ಬೇಡಿಕೆ ಈಡೇರಿಸಲು ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

KannadaprabhaNewsNetwork |  
Published : Jan 01, 2025, 12:02 AM IST
೩೧ಎಚ್‌ವಿಆರ್೨ | Kannada Prabha

ಸಾರಾಂಶ

ಮಾಸಿಕ ಗೌರವ ಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಹಾವೇರಿ:ಮಾಸಿಕ ಗೌರವ ಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಗಂಗಾಧರ ಬಡಿಗೇರ ಮಾತನಾಡಿ, ಕಳೆದ ಫೆಬ್ರವರಿಯಲ್ಲಿ ರಾಜ್ಯ ಹೋರಾಟದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ಆರೋಗ್ಯ ಸಚಿವರ ಜೊತೆ ೧೫ ಬಾರಿ ಸಭೆಗಳನ್ನು ನಡೆಸಿದ್ದರೂ ವೇತನ ಹೆಚ್ಚಳವಾಗಲಿ, ಇತರೆ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಆರೋಗ್ಯ ಇಲಾಖೆಗೆ ಆಶಾಗಳ ಕೆಲಸ ಮಾತ್ರ ಬೇಕು. ಆದರೆ ಅವರ ಸಮಸ್ಯೆಗಳನ್ನು ಬಗೆಹರಿಸುವ ಕಾಳಜಿ ಮಾತ್ರ ಬೇಡವಾಗಿದೆ ಎಂದು ದೂರಿದರು. ನಗರ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಮಾಸಿಕ ಕನಿಷ್ಠ ೨೦೦೦ ರು. ಗೌರವಧನವನ್ನು ಹೆಚ್ಚಿಗೆ ಮಾಡಬೇಕು. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಬೇಕು, ಅಥವಾ ಮೊಬೈಲ್ ಡಾಟಾ ಒದಗಿಸಿ, ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಬೇಕು. ಯಾರಿಗೆ ಮೊಬೈಲ್ ಬಳಸಲು ಬರುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಕಳೆದ ೩ ತಿಂಗಳಿನಿಂದ ಬಂದ್ ಆಗಿರುವ ಇಲಾಖೆಯ ಸಿಮ್‌ಗಳನ್ನು ಪುನಃ ಆರಂಭಿಸಬೇಕು ಎಂದು ಒತ್ತಾಯಿಸಿದರು.ಸಂಘಟನೆ ಜಿಲ್ಲಾ ಅಧ್ಯಕ್ಷೆ ಜಯಶೀಲಾ ಎಸ್.ಬಿ ಮಾತನಾಡಿ, ೬೦ ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ಇಡಗಂಟು ರು. ೩ ಲಕ್ಷಕ್ಕೆ ಹೆಚ್ಚಿಸಬೇಕು. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರೊಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಆಶಾ ಸೇವೆಯಲ್ಲಿ ಇದ್ದಾಗ ಆಗುವ ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು. ಪ್ರತಿ ವರ್ಷ ಆಶಾ ಕಾರ್ಯಕರ್ತೆಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ್ಠ ವೇತನ, ಗ್ರಾಚ್ಯುಟಿ, ಪಿಎಫ್-ಇಎಸ್‌ಐ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಈ ವೇಳೆ ಜಿಲ್ಲಾ ಸಮಿತಿಯ ಉಪಾಧ್ಯಕ್ಷೆ ಮಂಜುಳಾ ಮಾಸೂರ, ಪುಷ್ಪಾ ಮಡ್ಲೂರಮಠ, ರತ್ನಾ ಗಿರಣಿ, ಮಮತಾ ಮಳಗಿ, ಗೀತಾ ಮಡಿವಾಳರ, ರೇಖಾ ಕರಿಗಾರ, ರೂಪಾ ಮಾನೆ, ಅಕ್ಷತಾ ಬಾರ್ಕಿ, ಲಕ್ಷ್ಮಿ ಕಬ್ಬೂರ, ರತ್ನ ಮನವಳ್ಳಿ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ