ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಲೂಕು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳ ಬಗ್ಗೆ ಅಧಿಕಾರಿಗಳು, ಸಿಬ್ಬಂದಿ ನಿರ್ಲಕ್ಷ ಧೋರಣೆ ವಿರೋಧಿಸಿ ಮೇ 27ರಂದು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಈಚೆಗೆ ನಡೆದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.ತಾಲೂಕು ರೈತ ಸಂಘದ ಅಧ್ಯಕ್ಷ ವಿ.ಉಮೇಶ್ ಅಧ್ಯಕ್ಷತೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮದ್ದೂರು ತಾಲೂಕು ಕಚೇರಿಯ ಭ್ರಷ್ಟಾಚಾರದ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಯಿತು.
ರೈತರಿಗೆ ಸಂಬಂಧಿಸಿದ ಜಮೀನು ಮತ್ತು ಆರ್‌ಟಿಸಿ ಮತ್ತಿತರ ದಾಖಲೆ ಪಡೆಯಬೇಕಾದರೆ ಲಂಚ ನೀಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಭ್ರಷ್ಟಾಚಾರದ ಬಗ್ಗೆ ಈ ಹಿಂದೆ ರೈತ ಸಂಘ ಹಲವು ಬಾರಿ ಪ್ರತಿಭಟನೆ ನಡೆಸಿದ್ದರೂ ಸಹ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚೆತ್ತುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತ ಮುಖಂಡ ಬೋರಾಪುರ ಶಂಕರಗೌಡ ಮಾತನಾಡಿ, ರೈತರು ಮತ್ತು ಜನಸಾಮಾನ್ಯರ ಪಾಲಿಗೆ ಶಕ್ತಿ ಕೇಂದ್ರವಾಗಬೇಕಿದ್ದ ತಾಲೂಕ ಕಚೇರಿ ಈಗ ಭ್ರಷ್ಟಾಚಾರದ ಕೇಂದ್ರವಾಗಿದೆ. ಕೃಷಿಕರ ಬಗ್ಗೆ ನಿರ್ಲಕ್ಷ ಧೋರಣೆ ಕಳೆದಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಲು ಮೇ 27ರಂದು ತಾಲೂಕ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ನಡೆಸಲು ಸಭೆಯಲ್ಲಿ ಒಕ್ಕೋಲರ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವ ಕಾರ್ಯ ಪ್ರಾರಂಭಿಸುವ ಮುನ್ನ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಖಾನೆ ಆಡಳಿತ ಮಂಡಳಿ ಮತ್ತು ರೈತ ಮುಖಂಡರ ಸಭೆ ಕರೆದು ಸಮಸ್ಯೆಗಳ ಬಗ್ಗೆ ಚರ್ಚೆ ಚರ್ಚೆ ನಡೆಸಿದ ನಂತರ ಜಿಲ್ಲಾಧಿಕಾರಿಗಳು ಕಾರ್ಖಾನೆ ಪ್ರಾರಂಭದ ಜವಾಬ್ದಾರಿ ಹೊರಬೇಕು ಎಂದು ಮುಖಂಡರು ಆಗ್ರಪಡಿಸಿದರು.ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳನ್ನು ಕೆಆರ್‌ಎಸ್ ಅಚ್ಚುಪಟ್ಟು ವ್ಯಾಪ್ತಿಗೆ ಸೇರಿಸಬೇಕು. ಕೃಷಿಗೆ ಅನುಕೂಲವಾಗುವಂತೆ ಕನಿಷ್ಠ ಎರಡು ತಿಂಗಳ ಕಾಲ ನಾಲೆಗಳಲ್ಲಿ ನೀರು ಹರಿಸಬೇಕು. ಕೊಬ್ಬು ದರ ನಿಗದಿ ಬಗ್ಗೆ ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರ ನಿಗದಿ ಜೊತೆಗೆ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 500 ರು ಹೆಚ್ಚುವರಿಯಾಗಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಜಿ.ಎ.ಶಂಕರ್ ಪ್ರಧಾನ ಕಾರ್ಯದರ್ಶಿ ಲಿಂಗಪ್ಪಾಜಿ, ಗೌರವಾಧ್ಯಕ್ಷ ರಾಮಕೃಷ್ಣ, ಮುಖಂಡರಾದ ವಿನೋದ್ ಬಾಬು ಬೋರೇಗೌಡ, ವರದಪ್ಪ,ಸಿದ್ದೇಗೌಡ , ವೆಂಕಟೇಗೌಡ, ಸಿದ್ದರಾಜು, ಶೆಟ್ಟಿಹಳ್ಳಿ ರವಿಕುಮಾರ್, ಅಣ್ಣೂರು ಸಾವಿತ್ರಮ್ಮ, ಕಾರ್ಕಳ್ಳಿ ರಮ್ಯಾ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.