ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಹಿಂದೂ ಜಾಗರಣಾ ವೇದಿಕೆಯ ಚಂದನ್ ನೇತೃತ್ವದಲ್ಲಿ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಡಿವೈಎಸ್ಪಿ ಕಚೇರಿ ಎದುರು ಆಗಮಿಸಿ ಗಲಭೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗಲಭೆಕೋರರಿಗೆ ಲಾಠಿ ರುಚಿ ತೋರಿಸಬೇಕಾಗಿದ್ದ ಪೊಲೀಸರು ಪ್ರತಿಭಟನಾನಿರತ ಹಿಂದೂ ಕಾರ್ಯಕರ್ತರು ಹಾಗೂ ಮಹಿಳೆಯರು, ಮಕ್ಕಳ ಮೇಲೆ ತೋರಿಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.ಗಣೇಶನನ್ನು ಕೂರಿಸುವುದು, ಪೂಜಿಸುವುದು, ಮೆರವಣಿಗೆ ಮೂಲಕ ವಿಸರ್ಜಿಸುವುದು ನಮ್ಮ ಹಿಂದೂ ಸಂಪ್ರದಾಯದಲ್ಲಿ ತಲ ತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದೀಗ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು, ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ತೋರಲು ಮುಂದಾಗುತ್ತಿದೆ ಎಂದು ಕಿಡಿಕಾರಿದರು.
ಗಲಭೆಕೋರರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳದೆ ಹೋದರೆ ಮುಂದಾಗುವ ಎಲ್ಲಾ ಅಹಿತಕರ ಘಟನೆಗಳಿಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯೇ ನೇರ ಹೊಣೆ ಎಂದು ತಿಳಿಸಿ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರಿಗೆ ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಜಿ.ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ, ವಕೀಲರಾದ ಬಾಲ್ ರಾಜ್, ರವೀಶ್, ಸಿದ್ದೇಶ್, ಪುರಸಭೆ ಸದಸ್ಯ ಶ್ರೀನಿವಾಸ್, ಹಿಂದೂ ಜಾಗರಣಾ ವೇಧಿಕೆಯ ಸನತ್, ಹರ್ಷ, ಸೋಮಶೇಖರ್, ಮದನ್ ಸೇರಿದಂತೆ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಇದ್ದರು.