದು, ಹಲ್ಲೆ ಮಾಡುವುದು ಹೆಚ್ಚಾಗುತ್ತಿದೆ. ಮಂಗಳವಾರ ರಾತ್ರಿ ನಮ್ಮ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನು ಬಂಧಿಸಿ ಸೂಕ್ತಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇವೆ. ಮೇಲಿಂದ ಮೇಲೆ ಇಂಥ ಘಟನೆಗಳು ನಮ್ಮಲ್ಲಿ ನಡೆಯುತ್ತಿರುವುದರಿಂದ ನಮಗೆ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ ಅವರಿಗೆ ಕಾನೂನು ರೀತಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮಗೊಂಡ ಪಾಟೀಲ ಮಾತನಾಡಿ, ಸಾರ್ವಜನಿಕರ ಸೇವೆಯಲ್ಲಿ ನಮ್ಮ ಸರ್ಕಾರಿ ನೌಕರರು ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೂ ಪದೇ ಪದೇ ಹಲ್ಲೆಗಳು ನಡೆಯುತ್ತಿವೆ. ನಿನ್ನೆ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ಮೇಲೆ ನಡೆದ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲವನ್ನ ಸೂಚಿಸುವುದರ ಜೊತೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಪೊಲೀಸ್ ಇಲಾಖೆಯವರು ಕೂಡಲೆ ಬಂಧಿಸಬೇಕು. ಮುಂದೆ ಈ ರೀತಿ ಸರ್ಕಾರಿ ನೌಕರರ ಮೇಲೆ ಈ ರೀತಿ ದಬ್ಬಾಳಿಕೆ ಮತ್ತು ಹಲ್ಲೆಗಳು ನಡೆಯದಂತೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಅಥಣಿ ಸಾರ್ವಜನಿಕ ಆಸ್ಪತ್ರೆಯ ತುರ್ತುಸೇವೆ ಮತ್ತು ಹೆರಿಗೆ ವಿಭಾಗದ ಸೇವೆಗಳನ್ನು ಹೊರತುಪಡಿಸಿ ಆರೋಗ್ಯ ಇಲಾಖೆಯ ಎಲ್ಲ ಸೇವೆಗಳ ಸಿಬ್ಬಂದಿ ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಗೆ ಅಥಣಿ ತಾಲೂಕು ಖಾಸಗಿ ವೈದ್ಯರ ಸಂಘದಿಂದ ಮತ್ತು ಆಯುರ್ವೇದ ವೈದ್ಯ ಸಿಬ್ಬಂದಿಯಿಂದ ಬೆಂಬಲ ಸೂಚಿಸಿದರು.

ಪ್ರತಿಭಟನಾ ಸ್ಥಳಕ್ಕೆ ಮಧ್ಯಾಹ್ನದ ನಂತರ ಅಥಣಿ ತಹಸೀಲ್ದಾರ್‌ ವಾಣಿ.ಯು ಮತ್ತು ಡಿವೈಎಸ್ಪಿ ಶ್ರೀಪಾದ್ ಜಲ್ದೆ ಆಗಮಿಸಿ ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರತಿಭಟನೆ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಪ್ರತಿಭಟನೆಯನ್ನು ಹಿಂಪಡೆಯಬೇಕೆಂದು ಮನವೊಲಿಸಲು ಪ್ರಯತ್ನಿಸಿದರು. ನಮ್ಮ ಕರ್ತವ್ಯಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು. ಮಂಗಳವಾರ ರಾತ್ರಿ ಆರೋಗ್ಯ ಇಲಾಖೆಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ತಾವು ದೂರು ನೀಡಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ತಮ್ಮ ರಕ್ಷಣೆಗೆ ರಕ್ಷಣೆಗೆ ಸಿಬ್ಬಂದಿ ನೀಡಲು ಸಾಧ್ಯವಿಲ್ಲ. ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಸಿಬ್ಬಂದಿ ಕೊರತೆ ಇದೆ. ಆರೋಗ್ಯ ಇಲಾಖೆಯಿಂದಲೇ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳುವಂತೆ ಸಲಹೆ ನೀಡಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ನಂತರ ಪ್ರತಿಭಟನೆ ಹಿಂಪಡೆದ ಆರೋಗ್ಯ ಇಲಾಖೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾದರು.

ಈ ಸಂದರ್ಭದಲ್ಲಿ ಅಥಣಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಚಿದಾನಂದ ಮೇತ್ರಿ, ಡಾ.ಎಚ್.ಎಸ್ ಕಲಮಡಿ, ಡಾ.ಸಿ.ಎಸ್.ಪಾಟೀಲ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸ್ಮಿತಾ ಚೌಗುಲಾ, ಡಾ.ಮಲ್ಲಿಕಾರ್ಜುನ ಹಂಜಿ, ಡಾ.ರಮೇಶ ಗುಳ್ಳ, ಡಾ.ರವಿ ಚೌಗಲಾ ಸೇರಿದಂತೆ ಪ್ರಕಾಶ ನರಟ್ಟಿ, ಅಡವಯ್ಯ ಹಿರೇಮಠ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅಥಣಿ ಪಿಎಸ್ಐ ಶಿವಾನಂದ ಕಾರಜೋಳ ಹಾಗೂ ಸಿಬ್ಬಂದಿಯವರಿಂದ ಭದ್ರತೆ ಕೈಗೊಳ್ಳಲಾಗಿತ್ತು.

Share this article