ಕನ್ನಡಪ್ರಭ ವಾರ್ತೆ ಕುಶಾಲನಗರವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆ ನೌಕರರು ಪ್ರತಿಭಟನೆ ನಡೆಸಿದರು.
ಸಿಐಟಿಯು ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ನೂರಾರು ಕಾರ್ಮಿಕರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿ ಕಾರ್ಮಿಕರನ್ನು ಗುಲಾಮಗಿರಿಯತ್ತ ತಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.ಕಾರ್ಯಪ್ಪ ವೃತ್ತದಿಂದ ರಥಬೀದಿ ಮೂಲಕ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಮಿಕರು ತಹಸೀಲ್ದಾರ್ ಕಚೇರಿ ಮುಂದೆ ಕೆಲಕಾಲ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಜಾರಿಯಾಗಬೇಕು.ಗುತ್ತಿಗೆ ಮುಂತಾದ ಕಾಯಂಯೇತರ ನೌಕರರ ಕಾಯಂಗೆ ಶಾಸನ ರೂಪಿಸಬೇಕು.ಗುತ್ತಿಗೆ ನೌಕರರ ಮೇಲೆ ಆಗುತ್ತಿರುವ ಶೋಷಣೆ ತಡೆಯಬೇಕು. ಕೃಷಿ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಖಾತ್ರಿಪಡಿಸುವ ಶಾಸನ ರೂಪಿಸಬೇಕು. ಕೃಷಿ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು. ಫಲವತ್ತಾದ ಕೃಷಿ ಭೂಮಿಯ ಬಲವಂತದ ಭೂಸ್ವಾಧೀನ ನಿಲ್ಲಿಸಬೇಕು.ಅಸಂಘಟಿತ ಕಾರ್ಮಿಕರಿಗೆ ಭವಿಷ್ಯನಿಧಿ, ಪಿಂಚಣಿ, ಕನಿಷ್ಠ ವೇತನ, ಶಿಕ್ಷಣ ಸಹಾಯ, ವಸತಿ, ನಿವೃತ್ತಿ ಹಾಗೂ ಮರಣ ಪರಿಹಾರಗಳು ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿ ಮಾಡಬೇಕು. ಜೀವನ ಯೋಗ್ಯ ಕನಿಷ್ಟ ವೇತನ ಜೀವನ 36 ಸಾವಿರ ರು. ನಿಗದಿಯಾಗಲಿ ಹಾಗೂಸಾರ್ವತ್ರಿಕ ಪಿಂಚಣಿ ಜಾರಿಗೊಳಿಸಿ ಕನಿಷ್ಟ 8000 ರು. ಪಿಂಚಣಿ ನೀಡಬೇಕು ಎಂಬ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಿ ತಹಸೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಪ್ರತಾಪ್, ಕರ್ನಾಟಕ ಪ್ರಾಂತ್ಯ ರೈತ ಸಂಘದ ಮುಖಂಡ ಟಿ.ಟಿ.ಉದಯಕುಮಾರ್, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮುನಾ, ತಾಲೂಕು ಅಧ್ಯಕ್ಷೆ ಸಾವಿತ್ರಿ, ಕಾರ್ಯದರ್ಶಿ ಚಂದ್ರಿಕಾ, ಮಡಿಕೇರಿ ತಾಲೂಕು ಅಧ್ಯಕ್ಷೆ ಯಶೋಧ, ಬಿಸಿ ಊಟ ನೌಕರರ ಸಂಘದ ಕುಶಾಲನಗರ ತಾಲೂಕು ಅಧ್ಯಕ್ಷೆ ರಾಣಿ, ಮಡಿಕೇರಿ ತಾಲೂಕು ಅಧ್ಯಕ್ಷೆ ಲಲಿತಮ್ಮ, ಆದಿವಾಸಿ ಮುಖಂಡ ರಘು, ಹಮಾಲಿ ಕಾರ್ಮಿಕ ಸಂಘಟನೆ ಗಿರೀಶ್, ಕಟ್ಟಡ ಕಾರ್ಮಿಕರ ಸಂಘದ ಯೋಗೇಶ್, ಪ್ಲಾಂಟೇಷನ್ ಸಂಘದ ಕೃಷ್ಣಕುಮಾರ್, ಸಿಐಟಿಯು ಜಯಣ್ಣ ಮತ್ತು ಮಂಜುನಾಥ್ ಸೇರಿದಂತೆ ಕಾರ್ಮಿಕರು ಪಾಲ್ಗೊಂಡಿದ್ದರು.