ವ್ಯಾಪಾರಿಗಳ ಎತ್ತಂಗಡಿ ವಿರೋಧಿಸಿ ಪ್ರತಿಭಟನೆ

KannadaprabhaNewsNetwork | Published : Mar 13, 2025 12:45 AM

ಸಾರಾಂಶ

ಹನೂರು ನಾಲಾ ರೋಡ್ ಅರಣ್ಯ ಇಲಾಖೆ ವಿರುದ್ಧ ಪೆಟ್ಟಿಗೆ ಅಂಗಡಿ ಮಾಲೀಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಶಾಸಕ ಎಂ.ಆರ್.ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಹಲವಾರು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿರುವವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸಲು ಹುನ್ನಾರ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹನೂರು ತಾಲೂಕಿನ ಹೂಗ್ಯಂ ಅರಣ್ಯ ವಲಯದ ವ್ಯಾಪ್ತಿಗೆ ಒಳಪಡುವ ನಾಲಾ ರೋಡ್ ಬಳಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ಅಂಗಡಿ ಮಾಲೀಕರನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ನೋಟಿಸ್ ಜಾರಿಗೊಳಿಸಿ ತೆರವುಗೊಳಿಸಲು ಮುಂದಾದಾಗ ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಸಂಘಟನೆ ಹಾಗೂ ರೈತ ಸಂಘಟನೆ ಮಹಿಳೆಯರು ಸೇರಿದಂತೆ ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ಅಧಿಕಾರಿಗಳು ಅಂಗಡಿಗಳನ್ನು ತೆರವುಗೊಳಿಸಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಹಲವಾರು ವರ್ಷಗಳಿಂದ ಇದನ್ನೇ ನಂಬಿಕೊಂಡು ಜೀವನ ಕಟ್ಟಿಕೊಳ್ಳುತ್ತಿರುವ ಅಂಗಡಿದಾರರನ್ನು ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿ ಪಾಲಿಮೇಡು, ನಾಲಾ ರೋಡ್, ಸಂದನಪಾಳ್ಯ ವಿವಿಧ ಗ್ರಾಮದ ಮುಖಂಡರು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಮಂಜುನಾಥ್ ಭೇಟಿ:

ಪ್ರತಿಭಟನಾ ಸ್ಥಳಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಗ್ರಾಮಸ್ಥರ ಜೊತೆ ಮಾತನಾಡಿ, ಪೆಟ್ಟಿಗೆ ಅಂಗಡಿಗಳನ್ನು ಇಟ್ಟಿರುವ ಸ್ಥಳ ಪರಿಶೀಲನೆ ನಡೆಸಿ 10 ದಿನದಲ್ಲಿ ಸರ್ವೆ ನಡೆಸಿ ಗ್ರಾಮಸ್ಥರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಗ್ರಾಮಸ್ಥರಿಗೆ ಮತ್ತು ಪೆಟ್ಟಿಗೆ ಅಂಗಡಿ ನಡಸುತ್ತಿದ್ದವರಿಗೆ ಭರವಸೆ ನೀಡಿದರು.

ಅರಣ್ಯ ಇಲಾಖೆ ಕಾಯ್ದೆ ಅಡಿ ಅರಣ್ಯ ಪ್ರದೇಶದ ಅಂಚಿನಲ್ಲಿ ಯಾರೂ ಅಂಗಡಿ ಮುಂಗಟ್ಟು ಇಡುವುದು ವ್ಯಾಪಾರ ಮಾಡುವುದು ಕಾನೂನು ಬಾಹಿರ ಅವರು ಇಟ್ಟಿರುವ ಸ್ಥಳ ಅರಣ್ಯ ಇಲಾಖೆಗೆ ಸೇರಿದೆ. ಅಂಗಡಿ ಮಾಲಿಕರ ಹತ್ತಿರ ಇದಕ್ಕೆ ಸೂಕ್ತ ದಾಖಲೆಗಳಿದ್ದರೆ ನೀಡುವಂತೆ ಎರಡು ಬಾರಿ ನೋಟಿಸ್ ಜಾರಿಗೊಳಿಸಲಾಗಿದೆ. ಆದರೂ ಅಂಗಡಿ ಮಾಲೀಕರು ನೋಟಿಸ್ ಜಾರಿ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದರಿಂದ ಮತ್ತೊಮ್ಮೆ ತೆರವುಗೊಳಿಸುವಂತೆ ನೋಟಿಸ್ ಜಾರಿಗೊಳಿಸಲಾಗಿದೆ ಹೀಗಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸಂಘದ ಹಿರಿಯ ಮುಖಂಡ ಎಸ್. ಮಣಿ, ಜೋಸೆಫ್ ಹಾಗೂ ರೈತ ಮುಖಂಡ ಕೂಡ್ಲೂರು ವೆಂಕಟೇಶ್ ನೂರಾರು ಮಹಿಳೆಯರು ಉಪಸ್ಥಿತರಿದ್ದರು.

Share this article