ಕನ್ನಡಪ್ರಭ ವಾರ್ತೆ ಕೆ.ಆರ್.ನಗರ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿರುವುದರ ವಿರುದ್ಧ ಎರಡು ಪಕ್ಷಗಳ ವತಿಯಿಂದ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಮಂದಿ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆ ಮೊಳಗಿಸಿ ಜನ ವಿರೋಧಿ ಸರ್ಕಾರ ಶೀಘ್ರದಲ್ಲಿಯೆ ಪತನವಾಗಲಿ ಎಂದು ಹೇಳಿದರು.
ಪುರಸಭೆ ಸದಸ್ಯ ಉಮೇಶ್ ಮತ್ತು ನಗರ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರುದ್ರೇಶ್ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೇ ಒಂದು ಲಕ್ಷ ಕೋಟಿ ರು. ಸಾಲ ಮಾಡುವುದರ ಜೊತೆಗೆ ಪೆಟ್ರೋಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿ ಕಾರಿದರು.ತಾಲೂಕು ಬಿಜೆಪಿ ಅಧ್ಯಕ್ಷ ಹೊಸೂರುಧರ್ಮ ಮಾತನಾಡಿ, ಸರ್ಕಾರ ಅಸ್ತಿತ್ವಕ್ಕೆ ಬಂದು 13 ತಿಂಗಳಾಗಿದ್ದರು ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯದೆ ಜನರ ಜೀವನ ನರಕ ಸದೃಶ್ಯವಾಗಿದೆ ಎಂದರು.
ರಾಜ್ಯದಲ್ಲಿ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಪಂಚಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವುದರ ಪರಿಣಾಮ ಆರ್ಥಿಕವಾಗಿ ಕರ್ನಾಟಕ ಅದೋಗತಿಗಿಳಿದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆಗಳಿದ್ದು, ಈ ಎಲ್ಲದಕ್ಕೂ ಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಗಳೆ ಹೊಣೆಗಾರರಾಗಬೇಕೆಂದರು.ಎರಡು ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಹಾಸನ ಮೈಸೂರು ರಸ್ತೆಯಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅ ವರ ಪ್ರತಿಮೆಯ ಬಳಿಯಿಂದ ಮೆರವಣಿಗೆ ಹೊರಟು ತಾಲೂಕು ಕಚೇರಿವರೆಗೂ ಸಾಗಿ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.
ಆನಂತರ ಪ್ರತಿಭಟನಾಕಾರರು ತಹಸೀಲ್ದಾರ್ ಸಿ.ಎಸ್. ಪೂರ್ಣಿಮ ಅವರಿಗೆ ಮನವಿ ಸಲ್ಲಿಸಿದರು.ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಪುರಸಭೆ ಸದಸ್ಯರಾದ ಕೆ.ಎಲ್. ಜಗದೀಶ್, ಸಂತೋಷ್ ಗೌಡ, ಮಾಜಿ ಸದಸ್ಯ ಜಿ.ಪಿ. ಮಂಜು, ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಂಬುಜಾ ಮಾದೇಶ್, ಉಸ್ತುವಾರಿ ಪಿ.ಜೆ.ರವಿ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್, ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಆರ್. ಮಂಜು, ಒಬಿಸಿ ಮೋರ್ಚಾ ಅಧ್ಯಕ್ಷ ವಿಶ್ವನಾಥ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕುಚೇಲನಾಯಕ, ಬಿಜೆಪಿ ಕಾರ್ಯಕರ್ತರಾದ ಗೋವಿಂದರಾಜು, ಪ್ರವೀಣ್, ಮಹಾದೇವಪ್ಪ, ಸುನೀಲ್, ಉಷಾ, ಮಂಜುಳ, ರೇಣುಕಾ, ಪ್ರೇಮ, ನಾಗಶ್ರೀ, ಮಂಜುಳಮ್ಮ, ಬಸವರಾಜು, ಜಿ.ಜೆ. ಮಂಜು ಭಾಗವಹಿಸಿದ್ದರು.