ಬಂಟ್ವಾಳ: ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ನೀಡಿದ ಅಖಿಲ ಭಾರತ ಮುಷ್ಕರದ ಅಂಗವಾಗಿ ಗುರುವಾರ ಎಐಸಿಸಿಟಿಯು ವತಿಯಿಂದ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ ನಡೆಯಿತು.
ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷ ರಾಮಣ್ಣ ವಿಟ್ಲ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳು ಕಾರ್ಮಿಕರ ಹಕ್ಕುಗಳಿಗೆ ಹಾನಿಕಾರಕವಾಗಿದ್ದು, ಕೆಲಸದ ಭದ್ರತೆ, ಕನಿಷ್ಠ ವೇತನ ಹಾಗೂ ಸಾಮಾಜಿಕ ಭದ್ರತೆಯನ್ನು ದುರ್ಬಲಗೊಳಿಸುತ್ತವೆ. ಈ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಎಐಸಿಸಿಟಿಯು ಜಿಲ್ಲಾ ಕಾರ್‍ಯದರ್ಶಿ ಮೋಹನ್ ಕೆ.ಇ. ಮಾತನಾಡಿ, ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಿದೆ ಎಂದು ಆರೋಪಿಸಿದರು. ಕಾರ್ಮಿಕ ಮುಖಂಡರಾದ ಅನ್ಸಾರ್ ಬಜಾಲ್, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್‍ಯದರ್ಶಿ ಶಾಹುಲ್ ಹಮೀದ್ ಮಾತನಾಡಿದರು.ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿದರು.