ಕನ್ನಡಪ್ರಭ ವಾರ್ತೆ ಬೆಳಗಾವಿ
ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ನಿಲುವಿನ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ಕ್ರಮವನ್ನು ಹಿಂಪಡೆಯಬೇಕು ಹಾಗೂ ಗೀತೆಯ ಪೂರ್ಣರೂಪಕ್ಕೆ ಸೂಕ್ತ ಗೌರವ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಾಷ್ಟ್ರೀಯ ಮೌಲ್ಯಗಳು ಹಾಗೂ ವಂದೇ ಮಾತರಂ ಗೀತೆಯ ಗೌರವ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಮಾತನಾಡಿ, ವಂದೇ ಮಾತರಂನ 150ನೇ ವರ್ಷಾಚರಣೆ ಸಂದರ್ಭದಲ್ಲಿ ಸರ್ಕಾರ ಕೈಗೊಂಡಿರುವ ಈ ತೀರ್ಮಾನ ದುರದೃಷ್ಟಕರ. ಇದು ವಂದೇ ಮಾತರಂ ಗೀತೆಗೆ ಮಾತ್ರವಲ್ಲದೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಹೋರಾಟಗಾರರಿಗೆ ಮಾಡಿದ ಅವಮಾನವಾಗಿದೆ ಎಂದು ದೂರಿದರು.ವಂದೇ ಮಾತರಂ ಕೇವಲ ಗೀತೆಯಲ್ಲ ಅದು ಭಾರತದ ಸ್ವಾತಂತ್ರ್ಯ ಹೋರಾಟದ ಚೈತನ್ಯ, ತ್ಯಾಗ ಮತ್ತು ರಾಷ್ಟ್ರಭಕ್ತಿಯ ಪ್ರತೀಕ. ಇಂತಹ ಐತಿಹಾಸಿಕ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸುವುದು ಅದರ ಪರಂಪರೆ ಹಾಗೂ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಕುಗ್ಗಿಸುವ ಪ್ರಯತ್ನವಾಗಿದೆ ಎಂದು ಅಭಿಪ್ರಾಯಪಟ್ಟರು.ಪ್ರತಿಭಟನೆಯಲ್ಲಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಅರವಿಂದ ಪಾಟೀಲ, ಡಾ.ಸೋನಾಲಿ ಸರ್ನೋಬತ್, ಮುರುಗೇಂದ್ರಗೌಡ ಪಾಟೀಲ, ಮಹಾಂತ ಒಕ್ಕುಂದ, ನಾಗರಾಜ ಗಸ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.