ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

KannadaprabhaNewsNetwork | Published : Mar 29, 2025 12:38 AM

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಶುಕ್ರವಾರ ನಗರದ ಜನರಲ್ ಕಾರ್ಯಪ್ಪ ವೃತ್ತದಲ್ಲಿ ಪಂಚಮಸಾಲಿ ಸಮಾಜ ಮತ್ತು ವಿವಿಧ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು.

ಗದಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಶುಕ್ರವಾರ ನಗರದ ಜನರಲ್ ಕಾರ್ಯಪ್ಪ ವೃತ್ತದಲ್ಲಿ ಪಂಚಮಸಾಲಿ ಸಮಾಜ ಮತ್ತು ವಿವಿಧ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು.

ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಹಿಂದುತ್ವದ ಉಳಿವಿಗಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಅವರನ್ನೇ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ಬೇಸರದ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರತಿಭಟನೆಯಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಭಾವಚಿತ್ರಗಳಿಗೆ ಚಪ್ಪಲಿ ಏಟು‌ ನೀಡಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದರು.

ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆಗೆ ಪಂಚಮಸಾಲಿ ಸಮಾಜ ಅಸಮಾಧಾನ ವ್ಯಕ್ತಪಡಿಸಿದೆ. ಯತ್ನಾಳರನ್ನು ಹಿಂದುತ್ವ ಪರ ಧೋರಣೆಗಳು ಮತ್ತು ಸಮಾಜದ ಹಿತಕ್ಕಾಗಿ ಹೋರಾಟ ಮಾಡಿದ್ದಕ್ಕಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಸಂಘಟನೆ ಮುಖಂಡರು ಆರೋಪಿಸಿದರು.

ಪ್ರತಿಭಟನೆ ನಡುವೆ‌ ಪಂಚಮಸಾಲಿ ಸಂಘಟನೆ ಮುಖಂಡರು ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾದ ಘಟನೆ ಕೂಡ ಜರುಗಿತು. ಪೊಲೀಸರು ಮಧ್ಯಪ್ರವೇಶಿಸಿ ಕೃತ್ಯವನ್ನು ತಡೆಯುವಲ್ಲಿ ಯಶಸ್ವಿಯಾದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.ಪಂಚಮಸಾಲಿ ಮುಖಂಡರು ಯತ್ನಾಳ ಉಚ್ಚಾಟನೆಯನ್ನ ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದ್ದಾರೆ. ಹಿಂದುತ್ವ ಪರ ನಿಲುವುಗಳನ್ನು ತಳ್ಳಿಹಾಕಲು ಯತ್ನಾಳರನ್ನು ರಾಜಕೀಯವಾಗಿ ತೊಡೆದು ಹಾಕಲಾಗಿದೆ ಎಂದು ಆರೋಪಿಸಿರುವ ಮುಖಂಡರು ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.

ಸಂಗಮೇಶ ಅಂಗಡಿ, ಬಸವರಾಜ ಮನಗುಂಡಿ, ಬಸವರಾಜ ಅನಗವಾಡಿ, ನಾಗರಾಜ ಗುರಿಕಾರ, ಮಂಜುನಾಥ ಗುಡದೂರ, ಈರಮ್ಮ ತಾಳಿಕೋಟಿ, ಪ್ರಶಾಂತ ಚವಡಿ ಭಾಗವಹಿಸಿದ್ದರು.

Share this article