ಕುಷ್ಟಗಿ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಮಂಡಲದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ತಾಲೂಕಾದ್ಯಕ್ಷ ಮಹಾಂತೇಶ ಬಾದಾಮಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿರುವುದು ಖಂಡನೀಯ ಎಂದರು.
ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೂಲಕ ಅತೀ ಕಡಿಮೆ ದರದಲ್ಲಿ ಔಷಧಿ ಕೊಳ್ಳುತ್ತಿದ್ದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ಭಾರಿ ನಷ್ಟವುಂಟಾಗಲಿದೆ. ಖಾಸಗಿ ಔಷಧಿ ಕೇಂದ್ರಗಳಲ್ಲಿ ಸಾವಿರಾರು ಖರ್ಚು ಮಾಡುವ ಮೂಲಕ ಔಷಧ ಖರೀದಿ ಮಾಡಬೇಕಾಗಿ ಬರುತ್ತದೆ. ಇದರಿಂದ ತೊಂದರೆಯಾಗುತ್ತಿದ್ದು ಈ ನಿರ್ಧಾರವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಉಮೇಶ ಯಾಧವ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗೆ ಅನುಕೂಲವಾಗುವ ಜನೌಷಧಿ ಕೇಂದ್ರದಲ್ಲಿಯೂ ರಾಜಕಾರಣ ಮಾಡುತ್ತಿದ್ದು ಸರಿಯಲ್ಲ ಪಿಎಂ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಗೊಳಿಸಬೇಕೆಂದು ಹೇಳಿದರು.