ಹಾವೇರಿ: ಬೆಳಗಾವಿಯಲ್ಲಿ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದಿಂದ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆಸಿರುವುದನ್ನು ವಿರೋಧಿಸಿ ಹಾಗೂ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪಂಚಮಸಾಲಿ ಸಮಾಜದ ಬಾಂಧವರು ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿಯಲ್ಲಿ ಮಂಗಳವಾರ ನಡೆದ ಹೋರಾಟದ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ಕಲ್ಲು ತೂರುವ ಮೂಲಕ ಹೋರಾಟದ ದಿಕ್ಕು ತಪ್ಪಿಸುವ ಮತ್ತು ಸಮಾಜಕ್ಕೆ ಕಪ್ಪು ಚುಕ್ಕೆ ತರುವ ಕೆಲಸ ಮಾಡಿದ್ದಾರೆ. ಸರ್ಕಾರ ಇಡೀ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಸಮಾಜಕ್ಕೆ ಎದುರಾದ ಕಪ್ಪುಚುಕ್ಕೆ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.
ಘಟನೆಯಲ್ಲಿ ಅಮಾಯಕರ ಮೇಲೆ ಹಲ್ಲೆ ಮಾಡಿ ಬಂಧಿಸಿ ಪ್ರಕರಣ ದಾಖಲಿಸಿರುವ ಸರ್ಕಾರದ ಕ್ರಮ ಪ್ರಜಾತಂತ್ರ ವಿರೋಧಿಯಾಗಿದೆ. ಮುಖ್ಯಮಂತ್ರಿಗಳು ಪಂಚಮಸಾಲಿ ಸಮಾಜದ ಮನವಿಗೆ ಸ್ಪಂದಿಸದೇ ಪ್ರತಿಭಟನೆಯನ್ನು ವಿಫಲಗೊಳಿಸುವ ಪ್ರಯತ್ನ ಮಾಡಿ ಸಮಾಜಕ್ಕೆ ಅನ್ಯಾಯ ಎಸಗಿದೆ ಎಂದು ದೂರಿದರು.ತಾಲೂಕಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಮಾತನಾಡಿ, ಪಂಚಮಸಾಲಿ ಸಮಾಜ ಮೀಸಲಾತಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದೇ ಅನ್ಯಾಯ ಎಸಗುತ್ತಿದೆ. ಪ್ರತಿಭಟನೆ ವೇಳೆ ಪೊಲೀಸರ ಮೂಲಕ ಸರ್ಕಾರ ಲಾಠಿ ಚಾರ್ಜ್ ಮಾಡಿಸಿ ಹೋರಾಟ ಹತ್ತಿಕ್ಕಲು ಮುಂದಾಗಿದ್ದು ಖಂಡನೀಯ. ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಹೋರಾಟಗಾರರ ವಿರುದ್ಧ ಎಲ್ಲ ಪ್ರಕರಣ ರದ್ದುಪಡಿಸಬೇಕು. ಸರ್ಕಾರವೇ ಗಾಯಾಳುಗಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಬೇಕು. ಮುಂದೆ ಈ ರೀತಿಯಲ್ಲಿ ಎಲ್ಲಿಯೂ ಆಗದಂತೆ ಸರ್ಕಾರ ಜಾಗ್ರತೆ ವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.