ನೇಹಾ ಹತ್ಯೆ ಖಂಡಿಸಿ ಸಂಘಟನೆಗಳಿಂದ ಪ್ರತಿಭಟನೆ

KannadaprabhaNewsNetwork | Published : Apr 23, 2024 12:51 AM

ಸಾರಾಂಶ

ನೇಹಾ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಹಲವು ಹೇಯ ಕೃತ್ಯಗಳು ನಡೆದಿದ್ದು, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಪಾಲಿಸುವಲ್ಲಿ, ಹಿಂದೂಗಳಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ.

ಹುಬ್ಬಳ್ಳಿ:

ವಿದ್ಯಾರ್ಥಿನಿ ನೇಹಾ ಹತ್ಯೆಗೆ ಸೋಮವಾರವೂ ಹಲವು ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದವು. ಶ್ರೀರಾಮಸೇನೆ, ಎಬಿವಿಪಿ, ಆಮ್‌ ಆದ್ಮಿ ಪಾರ್ಟಿ, ಸಾಮರಸ್ಯ ವೇದಿಕೆ, ರತ್ನ ಭಾರತ ರೈತ ಸಮಾಜ ಬಾಂಧವರು ಪ್ರತಿಭಟನೆ ನಡೆಸಿದರು.

ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮಾವೇಶಗೊಂಡ ಶ್ರೀರಾಮಸೇನಾ ಕಾರ್ಯಕರ್ತರು ಆರೋಪಿ ಫಯಾಜ್‌ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ನೇಹಾ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಹಲವು ಹೇಯ ಕೃತ್ಯಗಳು ನಡೆದಿದ್ದು, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಪಾಲಿಸುವಲ್ಲಿ, ಹಿಂದೂಗಳಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ತಕ್ಷಣ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಶ್ರೀರಾಮಸೇನಾ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜು ಕಾಟಕರ್, ಪ್ರವೀಣ್ ಮಾಳದಕರ, ಬಸವರಾಜ್ ಗೌಡರ ಸೇರಿ ಹಲವರಿದ್ದರು.

ಎಬಿವಿಪಿಯಿಂದ ಆಕ್ರೋಶ:

ಲವ್‌ ಜಿಹಾದ್‌ಗಾಗಿ ನೇಹಾಳ ಭೀಕರ ಹತ್ಯೆ ಮಾಡಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ನಗರದ ಬಿವಿಬಿ ಕಾಲೇಜು ಎದುರು ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ, ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.

ಎಬಿವಿಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ್, ಮಣಿಕಂಠ ಕಳಸ, ನಾಗರಾಜ, ರಮೇಶ, ಶಿವು ಹಿರೇಮಠ, ಸಿದ್ಧಾರ್ಥ ಕೋರಿ, ರಾಘವೇಂದ್ರ, ಶಶಿ ಆರ್. ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಹಸೀಲ್ದಾರಗೆ ಮನವಿ:

ರತ್ನ ಭಾರತ ರೈತ ಸಮಾಜ ಹಾಗೂ ಸಾಮರಸ್ಯ ವೇದಿಕೆಯ ಪದಾಧಿಕಾರಿಗಳು ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಆಮ್‌ ಆದ್ಮಿ ಪಾರ್ಟಿಯ ಕಾರ್ಯಕರ್ತರು ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮೇಣದಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು.

Share this article