ಗಂಗಾವತಿ: ನ. 3ರಂದು ಬಸವಾದಿ ಶಿವಶರಣರ ಹೆಸರಿನಲ್ಲಿ ಆಯೋಜಿಸಲು ಉದ್ದೇಶಿಸಿರುವ ಹಿಂದೂ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಶ್ರೀ ಚೆನ್ನಬಸವಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರದ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನ. 3ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಹೆಸರಿನಲ್ಲಿ ಹಿಂದೂ ಸಮಾವೇಶ ಆಯೋಜಿಸಲು ಉದ್ದೇಶಿಸಿರುವುದು ಭಾವೈಕ್ಯತೆ ಮತ್ತು ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಆತಂಕಕ್ಕೆ ಕಾರಣವಾಗಿದೆ. ಈ ಸಮಾವೇಶಕ್ಕೆ ಜಿಲ್ಲಾಡಳಿತ ಅನುಮತಿ ನೀಡಬಾರದೆಂದು ಒತ್ತಾಯಿಸಿದರು.
12ನೇ ಶತಮಾನದ ಬಸವಾದಿ ಶಿವಶರಣರು ಜಾತಿ, ಧರ್ಮ, ಲಿಂಗ ತಾರತಮ್ಯಗಳನ್ನು ವಿರೋಧಿಸಿ ಸಮಾನತೆ, ಕಾಯಕ, ದಾಸೋಹ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ್ದಾರೆ. ಬಸವಣ್ಣನವರ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಗಳು ಈ ಮೌಲ್ಯಗಳನ್ನು ಎತ್ತಿಹಿಡಿಯಬೇಕೇ ಹೊರತು ಸಮಾಜದಲ್ಲಿ ಧಾರ್ಮಿಕ ಭಿನ್ನಾಭಿಪ್ರಾಯ, ದ್ವೇಷ ಮತ್ತು ಸಂಘರ್ಷಕ್ಕೆ ಕಾರಣವಾಗಬಾರದು ಎಂದು ಹೇಳಿದ್ದಾರೆ. ವಿಜಯಪುರದ ಲಿಂ. ಸಿದ್ಧೇಶ್ವರ ಸ್ವಾಮಿಗಳು ಸರಳತೆ, ಶಾಂತಿ, ಮಾನವೀಯತೆ ಮತ್ತು ಸರ್ವಧರ್ಮ ಸಮಭಾವದ ಮೂಲಕ ನಾಡಿನ ಜನರ ಗೌರವಕ್ಕೆ ಪಾತ್ರರಾಗಿದ್ದಾರೆ. ಧಾರ್ಮಿಕ ಮುಖಂಡರು ಮತ್ತು ಮಠಾಧೀಶರು ಇಂತಹ ಮಾನವೀಯ ಮೌಲ್ಯಗಳನ್ನು ತಮ್ಮ ನಡೆ-ನುಡಿಗಳಲ್ಲಿ ಅಳವಡಿಸಿಕೊಳ್ಳಬೇಕು. ಹಿಂದಿನ ಕೆಲವು ಕಾರ್ಯಕ್ರಮಗಳು ಮತ್ತು ಭಾಷಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ನಡೆದ ವಿಚಾರಣೆಗಳು ಹಾಗೂ ಆದೇಶಗಳ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಗಳಿವೆ. ಬಸವಕಲ್ಯಾಣ ಸೇರಿದಂತೆ ವಿವಿಧ ಸ್ಥಳಗಳ ಕಾರ್ಯಕ್ರಮಗಳಿಗೆ ಸಂಬಂಧಿಸಿದ ನ್ಯಾಯಾಲಯದ ಆದೇಶಗಳು ಮತ್ತು ಷರತ್ತುಗಳನ್ನು ಜಿಲ್ಲಾಡಳಿತ ಪರಿಶೀಲಿಸಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಗದಗಿನಲ್ಲಿ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ ಅವರ ಕುರಿತು ಸಾರ್ವಜನಿಕ ವೇದಿಕೆಯಲ್ಲಿ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂಬ ಆರೋಪಗಳ ಬಗ್ಗೆಯೂ ಸೂಕ್ತ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.ಜಿಲ್ಲಾಡಳಿತ ಪೊಲೀಸ್ ಮತ್ತು ಗುಪ್ತಚರ ಇಲಾಖೆಯ ವರದಿ ಪಡೆದು, ಹಿಂದಿನ ನ್ಯಾಯಾಲಯದ ಆದೇಶಗಳು ಹಾಗೂ ಪ್ರಸ್ತುತ ಸಾಮಾಜಿಕ ಪರಿಸ್ಥಿತಿ ಪರಿಶೀಲಿಸಿ, ನ. 3ರಂದು ಉದ್ದೇಶಿಸಿರುವ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಸಂಘಟನೆಗಳು ಆಗ್ರಹಿಸಿವೆ.