ಕನ್ನಡಪ್ರಭ ವಾರ್ತೆ ಹಾಸನ
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಚ್. ಆರ್. ನವೀನ್ ಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಮತದಾರರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ದೇಶವ್ಯಾಪಿ ಜನಾಂದೋಲನ ರೂಪಿಸುವ ಅಗತ್ಯವಿದೆ. ದೆಹಲಿಯಲ್ಲಿ ಎಡಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿವಿಧ ಜನಪರ ಸಂಘಟನೆಗಳು ಒಗ್ಗೂಡಿ ಚುನಾವಣಾ ಆಯೋಗದ ಮುಖ್ಯ ಆಯುಕ್ತರನ್ನು ವಜಾಗೊಳಿಸಬೇಕು ಮತ್ತು ದೇಶದ ಪ್ರಜಾಪ್ರಭುತ್ವದ ಹಕ್ಕುಗಳನ್ನು ಸಂರಕ್ಷಿಸಬೇಕು ಎಂದರು. ದೇಶಾದ್ಯಂತ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವಂತಹ ಕ್ರಮಗಳು ನಡೆಯುತ್ತಿವೆ ಎಂಬ ಆತಂಕ ಜನರಲ್ಲಿ ಮೂಡಿದೆ. ಮತದಾರರ ಹಕ್ಕುಗಳನ್ನು ರಕ್ಷಿಸಬೇಕಾದ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆಯೇ ಪ್ರಶ್ನೆಗಳು ಎದ್ದಿರುವುದು ಗಂಭೀರ ವಿಚಾರವಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಖಾತರಿಪಡಿಸುವುದು ಆಯೋಗದ ಜವಾಬ್ದಾರಿಯಾಗಿದ್ದು, ಮತದಾರರ ಹಕ್ಕುಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದೆಹಲಿಯಲ್ಲಿ ವಿವಿಧ ಎಡಪಕ್ಷಗಳು, ಬಿಜೆಪಿ ವಿರೋಧಿ ಸಂಘಟನೆಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಒಗ್ಗೂಡಿ ಪ್ರತಿಭಟನೆ ನಡೆಸಿವೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭಾರಿ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿ, ಬಂಧನದ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ರಾಜಧಾನಿ ದೆಹಲಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾದಂತೆ ಭದ್ರತಾ ವ್ಯವಸ್ಥೆ ಕಲ್ಪಿಸಿ, ಸುಮಾರು ೨೨ ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂಬ ಆರೋಪಗಳಿವೆ. ಪ್ರತಿಭಟನಾಕಾರರನ್ನು ಬೆಳಗ್ಗಿನಿಂದಲೇ ಬಂಧಿಸುವ ಕ್ರಮವು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ. ಜನರು ಮತ್ತು ಯುವಜನರು ಎತ್ತುತ್ತಿರುವ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವುದು ಕೇಂದ್ರ ಸರ್ಕಾರದ ಆತಂಕವನ್ನು ತೋರಿಸುತ್ತದೆ ಎಂದು ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ಜನರ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಪೊಲೀಸ್ ಬಲವನ್ನು ಬಳಸಿಕೊಂಡು ಹೋರಾಟಗಳನ್ನು ಹತ್ತಿಕ್ಕಲು ಮುಂದಾಗುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ನಾಗರಿಕರ ಹಕ್ಕಾಗಿದ್ದು, ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವವರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರದ ಇಂತಹ ಕ್ರಮಗಳನ್ನು ವಿರೋಧಿಸುವುದು ಕೇವಲ ಒಂದು ಸಂಘಟನೆಯ ಜವಾಬ್ದಾರಿಯಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿರುವ ಎಲ್ಲ ರಾಜಕೀಯ ಪಕ್ಷಗಳು, ಜನಪರ ಸಂಘಟನೆಗಳು, ಸಾಹಿತಿಗಳು, ಕಲಾವಿದರು ಹಾಗೂ ಚಳವಳಿಗಾರರು ಒಗ್ಗೂಡಿ ಪ್ರತಿರೋಧ ವ್ಯಕ್ತಪಡಿಸಬೇಕು. ಯಾವುದೇ ಕಾರಣಕ್ಕೂ ಒಬ್ಬ ನಾಗರಿಕನ ಮತದಾನದ ಹಕ್ಕಿಗೂ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು. ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲಾದ ಎಲ್ಲ ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು. ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಹಾಸನದಲ್ಲಿಯೂ ಸಿಪಿಎಂ, ಸಿಪಿಐ ಸೇರಿದಂತೆ ವಿವಿಧ ಜನಪರ ಸಂಘಟನೆಗಳು, ಸಾಹಿತಿಗಳು, ಕಲಾವಿದರು ಮತ್ತು ಚಳವಳಿಗಾರರು ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಖಂಡಿಸಿ ತಮ್ಮ ಪ್ರತಿರೋಧ ವ್ಯಕ್ತಪಡಿಸಿದ್ದಾರೆ ಎಂದು ಎಚ್.ಆರ್. ನವೀನ್ ಕುಮಾರ್ ತಿಳಿಸಿದರು.ಪ್ರತಿಭಟನೆಯಲ್ಲಿ ಸಾಹಿತಿ ರೂಪ ಹಾಸನ್, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಡಿವೈಎಫೈ ಜಿಲ್ಲಾ ಸಂಚಾಲಕ ಪೃಥ್ವಿ ಎಂ.ಜಿ., ಅರವಿಂದ್, ಸಿಪಿಐಎಂ ಮುಖಂಡ ಎಂ.ಸಿ. ಡೋಂಗ್ರೆ, ಎಂ.ಪಿ. ಪುಷ್ಪ, ಇರ್ಷಾದ್ ಅಹಮದ್ ದೇಸಾಯಿ, ಪರಮಶಿವಯ್ಯ, ಮಂಜು, ಹಂಸಿನಿ, ಅರ್ಹರ್ನಿಷಿ, ಅನ್ಸರ್ ಇತರರು ಉಪಸ್ಥಿತರಿದ್ದರು.
ಫೋಟೋ