ಹರಪನಹಳ್ಳಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಖಾಸಗಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರಿ ಶುಲ್ಕಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಡೊನೇಷನ್ ಪೀಕುತ್ತಿರುವ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಹರಪನಹಳ್ಳಿ ಅತ್ಯಂತ ಹಿಂದುಳಿದ ತಾಲೂಕಾಗಿದೆ. ಇಲ್ಲಿ ಬಡವರು, ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚು ಅಭ್ಯಾಸ ಮಾಡುತ್ತಾರೆ. ಆದರೆ ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಯಿಂದ ಪೋಷಕರು ಶುಲ್ಕ ಪಾವತಿಸಲಾಗದೇ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡೊನೇಷನ್ ಹಾವಳಿ ವಿರುದ್ಧ ಹಲವು ವರ್ಷಗಳಿಂದ ನಮ್ಮ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳ ಪರವಾಗಿ ಹೋರಾಟ ಮಾಡುತ್ತಾ ಬಂದಿದೆ. ಆದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಹೆಚ್ಚು ಡೊನೇಷನ್ ಪಡೆಯುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಿ ಅಂತಹ ಶಾಲಾ-ಕಾಲೇಜುಗಳ ಮಾನ್ಯತೆ ರದ್ದುಪಡಿಸಲು ಜಿಲ್ಲಾಧಿಕಾರಿಗೆ ಶಿಫಾರಸು ಮಾಡಬೇಕು. ಎಲ್ಲ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಶುಲ್ಕ ಪಟ್ಟಿ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.
ಹರಪನಹಳ್ಳಿಯ ಖಾಸಗಿ ಶಾಲಾ ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.