ಸರ್ಕಾರಿ ಶಾಲೆ ಮುಚ್ಚುವ ನಿಲುವು ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Nov 07, 2026, 02:15 AM IST
ಸರ್ಕಾರಿ ಶಾಲೆಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಬಳ್ಳಾರಿಯ ಒಪಿಡಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ ಪಡೆದ ಸಾಲದ ಒಪ್ಪಂದದಲ್ಲಿಯೇ ಈ ಕುರಿತು ಷರತ್ತು ಉಲ್ಲೇಖಿಸಲಾಗಿದೆ.

ಬಳ್ಳಾರಿ: ರಾಜ್ಯದಲ್ಲಿ 45ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ದುರ್ಬಲಗೊಳಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಗರದ ಒಪಿಡಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆ ಉಳಿಸುತ್ತೇವೆ ಎಂದು ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೇ ಇದೀಗ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ ಪಡೆದ ಸಾಲದ ಒಪ್ಪಂದದಲ್ಲಿಯೇ ಈ ಕುರಿತು ಷರತ್ತು ಉಲ್ಲೇಖಿಸಲಾಗಿದೆ. ಇದು ರಾಜ್ಯದ ಜನತೆಗೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2030ರ ವೇಳೆಗೆ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಶಾಲೆ ಒಂದೇ ಕಡೆ ವಿಲೀನಗೊಳಿಸುವುದು, ಶಾಲೆಗಳ ನಿರ್ವಹಣೆಗೆ ಕಾರ್ಪೊರೇಟ್ ಕಂಪನಿಗಳಿಂದ ಆರ್ಥಿಕ ನೆರವು ಪಡೆಯುವುದು, ಕಂಪನಿಗಳಿಗೆ ಅಗತ್ಯವಿರುವ ಕಾರ್ಮಿಕರನ್ನು ಸಿದ್ಧಪಡಿಸುವ ರೀತಿಯಲ್ಲಿ ಪಠ್ಯಕ್ರಮ ರೂಪಿಸುವುದು ಹಾಗೂ ಮುಂದಿನ ಶಿಕ್ಷಕರ ನೇಮಕಾತಿ ಕೆಪಿಎಸ್ ಶಾಲೆಗಳಿಗೆ ಮಾತ್ರ ಸೀಮಿತಗೊಳಿಸುವುದು ಎಡಿಬಿ ಷರತ್ತುಗಳಲ್ಲಿವೆ. ಅಲ್ಲದೆ 2030ರ ನಂತರ ಕೆಪಿಎಸ್ ಶಾಲೆಗಳಿಗೆ ಸರ್ಕಾರ ಅನುದಾನ ನೀಡಬಾರದು ಎಂಬ ಷರತ್ತೂ ಇದೆ. ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸುವ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ರಾಜ್ಯದಲ್ಲಿ ಬಡ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಯಾವ ರೀತಿಯ ಪ್ರಜಾಪ್ರಭುತ್ವ ಎಂದು ಪ್ರಶ್ನಿಸಿದರು.

ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಉಪಾಧ್ಯಕ್ಷೆ ಎಸ್.ಜಿ.ನಾಗರತ್ನ ಮಾತನಾಡಿ, ಈ ನೀತಿಯಿಂದ ರಾಜ್ಯದಲ್ಲಿ ಕೇವಲ 4,038 ಶಾಲೆಗಳು ಮಾತ್ರ ಉಳಿದು, ಸುಮಾರು 45 ಸಾವಿರ ಸರ್ಕಾರಿ ಶಾಲೆಗಳು ಮುಚ್ಚುವ ಆತಂಕ ಎದುರಾಗಿದೆ. ರಾಜ್ಯದ ಶಿಕ್ಷಣ ನೀತಿ ಶಿಕ್ಷಣ ತಜ್ಞರು, ಬುದ್ಧಿಜೀವಿಗಳು ನಿರ್ಧರಿಸುವ ಬದಲು ವಿದೇಶಿ ಹಣಕಾಸು ಸಂಸ್ಥೆ ಹಾಗೂ ಕಾರ್ಪೊರೇಟ್ ಕಂಪನಿಗಳು ನಿರ್ಧರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಉಳಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಸರ್ಕಾರಿ ಶಾಲೆಗಳ ರಕ್ಷಣೆಗಾಗಿ ಜನತೆ ಒಗ್ಗೂಡಿ ಹೋರಾಟಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆ ಅಧ್ಯಕ್ಷತೆಯನ್ನು ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ವಹಿಸಿದ್ದರು. ಜಿಲ್ಲಾ ಅಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷೆ ಎಂ. ಶಾಂತಿ, ಜಿಲ್ಲಾ ಖಜಾಂಚಿ ಅನುಪಮಾ, ಕಚೇರಿ ಕಾರ್ಯದರ್ಶಿ ನಿಹಾರಿಕ, ಸದಸ್ಯರಾದ ಕಾಂತೇಶ್, ತಿಪ್ಪೇಸ್ವಾಮಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ