ಶಿರವಾಡದಲ್ಲಿ ರಸ್ತೆ ದುರಸ್ತಿಗೆ ಕರವೇ ಪ್ರತಿಭಟನೆ: ಕಾಮಗಾರಿ ವಿಳಂಬಕ್ಕೆ ಆಕ್ರೋಶ

KannadaprabhaNewsNetwork |  
Published : Aug 14, 2026, 02:00 AM IST
ಪ್ರತಿಭಟನೆ | Kannada Prabha

ಸಾರಾಂಶ

ತಾಲೂಕಿನ ಶಿರವಾಡ ಗ್ರಾಪಂ ವ್ಯಾಪ್ತಿಯಲ್ಲಿ ಶಾಲೆಯ ಪಕ್ಕದ ರಸ್ತೆ ಅಗೆದು ಹದಗೆಟ್ಟಿರುವುದನ್ನು ಖಂಡಿಸಿ ಕನ್ನಡ ರಕ್ಷಣಾ ವೇದಿಕೆ (ಕರವೇ) ಪದಾಧಿಕಾರಿಗಳು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕಾರವಾರ

ತಾಲೂಕಿನ ಶಿರವಾಡ ಗ್ರಾಪಂ ವ್ಯಾಪ್ತಿಯಲ್ಲಿ ಶಾಲೆಯ ಪಕ್ಕದ ರಸ್ತೆ ಅಗೆದು ಹದಗೆಟ್ಟಿರುವುದನ್ನು ಖಂಡಿಸಿ ಕನ್ನಡ ರಕ್ಷಣಾ ವೇದಿಕೆ (ಕರವೇ) ಪದಾಧಿಕಾರಿಗಳು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಕಳೆದ ಎರಡು ವರ್ಷಗಳಿಂದ ರಸ್ತೆ ದುಸ್ಥಿತಿಯಲ್ಲಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಖಾಸಗಿ ಜಮೀನಿನ ದಾಖಲೆಗಳು ಸೇರಿದಂತೆ ಅನುಮತಿ ಪತ್ರಗಳು ಲಭ್ಯವಿದ್ದರೂ ಕಾಮಗಾರಿ ಆರಂಭಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಿಪಿಐ, ತಹಶೀಲ್ದಾರ್ ಹಾಗೂ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಪ್ರತಿಭಟನಾಕಾರರು ಪಿಡಬ್ಲ್ಯೂಡಿ ಇಲಾಖೆಯ ಎಇಇ ರಾಮು ಅರ್ಗೆಕರ ಅವರನ್ನು ತರಾಟೆಗೆ ತೆಗೆದುಕೊಂಡು, ರಸ್ತೆ ಕಾಮಗಾರಿ ವಿಳಂಬಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು.

ಪ್ರತಿಭಟನೆ ಹಿನ್ನಲೆ ಸ್ಥಳಕ್ಕೆ ಧಾವಿಸಿದ ಶಿರವಾಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರತಿಕ್ರಿಯಿಸಿ, ಸದ್ಯ ರಸ್ತೆ ಗುಂಡಿಗಳನ್ನು ಮುಚ್ಚುವ ತಾತ್ಕಾಲಿಕ ಪ್ಯಾಚ್‌ವರ್ಕ್ ಮಾಡಲಾಗಿದೆ. ಸಂಪೂರ್ಣ ರಸ್ತೆ ದುರಸ್ತಿಗೆ ಮುಖ್ಯ ಕಚೇರಿಯ ಅನುಮೋದನೆ ಹಾಗೂ ಟೆಂಡರ್ ಮಂಜೂರಾತಿ ಅಗತ್ಯವಿದ್ದು, ಅನುಮತಿ ದೊರೆಯಲು ಒಂದೂವರೆರಿಂದ ಎರಡು ತಿಂಗಳು ಬೇಕಾಗಬಹುದು ಎಂದು ತಿಳಿಸಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯರು, ಎರಡು ವರ್ಷಗಳಿಂದ ರಸ್ತೆ ಸಮಸ್ಯೆ ಬಗೆಹರಿಯದಿರುವಾಗ ಮತ್ತೆ ತಿಂಗಳುಗಟ್ಟಲೆ ಕಾಲಾವಕಾಶ ಕೇಳುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಎರಡು ತಿಂಗಳ ಅವಧಿಯಲ್ಲಿ ಕಾಮಗಾರಿ ಪ್ರಾರಂಭವಾಗುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಕ್ಷಗಾನ ಅಕಾಡೆಮಿ ಪ್ರಶಸ್ತಿಗೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ
(ವೆಬ್ಬಿಗೆ)) ಪಿಂಚಣಿದಾರರ ಸಮಸ್ಯೆಗಳ ಪರಿಹಾರಕ್ಕೆ ಪ್ರತಿಭಟನೆ