ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಹನುಮಕ್ಕ, ಬಿಸಿಯೂಟ ತಯಾರಿ, ವಿತರಣೆ ಸೇರಿದಂತೆ ಎಲ್ಲಾ ಕೆಲಸಗಳನ್ನು ಅಡುಗೆ ಸಿಬ್ಬಂದಿಯೇ ನಿರ್ವಹಿಸುತ್ತಿದ್ದಾರೆ. ಆದರೂ, ಅವರಿಗೆ ಸೂಕ್ತ ವೇತನ, ಸೌಲಭ್ಯಗಳು ಸಿಗುತ್ತಿಲ್ಲ. ಹಾಗಾಗಿ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಅಧಿಕೃತವಾಗಿ ಅಡುಗೆ ಸಿಬ್ಬಂದಿಗೆ ವಹಿಸಿ, ಅವರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ಶಾಲೆಗಳಲ್ಲಿ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ಪ್ರಸ್ತಾಪವನ್ನು ಕೈಬಿಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿತ್ತು. ಈ ವ್ಯವಸ್ಥೆ ಜಾರಿಯಾದರೆ ಅಡುಗೆ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಜೊತೆಗೆ ಬಿಸಿಯೂಟದ ಆಡಳಿತಾತ್ಮಕ ಜವಾಬ್ದಾರಿಯನ್ನು ಶಿಕ್ಷಕರಿಗೆ ವಹಿಸಬಾರದು, ಶಿಕ್ಷಕರು ಬೋಧನಾ ಕಾರ್ಯದತ್ತಲೇ ಗಮನ ಹರಿಸಬೇಕು ಎಂದೂ ಅವರು ಒತ್ತಾಯಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಮತ್ತು ನಡಾವಳಿಯಂತೆ ಮುಖ್ಯ ಅಡುಗೆಯವರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಜಂಟಿ ಖಾತೆಯ ಮೂಲಕ ಯೋಜನೆ ನಿರ್ವಹಿಸಲು ಅವಕಾಶ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮುಖ್ಯೋಪಾಧ್ಯಾಯರು ಜವಾಬ್ದಾರಿ ನಿರ್ವಹಿಸಲು ಸಾಧ್ಯವಿಲ್ಲ ಎಂದರೆ ಮುಖ್ಯ ಅಡುಗೆಯವರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರ ಜಂಟಿ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಅವರು ಹೇಳಿದರು. ಅಡುಗೆ ಸಿಬ್ಬಂದಿಯಲ್ಲಿಯೇ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವೀಧರರಿದ್ದು, ಯೋಜನೆ ನಿರ್ವಹಿಸುವ ಅರ್ಹತೆ ಮತ್ತು ಅನುಭವವನ್ನು ಅವರು ಹೊಂದಿದ್ದಾರೆ ಎಂದು ಮುಖಂಡರು ಸ್ಪಷ್ಟಪಡಿಸಿದರು.
ಪ್ರತಿಭಟನೆಯಲ್ಲಿ ಸಂಘದ ಕಾರ್ಯದರ್ಶಿ ಸುನಿತಾ, ಜಿಲ್ಲಾ ಸಂಚಾಲಕ ಎಂ. ನಾರಾಯಣ, ಖಜಾಂಚಿ ಸೂರ್ಯಕಲಾ, ಮೀನಮ್ಮ, ರೂಪಾ, ಶಾರದಮ್ಮ, ದಾನಮ್ಮ, ಭಾಗ್ಯಮ್ಮ, ಚಂದ್ರಮ್ಮ, ಗೀತ, ವಿಜಯಮ್ಮ, ಜಯಮ್ಮ, ಮಮತ, ಕೆ.ಎಲ್. ರಾವ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ನೂರಾರು ಅಡುಗೆ ಸಿಬ್ಬಂದಿ ಪಾಲ್ಗೊಂಡಿದ್ದರು.