ರೈತ-ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

KannadaprabhaNewsNetwork | Published : Feb 18, 2024 1:33 AM

ಸಾರಾಂಶ

ಒಂದೆಡೆ ಭರವಸೆ ನೀಡಿ ಜನರ ನಿರೀಕ್ಷೆ ಹುಸಿಗೊಳಿಸಿರುವ ಕೇಂದ್ರ ಸರ್ಕಾರ ಇನ್ನೊಂದೆಡೆ ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಹೋರಾಡುತ್ತಿರುವ ರೈತರ ಮೇಲೆ ದೌರ್ಜನ್ಯವೆಸಗುತ್ತಿದೆ. ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸಿಕೊಳ್ಳಲು ದೆಹಲಿಗೆ ಹೊರಡುತ್ತಿರುವ ರೈತರನ್ನು ಹತ್ತಿಕ್ಕಿ, ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದೆ

ಬಳ್ಳಾರಿ: ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಅಖಿಲ ಭಾರತ ಮುಷ್ಕರ ಹಾಗೂ ಗ್ರಾಮೀಣ ಬಂದ್ ಅಂಗವಾಗಿ ನಗರದಲ್ಲಿ ರೈತ ಹಾಗೂ ಕಾರ್ಮಿಕ ಸಂಘಟನೆಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾದರೂ ಚುನಾವಣೆ ಮುನ್ನ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿಲ್ಲ. 2 ಕೋಟಿ ಉದ್ಯೋಗದ ಸೃಷ್ಟಿಯಾಗಲಿಲ್ಲ. ಬೆಲೆ ಏರಿಕೆ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಡಾ. ಸ್ವಾಮಿನಾಥನ್ ರವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸಲಿಲ್ಲ. ಒಂದೆಡೆ ಭರವಸೆ ನೀಡಿ ಜನರ ನಿರೀಕ್ಷೆ ಹುಸಿಗೊಳಿಸಿರುವ ಕೇಂದ್ರ ಸರ್ಕಾರ ಇನ್ನೊಂದೆಡೆ ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಹೋರಾಡುತ್ತಿರುವ ರೈತರ ಮೇಲೆ ದೌರ್ಜನ್ಯವೆಸಗುತ್ತಿದೆ. ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸಿಕೊಳ್ಳಲು ದೆಹಲಿಗೆ ಹೊರಡುತ್ತಿರುವ ರೈತರನ್ನು ಹತ್ತಿಕ್ಕಿ, ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇಲ್ಲಿನ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಹೊರಟ ವಿವಿಧ ಕಾರ್ಮಿಕ ಹಾಗೂ ರೈತ ಸಂಘಟನೆಗಳ ಮುಖಂಡರು ಹಾಗೂ ಸದಸ್ಯರು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು. ಸಿಐಟಿಯು ಜಿಲ್ಲಾಧ್ಯಕ್ಷ ಜೆ.ಸತ್ಯಬಾಬು, ಎಐಯುಟಿಯುಸಿ ಜಿಲ್ಲಾಧ್ಯಕ್ಷ ಎ. ದೇವದಾಸ್, ಐಎನ್‌ಟಿಯುಸಿ ಜಿಲ್ಲಾಧ್ಯಕ್ಷ ಕೆ. ತಾಯಪ್ಪ, ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎ. ಆದಿಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್. ಶಿವಶಂಕರ್, ಎಐಕೆಕೆಎಂಎಸ್‌ನ ಜಿಲ್ಲಾ ಕಾರ್ಯದರ್ಶಿ ರಾಜಾ ಗುರ್ರಳ್ಳಿ, ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸಂಗನಕಲ್ಲು ಕೃಷ್ಣ, ಜಿಲ್ಲಾಧ್ಯಕ್ಷ ಲೇಪಾಕ್ಷಿ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ. ಪ್ರಮೋದ್, ಜಿಲ್ಲಾ ಉಪಾಧ್ಯಕ್ಷೆ ಎ. ಶಾಂತಾ ಸೇರಿದಂತೆ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share this article