ಹಾಸ್ಟೆಲ್‌ಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

KannadaprabhaNewsNetwork |  
Published : Nov 16, 2026, 02:15 AM IST
ವಿದ್ಯಾರ್ಥಿನಿಯರ ಹಾಸ್ಟೆಲ್‌ಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಹಾವೇರಿ ತಾಲೂಕಿನ ಕೆರಿಮತ್ತಿಹಳ್ಳಿ ಬಳಿಯ ಬಿಸಿಎಂ ಮಹಿಳಾ ವಿದ್ಯಾರ್ಥಿನಿಲಯ ಸೇರಿದಂತೆ ನಗರದ ಹೊರವಲಯದಲ್ಲಿರುವ ಮಹಿಳಾ ಹಾಸ್ಟೆಲ್‌ಗಳ ಸುತ್ತಮುತ್ತ ಅಪರಿಚಿತ ವ್ಯಕ್ತಿಯೊಬ್ಬ ಕಳೆದ ಎರಡು-ಮೂರು ತಿಂಗಳಿಂದ ಅನುಚಿತವಾಗಿ ವರ್ತಿಸುತ್ತಿದ್ದು, ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಹಾವೇರಿ: ತಾಲೂಕಿನ ಕೆರಿಮತ್ತಿಹಳ್ಳಿ ಬಳಿಯ ಬಿಸಿಎಂ ಮಹಿಳಾ ವಿದ್ಯಾರ್ಥಿನಿಲಯ ಸೇರಿದಂತೆ ನಗರದ ಹೊರವಲಯದಲ್ಲಿರುವ ಮಹಿಳಾ ಹಾಸ್ಟೆಲ್‌ಗಳ ಸುತ್ತಮುತ್ತ ಅಪರಿಚಿತ ವ್ಯಕ್ತಿಯೊಬ್ಬ ಕಳೆದ ಎರಡು-ಮೂರು ತಿಂಗಳಿಂದ ಅನುಚಿತವಾಗಿ ವರ್ತಿಸುತ್ತಿದ್ದು, ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಹಾಸ್ಟೆಲ್‌ಗಳ ಸುತ್ತಮುತ್ತ ಜನಸಂಚಾರ ಕಡಿಮೆ ಇರುವ ಸಮಯದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಟಾರ್ಚ್ ಆನ್ ಮಾಡಿಕೊಂಡು ಖಾಸಗಿ ಅಂಗ ಪ್ರದರ್ಶಿಸುವುದು, ವಿದ್ಯಾರ್ಥಿನಿಯರತ್ತ ಅಸಭ್ಯ ಸನ್ನೆ ಮಾಡುವುದು ಹಾಗೂ ಕಲ್ಲು ಎಸೆಯುವ ಮೂಲಕ ಭಯದ ವಾತಾವರಣ ಸೃಷ್ಟಿಸುತ್ತಿದ್ದಾನೆ ಎಂದು ವಿದ್ಯಾರ್ಥಿನಿಯರು ದೂರಿದರು. ಇಂತಹ ಘಟನೆಗಳಿಗೆ ಸಂಬಂಧಿಸಿದ ವಿಡಿಯೋ ಕೂಡ ಲಭ್ಯವಾಗಿದ್ದು, ಕೂಡಲೇ ವ್ಯಕ್ತಿಯನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಭದ್ರತಾ ವ್ಯವಸ್ಥೆಯೇ ಇಲ್ಲ: ಹಾಸ್ಟೆಲ್‌ಗಳ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳಿಲ್ಲ. ರಾತ್ರಿ ವೇಳೆ ಕಾವಲು ಕಾಯಲು ಭದ್ರತಾ ಸಿಬ್ಬಂದಿಯೂ ಇಲ್ಲ. ಇದರಿಂದ ವಿದ್ಯಾರ್ಥಿನಿಯರ ಸುರಕ್ಷತೆ ಪ್ರಶ್ನೆಯಾಗಿದೆ. ಅಲ್ಲದೆ, ಹಾಸ್ಟೆಲ್ ಕೊಠಡಿಗಳಲ್ಲಿ ಮಲಗಲು ಹಾಸಿಗೆಗಳ ಕೊರತೆ, ವಿದ್ಯುತ್ ಕಡಿತದ ಸಂದರ್ಭದಲ್ಲಿ ಉಂಟಾಗುವ ತೊಂದರೆ ಸೇರಿದಂತೆ ಮೂಲಸೌಕರ್ಯಗಳ ಸಮಸ್ಯೆಯೂ ಇದೆ. ಕಿರುಕುಳ ಹಾಗೂ ಸೌಲಭ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮೊಟಕುಗೊಳಿಸಿ ಮನೆಗೆ ತೆರಳುವ ಯೋಚನೆ ಮಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಮಹಿಳಾ ವಿದ್ಯಾರ್ಥಿನಿಯರು ವಾಸಿಸುವ ಹಾಸ್ಟೆಲ್‌ಗಳ ಸುತ್ತಮುತ್ತ ಇಂತಹ ಘಟನೆಗಳು ನಡೆಯುತ್ತಿರುವುದು ಗಂಭೀರ ಸಂಗತಿಯಾಗಿದೆ. ವಿದ್ಯಾರ್ಥಿನಿಯರಿಗೆ ಭಯಮುಕ್ತ ವಾತಾವರಣ ಕಲ್ಪಿಸುವುದು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳ ಜವಾಬ್ದಾರಿಯಾಗಿದೆ. ಕೂಡಲೇ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕಿರುಕುಳ ನೀಡುತ್ತಿರುವ ವ್ಯಕ್ತಿಯನ್ನು ಪತ್ತೆಹಚ್ಚಬೇಕು. ಹಾಸ್ಟೆಲ್‌ಗಳಿಗೆ ಸಿಸಿಟಿವಿ ಕ್ಯಾಮೆರಾ, ರಾತ್ರಿ ಕಾವಲು ಸಿಬ್ಬಂದಿ ಸೇರಿದಂತೆ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಅರುಣಕುಮಾರ ನಾಗವತ್ ಮಾತನಾಡಿ, ವಿದ್ಯಾರ್ಥಿನಿಯರು ಶಿಕ್ಷಣ ಪಡೆಯಲು ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿದ್ದು, ಅವರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕಳೆದ ಎರಡು-ಮೂರು ತಿಂಗಳಿಂದ ಕಿರುಕುಳದ ಘಟನೆಗಳು ನಡೆಯುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಆತಂಕಕಾರಿ. ವಿದ್ಯಾರ್ಥಿನಿಯರು ಪ್ರತಿಭಟನೆಗೆ ಇಳಿಯುವ ಪರಿಸ್ಥಿತಿ ಬರಬಾರದು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಬಿಸಿಎಂ ಇಲಾಖೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ತಪ್ಪಿತಸ್ಥನನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸುವುದರ ಜತೆಗೆ ಹಾಸ್ಟೆಲ್‌ಗಳಿಗೆ ಅಗತ್ಯ ಮೂಲಸೌಕರ್ಯ ಮತ್ತು ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ಹಾಸ್ಟೆಲ್ ನ ವಿದ್ಯಾರ್ಥಿನಿಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರಲ್ಲಿ ದೇಶಪ್ರೇಮ, ಸಾಮಾಜಿಕ ಹೊಣೆ ಮೇಳೈಸಲಿ
ಹಿಂದೂ ಅಲ್ಪ ಸಂಖ್ಯಾತರಾದರೆ ಅಪಾಯ ಕಟ್ಟಿಟ್ಟ ಬುತ್ತಿ: ಕೃಷ್ಣಾನಂದ ಕಾಮತ್‌