ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Nov 25, 2023, 01:15 AM IST
ಬೆಳಗಾವಿ | Kannada Prabha

ಸಾರಾಂಶ

ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿನ ಪದವಿ ಪೂರ್ವ ಶಿಕ್ಷಣ ಉತ್ತಮ ಸಾಧನೆ ಮಾಡಿದೆ. ಆದರೆ ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಬದಲಾವಣೆ ಮಾಡುವುದು ಹಾಗೂ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ಏಕಾಎಕಿ ನಿರ್ಧಾರ ಕೈಗೊಳ್ಳುವ ಮೂಲಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶವಪಟ್ಟಿಗೆಗೆ ಮೊಳೆ ಹೊಡೆಯುವ ಕಾರ್ಯ ಮಾಡಲು ಹೊರಟಿರುವುದು ಸರಿಯಲ್ಲ.

ಕನ್ನಡಪ್ರಭ ವಾರ್ತೆ ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ಎಂದು ಮರುನಾಮಕರಣ ಮಾಡಲಾಗಿರುವುದನ್ನು ಕೈಬಿಟ್ಟು, ಹಿಂದಿನಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಎಂದು ಮುಂದುವರಿಸುವುದು ಹಾಗೂ ಪರೀಕ್ಷಾ ಮೌಲ್ಯ ಪಾವಿತ್ರ್ಯತೆ ಕಾಪಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಪಿಯು ಕಾಲೇಜುಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ನೌಕರರ ಮಹಾಮಂಡಳ, ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರರ ಸಂಘ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪದವಿ ಪೂರ್ವ ಕಾಲೇಜುಗಳ ದೈಹಿಕ ಉಪನ್ಯಾಸಕರ ಸಂಘ ಹಾಗೂ ಪದವಿ ಪೂರ್ವ ಕಾಲೇಜುಗಳ ಬೋಧಕೇತರ ನೌಕರರ ಸಂಘ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿನ ಪದವಿ ಪೂರ್ವ ಶಿಕ್ಷಣ ಉತ್ತಮ ಸಾಧನೆ ಮಾಡಿದೆ. ಆದರೆ ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಬದಲಾವಣೆ ಮಾಡುವುದು ಹಾಗೂ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ಏಕಾಎಕಿ ನಿರ್ಧಾರ ಕೈಗೊಳ್ಳುವ ಮೂಲಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶವಪಟ್ಟಿಗೆಗೆ ಮೊಳೆ ಹೊಡೆಯುವ ಕಾರ್ಯ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾ ವಿಭಾಗ ಹಿಂತೆಗೆದು ಪುನಃ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿಯೇ ಉಳಿಸುವ ಮೂಲಕ ಶೈಕ್ಷಣಿಕ ವಿಭಾಗ ಮತ್ತು ಪರೀಕ್ಷಾ ವಿಭಾಗಗಳ ನಡುವೆ ಹಳಿತಪ್ಪಿರುವ ಸಮನ್ವಯ ಮರುಸ್ಥಾಪಿಸಬೇಕು. ಕುಸಿಯುತ್ತಿರುವ ಪರೀಕ್ಷಾ ಮೌಲ್ಯ ಮತ್ತು ಪಾವಿತ್ರ್ಯತೆ ಕಾಪಾಡಬೇಕು. ಹೆಚ್ಚುತ್ತಿರುವ ಕಾಲೇಜು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗಣುಗುಣವಾಗಿ ಹುದ್ದೆಗಳನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಯಾವುದೇ ಶಿಕ್ಷಕ, ಶಿಕ್ಷಕೇತರ ಸಂಘಟನೆಗಳ ಜೊತೆಗಾಗಲಿ ಶಿಕ್ಷಣ ತಜ್ಞರೊಂದಿಗಾಗಲಿ ಸಾಧಕ, ಬಾಧಕಗಳ ಕುರಿತು ಚರ್ಚೆ ನಡೆಸದೆ ಏಕಾಏಕಿ ಪಿಯು ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ಉದ್ದೇಶಿಸಿರುವುದು ಸಂಪೂರ್ಣ ಅವೈಜ್ಞಾನಿಕ ಮತ್ತು ಅತಾರ್ಕಿಕ ನಿರ್ಧಾರವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಕುಸಿಯುವುದು ಮಾತ್ರವಲ್ಲ ಓದಿನ ಬಗೆಗೆ ತತ್ಸಾರ ಬೆಳೆಸುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಈ ಪದ್ಧತಿಯಿಂದ ನೈಜ ಮೌಲ್ಯಮಾಪನ ಸಾಧ್ಯವಾಗುವುದಿಲ್ಲ. ಉಪನ್ಯಾಸಕರು ಶೈಕ್ಷಣಿಕ ವರ್ಷಾರಂಭದ ಕೆಲವು ತಿಂಗಳು ನೂತನ ವಿದ್ಯಾರ್ಥಿಗಳಿಗೆ ಪಾಠ ಮಾಡುವುದನ್ನು ಬಿಟ್ಟು, ಹಳೆಯ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ತೊಡಗಬೇಕಾಗುತ್ತದೆ. ಬೇಸಿಗೆ ರಜೆಯನ್ನು ಸಂಪೂರ್ಣವಾಗಿ ಉಪನ್ಯಾಸಕರು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ರಜೆ ರಹಿತ ಇಲಾಖೆಯನ್ನಾಗಿ ಘೋಷಿಸಿ, ಇತರ ಸವಲತ್ತುಗಳನ್ನು ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಡಿ.1ರಂದು ಬೆಂಗಳೂರಿನಲ್ಲಿರುವ ಸ್ವಾತಂತ್ರ್ಯ ಉದ್ಯಾನವದಲ್ಲಿ ಬೃಹತ್‌ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪದವಿ ಪೂರ್ವ ಕಾಲೇಜುಗಳ ನೌಕರರ ಮಹಾಮಂಡಳದ ಅಧ್ಯಕ್ಷ ಬಿ.ವೈ.ಹನ್ನೂರ, ಕಾರ್ಯದರ್ಶಿ ಎಸ್‌.ವೈ. ಶಾನವಾಡ, ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಪಿ.ಎಸ್‌.ಕಾಂಬಳೆ, ಕಾರ್ಯದರ್ಶಿ ವೈ.ಎಂ. ಪಾಟೀಲ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಆರ್‌.ಬಿ.ಮಠ, ಕಾರ್ಯದರ್ಶಿ ಡಾ.ಎಸ್‌.ಬಿ. ಮರೆನ್ನವರ, ಪದವಿ ಪೂರ್ವ ಕಾಲೇಜುಗಳ ದೈಹಿಕ ಉಪನ್ಯಾಸಕರ ಸಂಘದ ಅಧ್ಯಕ್ಷ ಪಿ.ಡಿ.ಶಿವನಾಯ್ಕರ, ಕಾರ್ಯದರ್ಶಿ ಎಂ. ಉಪ್ಪಿನ, ಪದವಿ ಪೂರ್ವ ಕಾಲೇಜುಗಳ ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಗಿರೀಶ ಕಬಟೆ, ಕಾರ್ಯದರ್ಶಿ ಎಸ್‌.ಎಸ್‌. ಮಜ್ಜಗಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ